ಲೋಕಸಭಾ ಚುನಾವಣೆ-ಜೆಡಿಎಸ್‍ಗೆ ಕ್ಷೇತ್ರ ಬಿಟ್ಟುಕೊಡಲು ಒಪ್ಪದ ಕಾಂಗ್ರೆಸ್ ಸಂಸದರು

ಬೆಂಗಳೂರು: ಹಳೇ ಮೈಸೂರು ಪ್ರಾಂತ್ಯದ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟು ಕೊಡಲು ಕಾಂಗ್ರೆಸ್ ನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.

ನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಇಂದು ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಮುಖಂಡರ ಸಭೆ ನಡೆಸಲಾಯಿತು. ಈ ವೇಳೆ ಜೆಡಿಎಸ್‍ಗೆ ನಮ್ಮ ಕ್ಷೇತ್ರಗಳನ್ನು ಬಿಟ್ಟುಕೊಡುವುದು ಬೇಡ ಎಂದು ಐದೂ ಜಿಲ್ಲೆಗಳ ಮುಖಂಡರು ಒತ್ತಾಯಿಸಿದ್ದಾರೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಈ ವಿಚಾರವನ್ನು ಹೈಕಮಾಂಡ್‍ಗೆ ತಿಳಿಸುವಂತೆ ಐದು ಕ್ಷೇತ್ರಗಳ ಸಂಸದರು ಕೆ.ಸಿ.ವೇಣುಗೋಪಾಲ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಐದೂ ಕ್ಷೇತ್ರಗಳಿಂದ ಕಾಂಗ್ರೆಸ್ ಅಭ್ಯರ್ಥಿಗಳನ್ನೇ ಕಣಕ್ಕೆ ಇಳಿಸುವಂತೆ ಒತ್ತಾಯಿಸಿ ಮುಂದಿನ ದಿನಗಳಲ್ಲಿ ನಿಯೋಗವೊಂದನ್ನು ರಚಿಸಿ ಹೈಕಮಾಂಡ್ ಭೇಟಿ ಮಾಡುವ ಸಾಧ್ಯತೆಗಳಿವೆ.

ಈ ನಿಟ್ಟಿನಲ್ಲಿ ಸ್ಥಳೀಯ ಮುಖಂಡರ ಜೊತೆ ಕೆ.ಸಿ.ವೇಣುಗೋಪಾಲ್ ಅವರು ಪ್ರತ್ಯೇಕ ಕೊಠಡಿಯಲ್ಲಿ ವಿಧಾನಸಭೆ ಕ್ಷೇತ್ರಗಳ ಮುಖಂಡರನ್ನು ಕರೆಸಿ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಈ ಸಭೆಯಲ್ಲಿ ಖುದ್ದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಅವರಿಗೂ ಪ್ರವೇಶ ಇರಲಿಲ್ಲದಿದ್ದುದ್ದು ಅಚ್ಚರಿಗೆ ಕಾರಣವಾಗಿತ್ತು. ಮುಖಂಡರು ಮುಕ್ತವಾಗಿ ತಮ್ಮ ಕ್ಷೇತ್ರಗಳ ಸ್ಥಿತಿ ಗತಿ, ಹಾಲಿ ಮತ್ತು ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಹೇಳಿಕೊಳ್ಳಲೆಂದು ಈ ವ್ಯವಸ್ಥೆ ಮಾಡಲಾಗಿತ್ತು ಎನ್ನಲಾಗಿದೆ.

ಕೆ.ಸಿ.ವೇಣುಗೋಪಾಲ್ ಅವರು ನಾಳೆಯೂ ಸಭೆ ನಡೆಸಲಿದ್ದು ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ ಮತ್ತು ಗ್ರಾಮಾಂತರ ಲೋಕಸಭೆ ಕ್ಷೇತ್ರಗಳ ಮುಖಂಡರೊಂದಿಗೆ ಪ್ರತ್ಯೇಕವಾಗಿ ಚರ್ಚೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಕ್ಷೇತ್ರದ ಮುಖಂಡರ ಅಭಿಪ್ರಾಯವನ್ನು ತೆಗೆದುಕೊಳ್ಳಲಾಗುತ್ತಿದೆ. ಹೀಗಾಗಿ ಮುಕ್ತ ಚರ್ಚೆಯಾಗಲಿ ಎನ್ನುವ ಉದ್ದೇಶದಿಂದ ಸಭೆಯಿಂದ ಹೊರ ಬಂದಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *