ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ ವೈರಸ್

ತಿರುವನಂತಪುರಂ: ಮಲೇಷ್ಯಾ, ಸಿಂಗಾಪುರಗಳಲ್ಲಿ ಆತಂಕ ಮೂಡಿಸಿದ್ದ ನಿಫಾ ವೈರಸ್ ಈಗ ನಮ್ಮ ನೆರೆಯ ರಾಜ್ಯ ಕೇರಳದಲ್ಲಿ ಭೀತಿ ಹುಟ್ಟಿಸಿದೆ.

ಎರ್ನಾಕುಲಂನ 23 ವರ್ಷದ ಯುವಕನ ರಕ್ತದಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 10 ದಿನದಿಂದ ಜ್ವರದಿಂದ ಬಳಲುತ್ತಿದ್ದ ಯುವಕನ್ನು ಮೇ 30ರಂದು ಎರ್ನಾಕುಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪುಣೆಯ ರಾಷ್ಟ್ರೀಯ ವೈರಾಣು ಪ್ರಯೋಗಾಲಯದಿಂದ ಯುವಕನ ರಕ್ತದ ಮಾದರಿಯ ಅಂತಿಮ ವರದಿ ಲಭ್ಯವಾಗಿದ್ದು, ನಿಫಾ ಸೋಂಕು ತಗುಲಿರುವುದನ್ನು ಖಚಿತಪಡಿಸಿದೆ. ಮೂಲಗಳ ಪ್ರಕಾರ 86 ಮಂದಿಯ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ನಾನು ಸಾಯ್ತೀನಿ, ಮಕ್ಕಳನ್ನು ಚೆನ್ನಾಗಿ ನೋಡ್ಕೊಳ್ಳಿ- ಪತಿಗೆ ನಿಫಾ ವೈರಸ್‍ಗೆ ಬಲಿಯಾದ ಕೇರಳ ನರ್ಸ್ ಪತ್ರ

ಬಾವಲಿಗಳಿಂದ ಈ ಸೋಂಕು ಹರಡುತ್ತಿದ್ದು, ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ನಿಫಾ ವೈರಾಣು, ತೀವ್ರ ಉಸಿರಾಟ ತೊಂದರೆ ಸೇರಿದಂತೆ ಮೆದುಳಿನ ಉರಿಯೂತದಂಥ ಗಂಭೀರ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ನಿಫಾ ಸೋಂಕು ತಡೆಯಲು ಕೇರಳ ರಾಜ್ಯಕ್ಕೆ ಬೇಕಾಗುವ ಎಲ್ಲ ರೀತಿಯ ನೆರವನ್ನು ಕೇಂದ್ರ ಸರ್ಕಾರ ಒದಗಿಸಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

ಕೇರಳದಲ್ಲಿ ಕಳೆದ ವರ್ಷವೂ ನಿಫಾ ವೈರಸ್ ಕಾಣಿಸಿಕೊಂಡಿತ್ತು. ಕೋಜಿಕ್ಕೋಡ್ ಹಾಗೂ ಮಲಪ್ಪುರಂ ಜಿಲ್ಲೆಯಲ್ಲಿ ಒಟ್ಟು 17 ಜನರು ಜೊತೆ ಚಿಕಿತ್ಸೆ ನೀಡಿದ್ದ ನರ್ಸ್ ಪ್ರಾಣ ಕಳೆದುಕೊಂಡಿದ್ದಳು.

ನಿಫಾ ವೈರಸ್ ಎಂದರೇನು?
1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಫಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಫಾ ವೈರಸ್ ಎಂದು ಕರೆಯುತ್ತಾರೆ. ನಿಫಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಫಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ.

Comments

Leave a Reply

Your email address will not be published. Required fields are marked *