ಕಾವೇರಿ ಸಮಸ್ಯೆ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ದೇವೇಗೌಡರಿಂದ ಪತ್ರ; ಸಿದ್ದರಾಮಯ್ಯ ಶ್ಲಾಘನೆ

ಬೆಂಗಳೂರು: ಕೃಷ್ಣರಾಜಸಾಗರ ಜಲಾಶಯದಿಂದ (KRS Reservoir) ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ವಿವಾದಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು (HD Devegowda) ಪತ್ರ ಬರೆದಿದ್ದಾರೆ. ದೊಡ್ಡಗೌಡರ ಈ ನಡೆಯನ್ನು ಸಿಎಂ ಸಿದ್ದರಾಮಯ್ಯ (Siddaramaiah) ಶ್ಲಾಘಿಸಿದ್ದಾರೆ.

ಕಾವೇರಿ ನೀರು (Cauvery Water) ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ದೇವೇಗೌಡರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಟ್ವಿಟ್ಟರ್‌ (X) ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಶಾಸಕ ನಾರಾಯಣಸ್ವಾಮಿ, ಸಂಸದ ಮುನಿಸ್ವಾಮಿ ನಡುವೆ ಜಟಾಪಟಿ- ಅಧಿಕಾರಿಗಳು, ಸಾರ್ವಜನಿಕರಿಗೆ ಪುಕ್ಕಟೆ ಮನರಂಜನೆ

ಸಿಎಂ ಟ್ವೀಟ್‌ನಲ್ಲಿ ಏನಿದೆ?
ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ (Narendra Modi) ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದೊಂದೇ ಪರಿಣಾಮಕಾರಿ ಮತ್ತು ಈ ಸಂದರ್ಭಕ್ಕನುಗುಣವಾದ ಪರಿಹಾರವಾಗಿದೆ. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ.

ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್.ಡಿ.ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು. ಅತೀ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನಿಗಳು ಭೇಟಿಮಾಡುವಂತೆ ಮಾಡಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ. ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡಾ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ.

ಮಳೆ ಕೊರತೆಯಿಂದಾಗಿ ಉದ್ಭವವಾಗಿರುವ ಕಾವೇರಿ ನೀರು ಹಂಚಿಕೆ ವಿವಾದವನ್ನು ರಾಜ್ಯದ ರೈತರ ಹಿತರಕ್ಷಣೆಗೆ ಅಡ್ಡಿಯಾಗದಂತೆ ಬಗೆಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ವಿವಾದ ಈಗ ನ್ಯಾಯಾಂಗ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಂಗಳದಲ್ಲಿರುವುದರಿಂದ ಸಂವಿಧಾನಕ್ಕೆ ಬದ್ಧವಾಗಿರುವ ಸರ್ಕಾರ ಜವಾಬ್ದಾರಿಯುತವಾಗಿ ವರ್ತಿಸಬೇಕಾಗುತ್ತದೆ. ಇದನ್ನೂ ಓದಿ: ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ಈದ್ ಮಿಲಾದ್‍ಗೆ ಕಡ್ಡಾಯ ರಜೆ ಬ್ಯಾನರ್: ವ್ಯಾಪಕ ಆಕ್ರೋಶ

ನೆಲ-ಜಲ-ಭಾಷೆಯ ಹಿತರಕ್ಷಣೆಯ ವಿಷಯ ಬಂದಾಗ ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ನಾವೆಲ್ಲ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು. ಕಾವೇರಿ ನದಿ ನೀರಿನ ವಿವಾದ ಇದೇ ಮೊದಲ ಸಲ ಹುಟ್ಟಿಕೊಂಡದ್ದಲ್ಲ. ದಶಕಗಳ ಕಾಲದಿಂದ ಇದು ನಡೆಯುತ್ತಿದೆ. ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿರುವುದು ಕೂಡಾ ಸತ್ಯ ಮತ್ತು ಸ್ಪಷ್ಟವಾಗಿದೆ. ಈಗ ನನ್ನ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆಯಲ್ಲಿ ಯಾಕೆ ಇದೇ ಮಾತು ಹೇಳಿಲ್ಲ?

ಹಿಂದೆಲ್ಲ ಕಾವೇರಿ ನದಿನೀರಿನ ವಿವಾದ ಹುಟ್ಟಿಕೊಂಡಾಗ ಎಲ್ಲ ರಾಜಕೀಯ ಪಕ್ಷಗಳು ತಮ್ಮ ನಡುವಿನ ಭಿನ್ನಾಭಿಪ್ರಾಯವನ್ನು ಪಕ್ಕಕ್ಕಿಟ್ಟು ಒಗ್ಗಟ್ಟಿನಿಂದ ನಡೆದುಕೊಂಡಿವೆ. ಈ ವರೆಗಿನ ಎಲ್ಲ ಪಕ್ಷಗಳ ಸರ್ಕಾರಗಳು ಅನಿವಾರ್ಯವಾಗಿ ನ್ಯಾಯಾಲಯದ ಆದೇಶ ಪಾಲನೆ ಮಾಡಿರುವ ಇತಿಹಾಸ ಕೂಡಾ ನಮ್ಮ ಕಣ್ಣ ಮುಂದಿದೆ. ಈಗಿನ ವಿವಾದವನ್ನು ರಾಜ್ಯದ ಹಿತ ಮತ್ತು ನ್ಯಾಯಾಂಗದ ಗೌರವಕ್ಕೆ ಧಕ್ಕೆಯಾಗದಂತೆ ಸೂಕ್ಷ್ಮವಾಗಿ ನಿರ್ವಹಿಸಬೇಕಾಗಿದೆ. ರಾಜ್ಯ ಸರ್ಕಾರ ಆ ಪ್ರಯತ್ನದಲ್ಲಿದೆ. ನಾವು ಈಗಾಗಲೇ ಕಾನೂನು ಮತ್ತು ನೀರಾವರಿ ತಜ್ಞರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಅವರ ಸಲಹೆ ಮೇರೆಗೆ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದು ಬರೆದುಕೊಂಡಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]