ಪ್ರವಾಹ ಪೀಡಿತ ಪ್ರದೇಶಗಳಿಗೆ ಹೋಗಲು ಸಾಧ್ಯವಾಗ್ತಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರು ತಮ್ಮ ಟ್ವಿಟ್ಟರಿನಲ್ಲಿ, “4 ದಿನದ ಹಿಂದೆ ನಾನು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ವೈದ್ಯರು ಕೆಲವು ದಿನಗಳ ಕಡ್ಡಾಯ ವಿಶ್ರಾಂತಿಯನ್ನು ಸೂಚಿಸಿದ್ದಾರೆ. ಈ ನಡುವೆ ಉತ್ತರ ಕರ್ನಾಟಕ ಭಾಗ ಪ್ರವಾಹಕ್ಕೆ ಸಿಲುಕಿ ನಲುಗಿ ಹೋಗಿದೆ. ಅಲ್ಲಿ ಹೋಗಿ ಪರಿಹಾರ ಕಾರ್ಯಗಳಲ್ಲಿ ಭಾಗವಹಿಸಬೇಕೆಂದು ಮನಸ್ಸು ತುಡಿಯುತ್ತಿದ್ದರೂ, ನನ್ನ ದುರಾದೃಷ್ಟಕ್ಕೆ ಅದು ಸಾಧ್ಯವಾಗುತ್ತಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‍ನಲ್ಲಿ, “ನಾನು ಆಡಳಿತ ಪಕ್ಷದಲ್ಲಿಯೇ ಇರಲಿ, ವಿರೋಧ ಪಕ್ಷದಲ್ಲಿಯೇ ಇರಲಿ ಜನರ ಸಂಕಷ್ಟಕ್ಕೆ ನೆರವಾಗುವುದು ಆದ್ಯ ಕರ್ತವ್ಯ ಎಂದು ನಂಬಿ ರಾಜಕಾರಣ ಮಾಡುತ್ತ ಬಂದವನು. ಈ ಕಾರಣಕ್ಕಾಗಿಯೇ ನನ್ನ ಬದಲು ನನ್ನ ಮಗ, ವರುಣಾ ಕ್ಷೇತ್ರದ ಶಾಸಕರಾದ ಯತೀಂದ್ರ ಅವರನ್ನು ಪ್ರವಾಹ ಸಂತ್ರಸ್ತರಿಗೆ ನೆರವಾಗುವಂತೆ ಕಳುಹಿಸಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಶನಿವಾರ ದೆಹಲಿಯಲ್ಲಿ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆಯಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ. ಶನಿವಾರ ನಡೆಯುವ ಸಭೆಯಲ್ಲಿ ಭಾಗಿಯಾಗಿ ಎಐಸಿಸಿ ಅಧ್ಯಕ್ಷರ ಆಯ್ಕೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಇತ್ತ ಕರ್ನಾಟಕದಲ್ಲಿ ಅತಿವೃಷ್ಟಿ ಆದರೂ ಸ್ವಕ್ಷೇತ್ರ ಬದಾಮಿಗೆ ಸಿದ್ದರಾಮಯ್ಯ ಭೇಟಿ ನೀಡಿಲ್ಲ. ಅಲ್ಲದೆ ವಿಶ್ರಾಂತಿ ಪಡೆಯಲು ವೈದ್ಯರು ಹೇಳಿದ್ದಾರೆ ಎಂದು ಟ್ವೀಟ್ ಮಾಡಿ ಸಿದ್ದರಾಮಯ್ಯ ಅವರು ದೆಹಲಿಗೆ ಹೋಗಲು ಮುಂದಾಗಿದ್ದಾರೆ.

Comments

Leave a Reply

Your email address will not be published. Required fields are marked *