ಕಾಟಾಚಾರಕ್ಕೆ ಥರ್ಮಲ್ ಸ್ಕ್ರೀನಿಂಗ್ – ತಪಾಸಣೆ ಮಾಡುವ ಸಿಬ್ಬಂದಿಗೆ ಇಲ್ಲ ಮಾಸ್ಕ್

– ಕ್ಯಾಮೆರಾ ಕಂಡು ತಪಾಸಣೆಗೆ ಮುಂದಾದ ಆರೋಗ್ಯ ಇಲಾಖೆ ಸಿಬ್ಬಂದಿ

ಮಡಿಕೇರಿ: ಕೊರೊನಾ ವೈರಸ್ ಹೆಸರು ಕೇಳಿದೆ ಜನರ ಎದೆ ನಡುಗಲಾರಂಭಿಸುತ್ತೆ. ಈಗಾಗಲೇ ರಾಜ್ಯದಲ್ಲಿ ಹರಡುತ್ತಿರುವ ಕೊರೊನಾ ವೈರಸ್ ಹಿನ್ನೆಲೆ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆದರೆ ಸಾರ್ವಜನಿಕರಿಗೆ ವೈರಸ್ ತಗುಲಿದೆಯೋ ಇಲ್ಲವೋ ಎಂದು ಥರ್ಮಲ್ ಪರಿಶೀಲನೆ ಮಾಡುವ ಸಿಬ್ಬಂದಿಗೆ ಸುರಕ್ಷತೆ ಇಲ್ಲ.

ಕರ್ನಾಟಕ ಕೇರಳ ಗಡಿಭಾಗವಾದ ಕೊಡಗಿನ ವಿರಾಜಪೇಟೆ ತಾಲೂಕಿನ ಪೆರಂಬಾಡಿಯಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಇದೆ. ಆದರೆ ಆರೋಗ್ಯ ಇಲಾಖೆ ಸಿಬ್ಬಂದಿ ಇಲ್ಲಿ ನಾಮಕಾವಸ್ಥೆಗೆ ಇರುವ ಹಾಗೆ ಇದ್ದಾರೆ. ಪೆರಂಬಾಡಿ ಚೆಕ್ ಪೋಸ್ಟ್ ಆದರೂ ಕೂಡ ಒಂದೇ ಒಂದು ವಾಹನ ನಿಂತಿಲ್ಲ. ಯಾವಾಗ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್‍ಗೆ ಇಳಿಯಿತೋ ಪೊಲೀಸರು ವಾಹನ ನಿಲ್ಲಿಸಿದರು, ಆಶಾ ಕಾರ್ಯಕರ್ತೆಯರು ಕೇರಳದಿಂದ ಬರುವವರನ್ನು ಸ್ಕ್ರೀನಿಂಗ್ ಮಾಡೋದಕ್ಕೆ ಮುಂದಾದರು. ಆದರೆ ತಪಾಸಣೆ ಮಾಡುವ ಆಶಾ ಕಾರ್ಯಕರ್ತರು ಆರೋಗ್ಯ ಇಲಾಖೆ ಸಿಬ್ಬಂದಿ ಮುಖಕ್ಕೆ ಮಾಸ್ಕ್ ಹಾಕದೇ ಕಾರ್ಯನಿರ್ವಹಿಸುತ್ತಿದ್ದಾರೆ.

ಈಗಾಗಲೇ ಕೇರಳದಲ್ಲಿ 27 ಜನರಿಗೆ ಕೊರೊನಾ ಸೋಂಕು ತಟ್ಟಿರುವ ಶಂಕೆ ವ್ಯಕ್ತವಾಗಿದೆ. ಆದರೆ ಗಡಿಭಾಗದಲ್ಲಿ ತಪಾಸಣೆ ಮಾಡುವವರಿಗೆ ಯಾವುದೇ ಅಗತ್ಯ ಸಲಕರಣೆಗಳು ಇಲ್ಲದೇ ಮಾಸ್ಕ್ ಧರಿಸದೇ ಕೆಲಸ ಮಾಡುತ್ತಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಇನ್ನಾದರೂ ಗಡಿಭಾಗದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಡಬೇಕಿದೆ. ಅಲ್ಲದೇ ಜಿಲ್ಲಾಡಳಿತ ಇತ್ತ ಕಡೆ ಗಮನ ಹರಿಸಬೇಕು ಎಂದು ಸಾರ್ವಜನಿಕರು ಆಗ್ರಾಹಿಸಿದ್ದಾರೆ.

