ಅಪ್ಪ-ಮಕ್ಕಳ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಮಾಜಿ ಪ್ರಧಾನಿ ದೇವೇಗೌಡ ಹಾಗೂ ಎಚ್ ಡಿ ಕುಮಾರಸ್ವಾಮಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆಂದು ಸಂಸದ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ದೇವೇಗೌಡರು ಪ್ರಧಾನಿಯಾಗಿದ್ದಾಗ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದರು. ಆದರೆ ಈಗ ಅವರ ಮಗ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತೆ ಬಜೆಟ್ ನಲ್ಲಿಯೂ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ತಂದೆ-ಮಕ್ಕಳು ಉತ್ತರ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ಧೋರಣೆಯನ್ನು ಮುಂದುವರೆಸಿದ್ದಾರೆ. ದೋಸ್ತಿ ಸರ್ಕಾರದ ಮೊದಲ ಬಜೆಟ್‍ನಲ್ಲಿ ಕೇವಲ ಮೂರ್ನಾಲ್ಕು ಜಿಲ್ಲೆಗಳಿಗೆ ಮಾತ್ರ ಅನುದಾನ ನೀಡಿದ್ದಾರೆ. ಈ ಮೂಲಕ ಜನರ ಕಣ್ಣಿಗೆ ಮಣ್ಣೆರಚಿ, ಒಂದು ಕೈಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಂಡಿದ್ದಾರೆ ಎಂದರು.

ಇನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಾದ ಸಾಲದ ಕುರಿತಂತೆ ಪ್ರತಿಕ್ರಿಯೆ ನೀಡಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಸರ್ಕಾರ ಮಾಡಿದ ಸಾಲವನ್ನು ನಾವು ತೀರಿಸಿದ್ದೇವೆ. ಆದರೂ ರಾಹುಲ್ ಗಾಂಧಿ ಮೋದಿ ಸರ್ಕಾರಕ್ಕೆ ಚಾಲೆಂಜ್ ಮಾಡಿದ್ದಾರೆ. ಆದರೆ ಈಗ ರಾಜ್ಯದಲ್ಲಿ ನಿಮ್ಮ ಸಹಭಾಗಿತ್ವದ ದೋಸ್ತಿ ಸರ್ಕಾರ ಪೆಟ್ರೋಲ್, ಡೀಸಲ್ ಬೆಲೆ ಏರಿಸಿದೆ. ಇದರ ಕುರಿತು ರಾಹುಲ್ ಗಾಂಧಿಯವರು ತಮ್ಮ ನಿಲುವು ಸ್ಪಷ್ಟ ಪಡಿಸಬೇಕು ಎಂದು ಅಗ್ರಹಿಸಿದರು.

ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು ಈ ದೋಸ್ತಿ ಸರ್ಕಾರ ಹಾಳು ಮಾಡುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್‍ನವರು ರಾಜ್ಯವನ್ನು ಸಾಲಗಾರ ರಾಜ್ಯವನ್ನಾಗಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Comments

Leave a Reply

Your email address will not be published. Required fields are marked *