ದೀಪಾವಳಿ: ನಂಜನಗೂಡಿನಲ್ಲಿ ಗೋಪೂಜೆ ಮಾಡಿದ ಸಚಿವ ಸೋಮಶೇಖರ್‌

ನಂಜನಗೂಡು: ಬಲಿಪಾಡ್ಯಮಿ ದಿನವಾದ ಶುಕ್ರವಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ನಂಜುಂಡೇಶ್ವರ ದೇವಸ್ಥಾನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.

ದೀಪಾವಳಿ ಹಬ್ಬದ ಪ್ರಯುಕ್ತ ನಂಜನಗೂಡಿಗೆ ಆಗಮಿಸಿದ ಸಚಿವರು ನಂಜುಂಡೇಶ್ವರನ ಸನ್ನಿಧಾನದಲ್ಲಿ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು. ನಂತರ ನಂಜುಂಡೇಶ್ವರನಿಗೆ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಸ್ವರ್ಗದಲ್ಲಿ ಅಪ್ಪ, ಅಮ್ಮನೊಂದಿಗೆ ಪುನೀತ್ – ಫೋಟೋ ವೈರಲ್

ಬಳಿಕ ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಳಿ ಹಮ್ಮಿಕೊಂಡಿದ್ದ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತರಾಖಂಡದ ಕೇದಾರನಾಥದಲ್ಲಿ ಆದಿ ಶಂಕರಾಚಾರ್ಯರ ನವೀಕೃತ ಪ್ರತಿಮೆ ಉದ್ಘಾಟನೆ ಮಾಡಿದ ನೇರ ಪ್ರಸಾರದ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕೇದಾರನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಶಂಕರಾಚಾರ್ಯರ ಪ್ರತಿಮೆಯನ್ನು ಕೆತ್ತಿದ್ದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಎಂಬುದನ್ನು ತಿಳಿದು ಸಚಿವರು ಸಂತಸ ವ್ಯಕ್ತಪಡಿಸಿದರು. 12 ಅಡಿ ಎತ್ತರ, 35 ಟನ್ ತೂಕದ ಕುಳಿತ ಭಂಗಿಯಲ್ಲಿರುವ ಶಂಕರಾಚಾರ್ಯರ ಪ್ರತಿಮೆಗೆ ಹೆಗ್ಗಡದೇವನಕೋಟೆಯಿಂದ 120 ಟನ್ ಕೃಷ್ಣ ಶಿಲೆ ಬಳಸಿದ ವಿಚಾರ ತಿಳಿದು ಖುಷಿಪಟ್ಟರು. ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ಸರಣಿ ಭೂಕಂಪದ ಅನುಭವ

14 ಲಕ್ಷ ರೈತರಿಗೆ 10203.52 ಕೋಟಿ ರೂ. ಸಾಲ
ದೇವಸ್ಥಾನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ನೀಡಲಾಗುತ್ತಿದೆ. 30 ಲಕ್ಷ ರೈತರಿಗೆ 20810 ಕೋಟಿ ರೂ. ಸಾಲ ವಿತರಣೆ ಗುರಿ ನೀಡಲಾಗಿದ್ದು, ಇದರಲ್ಲಿ 14 ಲಕ್ಷ ರೈತರಿಗೆ 10203.52 ಕೋಟಿ ರೂ. ಸಾಲ ನೀಡಲಾಗಿದೆ ಎಂದು ಹೇಳಿದರು.

ಮೈಸೂರು ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಉಂಟಾಗಿರುವ ನಷ್ಟ ಹಾಗೂ ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಮಾತನಾಡಿದ್ದೇನೆ. ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂಕುಸಿತವಾಗಿರುವ ಬಗ್ಗೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರ ಗಮನಕ್ಕೆ ತರಲಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಹರ್ಷವರ್ಧನ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಕಾಫಿ ಬೋರ್ಡ್ ಅಧ್ಯಕ್ಷ ಕೃಷ್ಣಪ್ಪಗೌಡ, ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *