ಲೋಕಸಭೆಯಲ್ಲೂ ಆಪರೇಷನ್ ಆಡಿಯೋ ಬಿಸಿಬಿಸಿ ಚರ್ಚೆ

– ಬಿಜೆಪಿ ವಿರುದ್ಧ ಚಾಟಿ ಬೀಸಿದ ಮಲ್ಲಿಕಾರ್ಜುನ ಖರ್ಗೆ, ಎಚ್‍ಡಿಡಿ

ನವದೆಹಲಿ: ಆಪರೇಷನ್ ಆಡಿಯೋ ವಿಚಾರ ಲೋಕಸಭಾ ಕಲಾಪದಲ್ಲಿಯೂ ಭಾರೀ ಚರ್ಚೆಯಾಗಿದ್ದು, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶಾಸಕರನ್ನು ಖರೀದಿ ಮಾಡಲು ಯತ್ನಿಸಿದ ಆಡಿಯೋ ಬಿಡುಗಡೆಯಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಆಮಿಷ ಒಡ್ಡಿ ರಾಜೀನಾಮೆ ಕೊಡಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ನನ್ನದೇ ಲೋಕಸಭೆ ಕ್ಷೇತ್ರದ ಗುರುಮಿಠಕಲ್ ಶಾಸಕರಿಗೆ ಆಮಿಷ ಒಡ್ಡಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಅಧಿವೇಶನಲ್ಲಿ ಆರೋಪಿಸಿದರು.

ಶಾಸಕ ನಾಗನಗೌಡ ಅವರ ಮಗ ಶರಣಗೌಡ ಮೂಲಕ ಕುದುರೆ ವ್ಯಾಪಾರಕ್ಕೆ ಬಿಜೆಪಿ ನಾಯಕರು ಮುಂದಾಗಿದ್ದಾರೆ. ಇದಕ್ಕೆ ಪೂರಕ ಆಡಿಯೋವನ್ನು ಸಿಎಂ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಆಡಿಯೋದಲ್ಲಿ ರಾಜೀನಾಮೆ ಅಂಗೀಕಾರಕ್ಕೆ ಸ್ಪೀಕರ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾಗಿಯೂ ಹೇಳಿದ್ದಾರೆ. ಸ್ಪೀಕರ್ ರಮೇಶ್ ಕುಮಾರ್ ಅವರಿಗೆ 50 ಕೋಟಿ ರೂ. ನೀಡುವ ಬಗ್ಗೆ ಆಡಿಯೋದಲ್ಲಿ ಉಲ್ಲೇಖವಿದೆ ಎಂದು ಮಲ್ಲಿಕಾರ್ಜುನ ಖರ್ಗೆ ದೂರಿದರು.

ಕಾನೂನು ತೊಡಕು ಉಂಟಾದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ನಿಭಾಯಿಸುತ್ತಾರೆ. ಪಕ್ಷಕ್ಕೆ ಬಂದಲ್ಲಿ ಸಚಿವ ಸ್ಥಾನ ಮತ್ತು ಹಣ ನೀಡುತ್ತೇವೆ ಎನ್ನುವ ಅಂಶಗಳು ಆಡಿಯೋದಲ್ಲಿದೆ ಎಂದು ಕಿಡಿಕಾರಿದರು.

ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಬಲಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಆಪರೇಷನ್ ಮಾಡುವುದನ್ನು ಮೊದಲು ಶುರು ಮಾಡಿದ್ದೆ ಬಿಜೆಪಿಯವರು. 2009ರಲ್ಲಿ ಬಿಜೆಪಿಯವರು ಶಾಸಕರನ್ನು ಖರೀದಿ ಮಾಡಿದರು. ಮತ್ತೆ ಆ ಕೆಲಸವನ್ನು ಆರಂಭಿಸಿದ್ದಾರೆ. ಶಾಸಕರಿಗೆ ಹಣ ಮತ್ತು ಅಧಿಕಾರದ ಆಮಿಷ ಒಡಲಾಗುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.

ಕಲಾಪಕ್ಕೂ ಮುನ್ನ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಅನೇಕ ನಾಯಕರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಆಪರೇಷನ್ ಕಮಲ ಸಂವಿಧಾನದ ಸಾವು, ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಮಾರಾಟವಾಗುತ್ತಿದೆ. ಶಾಸಕರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಪ್ರತಿಭಟನಾನಿರತರು ಘೋಷಣೆ ಕೂಗಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *