ಯಾದಗಿರಿ: ಲಾರಿ ಹಾಗೂ ಟಂಟಂ ಆಟೋ ಪರಸ್ಪರ ಡಿಕ್ಕಿ ಹೊಡೆದು, ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಯಾದಗಿರಿಯಲ್ಲಿ ಇಂದು ನಡೆದಿದೆ.
ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಶಿಬಿರ ಬಂಡಿ ರಾಜ್ಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ ನಿಂಗಮ್ಮ (45) ಎಂಬ ಮಹಿಳೆ ಮೃತಪಟ್ಟಿದ್ದು, ಎಂಟು ಜನರಿಗೆ ಗಂಭೀರ ಗಾಯಗಳಾಗಿವೆ. ಘಟನೆಯಿಂದಾಗಿ ಮಲ್ಲಮ್ಮ, ಅಂಬ್ರಮ್ಮ ಎಂಬವರ ಸ್ಥಿತಿ ಚಿಂತಾಜನಕವಾಗಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಉಳಿದ ಗಾಯಾಳುಗಳಿಗೆ ಸುರಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಅಪಘಾತಕ್ಕಿಡಾದವರು ಸುರಪುರದ ನಿವಾಸಿಗಳಾಗಿದ್ದು, ಶಹಾಪೂರ ತಾಲೂಕಿನ ಬಿರನೂರು ಗ್ರಾಮಕ್ಕೆ ಟಂಟಂನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಲಾರಿವೊಂದು ವೇಗವಾಗಿ ಬಂದು ಟಂಟಂಗೆ ಡಿಕ್ಕಿ ಹೊಡೆದಿದೆ.
ಘಟನೆ ನಡೆಯುತ್ತಿದ್ದಂತೆಯೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಈ ಬಗ್ಗೆ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply