ಎಚ್‍ಡಿಡಿ ಸೋಲಿಸಲು ಮಾಜಿ ಸಿಎಂ ಪ್ಲಾನ್ : ಶ್ರೀರಾಮುಲು

– ಅಧಿಕಾರ ಕಳೆದುಕೊಂಡು ಸಿದ್ದರಾಮಯ್ಯಗೆ ಮತಿಭ್ರಮಣೆಯಾಗಿದೆ

ಮೈಸೂರು: ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೆಗೌಡ ಅವರನ್ನು ಸೋಲಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ ಎಂದು ಶ್ರೀರಾಮುಲು ಹೇಳಿದ್ದಾರೆ.

ನಗರದಲ್ಲಿ ಸುದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕರು, ಹಾವಿನ ದ್ವೇಷದಂತೆ ಸಿದ್ದರಾಮಯ್ಯ ಅವರು ಈ ಚುನಾವಣೆ ಮೂಲಕ ಸೇಡನ್ನು ತೀರಿಸಿಕೊಳ್ಳಲು ಮುಂದಾಗಿದ್ದಾರೆ. ಇತ್ತ ಸಚಿವ ಜಿ.ಟಿ.ದೇವೆಗೌಡರು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸೋತರೆ ಜವಬ್ದಾರಿ ನಾನಲ್ಲ ಅಂತ ಈಗಾಗಲೇ ತಿಳಿಸಿದ್ದಾರೆ. ಈ ಮೂಲಕ ಮೈತ್ರಿಯಲ್ಲಿ ಸಮನ್ವಯತೆ ಇಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ ಎಂದು ತಿಳಿಸಿದರು.

ಅಧಿಕಾರ ಕಳೆದುಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮತಿಭ್ರಮಣೆ ಉಂಟಾಗಿದೆ. ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಲೆಕ್ಕಕಿಟ್ಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಮೂಲೆಗುಂಪು ಮಾಡಲಾಗಿದೆ. ಬ್ಯಾನರ್ ಗಳಲ್ಲಿ ಮಾಜಿ ಸಿಎಂ ಹೆಸರು ಫೋಟೋ ಹಾಕುತ್ತಿಲ್ಲ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ಸಚಿವ ಜಿ.ಟಿ.ದೇವೇಗೌಡ ವಿರುದ್ಧ ಸೋತಿದ್ದರು. ಚಾಮುಂಡೇಶ್ವರಿ ಸೋಲಿನ ಸೇಡು ತೀರಿಸಿಕೊಳ್ಳಲು ಸಿದ್ದರಾಮಯ್ಯಗೆ ಅವಕಾಶ ಸಿಕ್ಕಿದೆ ಎಂದು ಹೇಳಿದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಬದಾಮಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಅತ್ಯಂತ ಕಡಿಮೆ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದರು. ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ಜನ ಈಗ ದೂರುತ್ತಿದ್ದಾರೆ ಎಂದರು.

ಜೆಡಿಎಸ್ ಸಭೆಯಲ್ಲಿಯೇ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪರವಾಗಿ ಘೋಷಣೆ ಕೂಗುತ್ತಿದ್ದಾರೆ. ಇದು ಮೈತ್ರಿ ಪಕ್ಷದ ಕಾರ್ಯಕರ್ತರು, ಮುಖಂಡರಲ್ಲಿ ಹೊಂದಾಣಿಕೆ ಇಲ್ಲ ಎನ್ನುವುದನ್ನು ತಿಳಿಸುತ್ತದೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನವಾಗುತ್ತದೆ ಎಂದು ಹೇಳಿದರು.

Comments

Leave a Reply

Your email address will not be published. Required fields are marked *