ಇಂದು ಕೊಡಗಿನಲ್ಲಿ ಮೊದಲ ಕೊರೊನಾ ಸೋಂಕಿತ ಪ್ರಕರಣ ವರದಿಯಾಗಿದೆ. ಈ ವ್ಯಕ್ತಿಯು ಸೌದಿ ಅರೇಬಿಯಾ ಪ್ರವಾಸದಿಂದ ಹಿಂದಿರುಗಿದ್ದರು. ಇವರನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಿಗಾವಹಿಸಲಾಗಿದೆ. ಇದು ಕರ್ನಾಟಕದ 15ನೇ ಕೊರೊನಾ ಸೋಂಕಿತ ಪ್ರಕರಣವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಏನಿದು ಥರ್ಮಲ್ ಸ್ಕ್ಯಾನರ್?
ಥರ್ಮಲ್ ಸ್ಕ್ಯಾನರ್ ಮನುಷ್ಯನ ದೇಹದ ತಾಪಮಾನವನ್ನು ಅಳೆಯುವ ಸಾಧನ. ಮನುಷ್ಯನ ದೇಹದ ತಾಪಮಾನ ತುಸು ಹೆಚ್ಚುಕಡಿಮೆ 98.6 ಡಿಗ್ರಿ ಫ್ಯಾರನ್‍ಹೀಟ್ ಅಥವಾ 37 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಆದರೆ ಥರ್ಮಲ್ ಸ್ಕ್ಯಾನರ್ ನಿಂದ ತಪಾಸಣೆಗೆ ಒಳಪಟ್ಟ ವ್ಯಕ್ತಿಯ ದೇಹದ ತಾಪಮಾನ 98.6 ಡಿಗ್ರಿ ಫ್ಯಾರನ್‍ಹೀಟ್‍ಗಿಂತ ಅಧಿಕವಾಗಿದ್ದರೆ ಅವರನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಲಾಗುತ್ತದೆ.

ಥರ್ಮಲ್ ಸ್ಕ್ಯಾನರ್ ಯಾಕೆ?
ಕೊರೊನಾ ವೈರಸ್ ಇರುವವರಿಗೆ ಜ್ವರ, ಕೆಮ್ಮು ಪ್ರಮುಖ ಲಕ್ಷಣಗಳಾಗಿವೆ. ಇಂತಹ ಸಂದರ್ಭದಲ್ಲಿ ಹಲವರು ತಮಗೆ ಜ್ವರ ಇರುವ ಕುರಿತು ಮಾಹಿತಿ ಕೊಡಲು ಹಿಂಜರಿಯುತ್ತಾರೆ. ಇದಲ್ಲದೇ ಈಗಿರುವ ಹಳೆಯ ತಂತ್ರಜ್ಞಾನ ಬಳಸಿ ಸಾವಿರಾರು ಜನರನ್ನು ಪರೀಕ್ಷೆ ಮಾಡಲು ವೈದ್ಯರಿಗೆ ಕಷ್ಟಸಾಧ್ಯ. ಹೀಗಾಗಿ ತಕ್ಷಣ ಪರೀಕ್ಷಿಸಲು ಜ್ವರದ ತೀವ್ರತೆ ತಿಳಿದುಕೊಳ್ಳಲು ಥರ್ಮಲ್ ಸ್ಕ್ಯಾನರ್ ತಕ್ಷಣದಲ್ಲಿ ಉಪಯೋಗಕ್ಕೆ ಬರುತ್ತದೆ. ಈ ಕಾರಣದಿಂದ ಇದರ ಬಳಕೆ ವೈದ್ಯರಿಗೆ ರೋಗಿಯ ದೇಹಸ್ಥಿತಿ ಅರಿಯಲು ಸಹಕಾರಿಯಾಗುತ್ತದೆ.

Comments

Leave a Reply

Your email address will not be published. Required fields are marked *