ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ

ಬೆಂಗಳೂರು: ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಸಂಬಂಧ ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ನಾಯಕರ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶೇ.7.5 ಕ್ಕೆ ಮೀಸಲಾತಿಯನ್ನು ಹೆಚ್ಚಿಸಬೇಕು ಎಂಬುದು ಎಸ್‌ಟಿ ಸಮುದಾಯವರ ಬೇಡಿಕೆಯಾಗಿದೆ. ಅವರ ಜನಸಂಖ್ಯೆಯೂ ಹೆಚ್ಚಾಗಿದೆ. ಹಿಂದಿನ ಸರ್ಕಾರ ಈ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಮಿತಿ ವರದಿ ಸಲ್ಲಿಸಿದೆ. ವರದಿಯಲ್ಲಿ ಎಸ್‌ಸಿ ಮತ್ತು ಎಸ್‌ಟಿಗೆ ಮೀಸಲಾತಿ ಹೆಚ್ಚಿಸಬೇಕೆಂದು ಶಿಫಾರಸು ಮಾಡಲಾಗಿದೆ. ಅದರಂತೆ ನಿರ್ಣಯ ತೆಗೆದುಕೊಳ್ಳಬೇಕು ಎಂದರು. ಇದನ್ನೂ ಓದಿ: ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ, ಸ್ಥಳೀಯ ಸಂಸ್ಥೆಗಳಲ್ಲಿ ಚುನಾವಣೆ: ಸಿಎಂ

ನ್ಯಾಯಮೂರ್ತಿ ನಾಗಮೋಹನ ದಾಸ್ ಸಮಿತಿ ವರದಿ, ಮಹಾರಾಷ್ಟ್ರದ ಜಯಶ್ರೀ ಪಾಟೀಲ್ ಪ್ರಕರಣ, ಇಂದಿರಾ ಸಹಾನಿ ಪ್ರಕರಣಗಳ ತೀರ್ಪುಗಳ ಹಿನ್ನೆಲೆಯಲ್ಲಿ ಹಾಗೂ ನ್ಯಾಯಮೂರ್ತಿ ಸುಭಾಷ್ ಅಡಿ ಅವರಿಂದಲೂ ಮಧ್ಯಂತರ ವರದಿ ಪಡೆದು ಈ ಜನಾಂಗಕ್ಕೆ ಮೀಸಲಾತಿ ಹೆಚ್ಚು ಮಾಡುವ ಮೂಲಕ ನ್ಯಾಯವನ್ನು ಕೊಡಬೇಕೆಂಬ ತೀರ್ಮಾನವಾಗಿದೆ ಎಂದು ಹೇಳಿದರು.

ಮೀಸಲಾತಿ ಕೊಡುವುದಾದರೆ ಸಂವಿಧಾನಾತ್ಮಕವಾಗಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ನೀಡಬೇಕು. ಆ ನಿಟ್ಟಿನಲ್ಲಿ ಕೂಡಲೇ ಅಡ್ವೊಕೇಟ್ ಜನರಲ್ ಅವರಿಗೆ ಮೂರೂ ವರದಿಗಳ ಬಗ್ಗೆ ವರದಿ ನೀಡಲು ತಿಳಿಸಲಾಗಿದೆ. ಅದನ್ನು ಸರ್ವ ಪಕ್ಷಗಳ ಸಭೆಯಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದರು. ಇದನ್ನೂ ಓದಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ

2ಎ ವರ್ಗಕ್ಕೆ ಸೇರಿರುವ ಕುರುಬ ಸಮಾಜದವರು ಪರಿಶಿಷ್ಟ ಪಂಗಡಕ್ಕೆ ಸೇರಬೇಕೆಂಬ ಬೇಡಿಕೆ ಇದೆ. ಕೆಲವರು 3ಬಿ ನಲ್ಲಿರುವವರು 2ಎ ವರ್ಗಕ್ಕೆ ಸೇರಬೇಕು, 3ಬಿನಲ್ಲಿ ಇಲ್ಲದವರು, 3ಬಿ ವರ್ಗಕ್ಕೆ ಸೇರಬೇಕು ಎಂಬ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ಹಂತ ಹಂತವಾಗಿ ನಾವು ಮುಂದುವರಿಯಬೇಕು. ಮೂಲಭೂತವಾಗಿ ಶೇ.50 ದಾಟಬೇಕೋ, ದಾಟಿದರೆ ಕಾನೂನಿನ ರೀತಿ ಹೇಗೆ ಮಾಡಬೇಕು ಎನ್ನುವ ವಿಚಾರವಿದೆ. ಮೊದಲು ನಾಗಮೋಹನ್ ದಾಸ್ ವರದಿ ಆಧಾರದ ಮೇಲೆ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ಆದಷ್ಟು ಶೀಘ್ರವಾಗಿ ನ್ಯಾಯಮೂರ್ತಿ ಸುಭಾಷ್ ಅಡಿಯವರ ವರದಿಯನ್ನು ಪಡೆದು, ನಂತರ ಸರ್ವಪಕ್ಷ ಸಭೆಯ ಮುಂದಿಡಲಾಗುವುದು. ನಂತರ ವಿಧಾನಸಭೆಯಲ್ಲಿ ಮಂಡಿಸಿ ನ್ಯಾಯ ಒದಗಿಸುವ ತೀರ್ಮಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಇಂದಿನ ಸಭೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ನ್ಯಾಯ ಒದಗಿಸುವ ಬಗ್ಗೆ ಒಮ್ಮತದ ಅಭಿಪ್ರಾಯ ಮೂಡಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

Comments

Leave a Reply

Your email address will not be published. Required fields are marked *