ನೆರೆ ಪರಿಹಾರ ಕಾರ್ಯಗಳಿಗೆ ಹಣದ ತೊಂದರೆ ಇಲ್ಲ – ಸಿಎಂ ಬಿಎಸ್ ವೈ

ಹುಬ್ಬಳ್ಳಿ: ನೆರೆ ಪರಿಹಾರ ಕಾರ್ಯಗಳಿಗೆ ಹಣದ ತೊಂದರೆ ಇಲ್ಲ. ಸಂತ್ರಸ್ತರ ನೆರವಿಗೆ ಧಾವಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಮನೆ ಕಟ್ಟಲು 5 ಲಕ್ಷ ಪರಿಹಾರ ಧನ ನಿಗದಿ ಮಾಡಲಾಗಿದೆ. ಭಾಗಶಃ ಮನೆ ಹಾನಿಗೆ 1 ಲಕ್ಷ ಹಣವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಇದುವರೆಗೂ ಸರ್ಕಾರದಿಂದ 1200 ಕೋಟಿ ಪರಿಹಾರ ಧನ ಬಿಡುಗಡೆ ಮಾಡಿ ನೆರೆ ಪರಿಹಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಇದಕ್ಕೂ ಮುನ್ನ ಜಿಲ್ಲಾಡಳಿತದಿಂದ ಮುಖ್ಯ ಮಂತ್ರಿಗಳಿಗೆ ಗೌರವ ರಕ್ಷೆ ನೀಡಲಾಯಿತು. ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅರಣ್ಯ ಸಚಿವ ಸಿ.ಸಿ.ಪಾಟೀಲ್, ಜಿಲ್ಲಾಧಿಕಾರಿ ದೀಪಾ ಚೋಳನ್, ಪೊಲೀಸ್ ಆಯುಕ್ತ ಆರ್.ದಿಲೀಪ್, ಜಿಲ್ಲಾ ಪಂಚಾಯತ್ ಸಿಇಓ ಡಾ.ಬಿ.ಸತೀಶ್, ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಠಯಾರ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

ಇದೇ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟದ ಬಗ್ಗೆ ರಾಜ್ಯದ ಪೊಲೀಸರು ಆಂಧ್ರ ಮತ್ತು ಮಹಾರಾಷ್ಟ್ರ ಜೊತೆ ಜಂಟಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಹಿನ್ನೆಲೆಯಲ್ಲಿ ಹೆಚ್ಚಿಗೆ ಏನೂ ಹೇಳಲು ಆಗಲ್ಲ. ಸ್ಫೋಟ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ವಿಧಿವಿಜ್ಞಾನ ಪ್ರಯೋಗಾಲಯ (ಎಫ್‍ಎಸ್‍ಎಲ್) ವರದಿ ಬಂದ ನಂತರ ನಿಖರ ಮಾಹಿತಿ ಲಭ್ಯವಾಗಲಿದೆ ಎಂದು ಹೇಳಿದರು.

Comments

Leave a Reply

Your email address will not be published. Required fields are marked *