ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರೋದು ಉತ್ತಮ ಬೆಳವಣಿಗೆ: ಹೆಚ್.ಡಿ. ಕುಮಾರಸ್ವಾಮಿ

KUMARASWAMY

ಬೆಂಗಳೂರು: ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

PM MODI

ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ 3 ಕೃಷಿ ಕಾನೂನನ್ನು ವಿರೋಧಿಸಿ ದೇಶಾದ್ಯಂತ ರೈತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ 3 ಕೃಷಿ ಕಾನೂನನ್ನು ರದ್ದುಗೊಳಿಸಿದೆ.

ಈ ಕುರಿತಂತೆ ಹೆಚ್.ಡಿ ಕುಮಾರಸ್ವಾಮಿ ಅವರು ತಮ್ಮ  ಟ್ವಿಟ್ಟರ್‌ನಲ್ಲಿ, ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ ಮತ್ತು ಈಗ ಏಕಾಏಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ ಎಂದಿದ್ದಾರೆ.  ಇದನ್ನೂ ಓದಿ: ಪ್ರತಿಭಟನೆ ಕೈ ಬಿಡುವಂತೆ ರೈತರಲ್ಲಿ ಮೋದಿ ಮನವಿ

ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ & ಐತಿಹಾಸಿಕ. ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನಧಾತರು ಪ್ರತಿಭಟನೆ ನಡೆಸಿದರು. ಕೇಂದ್ರವು ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತು. ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿಯಿತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದರು.

ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಃ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ ಎಂದು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *