ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ತಾರ ಗೂಳಿಹಟ್ಟಿ ಶೇಖರ್..?

ಚಿತ್ರದುರ್ಗ: ಹೊಸದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಶಾಸಕರು, ಪಕ್ಷ ತೊರೆಯುವ ಮಾತಿಲ್ಲ. ವಿರೋಧಿಗಳು ಈ ರೀತಿಯ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿದ್ದಾರೆ. ನನ್ನ ಮೇಲೆ ಕೇಳಿಬರುತ್ತಿರುವ ಆರೋಪಗಳಿಗೆ ಹಾಗೂ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಅಭಿವೃದ್ಧಿ ವಿಚಾರವಾಗಿ ಮುಖ್ಯಮಂತ್ರಿ ಹಾಗು ಡಿಕೆ ಶಿವಕುಮಾರ್ ಬಳಿಯೂ ಹೋಗಬೇಕಾಗುತ್ತದೆ. ರಾಜ್ಯದ ಎಲ್ಲಾ ಸಚಿವರನ್ನು ಭೇಟಿ ಆಗಬೇಕಾಗುತ್ತದೆ. ನನ್ನ ಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳಿವೆ. ಹೀಗಾಗಿ ಕ್ಷೇತ್ರ ಅಭಿವೃದ್ಧಿಗಾಗಿ ಪ್ರತಿಯೊಬ್ಬರನ್ನು ಭೇಟಿ ಮಾಡುವುದು ನನ್ನ ಕರ್ತವ್ಯ. ಆದರೆ ಆ ಕರ್ತವ್ಯ ನಿರ್ವಹಿಸಲು ಅಡ್ಡಿ ಪಡಿಸುತ್ತಾ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಇದನ್ನ ಜನರೇ ತೀರ್ಮಾನಿಸಬೇಕು ಎಂದು ಹೇಳಿದರು.

ರಾಜಕೀಯ ವಿರೋಧಿಗಳು ಇಲ್ಲ ಸಲ್ಲದ ಸುದ್ದಿ ಹಬ್ಬಿಸುತ್ತಿದ್ದಾರೆ. ಚಿತ್ರದುರ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸುದ್ದಿಯೂ ಸುಳ್ಳು. ಕ್ಷೇತ್ರದ ಜನರಿಗೆ, ಬಿಜೆಪಿಗೆ ದ್ರೋಹ ಬಗೆಯುವುದಿಲ್ಲ. ವಿರೋಧಿಗಳು ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ನನ್ನ ಪಕ್ಷ ಹಾಗೂ ನನ್ನ ಜನ ನನ್ನನ್ನು ಗೆಲ್ಲಿಸಿದ್ದಾರೆ, ಯಡಿಯೂರಪ್ಪ ಅವರು ನನಗೆ ಟಿಕೆಟ್ ಕೊಟ್ಟಿದ್ದಾರೆ. ಪಕ್ಷದ ವ್ಯಕ್ತಿನಿಷ್ಠೆಯಾಗಿ ಜನರಿಗೆ ದ್ರೋಹ ಬಗೆಯುವ ಕೆಲಸ ಯಾವತ್ತು ಮಾಡುವುದಿಲ್ಲ. ಹೀಗಾಗಿ ಹೊಸದುರ್ಗ ಕ್ಷೇತ್ರದ ಜನ ಸುಳ್ಳನ್ನು ನಂಬದಂತೆ ಮನವಿ ಮಾಡಿಕೊಂಡರು.

ಯಾವುದೇ ಕಾರಣಕ್ಕೂ ಬಿಜೆಪಿಯನ್ನು ತೊರೆಯುವುದಿಲ್ಲ. 5 ವರ್ಷ ನಾನು ಇಲ್ಲಿಯೇ ಇದ್ದು ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಂಡು ಹೋಗುತ್ತೇನೆ. ಎಂಪಿ ಚುನಾವಣೆಯಲ್ಲಿ ನಾನು ಭಾಗವಹಿಸುವುದಿಲ್ಲ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *