ಜಿಲ್ಲಾದ್ಯಂತ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

ಬೆಂಗಳೂರು: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ತುಚ್ಛಕೃತ್ಯಕ್ಕೆ ಬಲಿಯಾದ ಭಾರತ ಮಾತೆಯ ಮಕ್ಕಳಿಗೆ ಜಿಲ್ಲೆಯಾದ್ಯಂತ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ. ಜೊತೆಗೆ ದಾಳಿ ಮಾಡಿದ ಉಗ್ರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಕೊಪ್ಪಳ ಅಶೋಕ ವೃತ್ತದಲ್ಲಿ ಮೇಣದ ಬತ್ತಿ ಹಿಡಿದು ಎ.ಬಿ.ವಿ.ಪಿ.ವಿದ್ಯಾರ್ಥಿ ಸಂಘಟನೆಯಿಂದ ಯುವಕರು ಶ್ರದ್ಧಾಂಜಲಿ ಸಮರ್ಪಿಸಿದ್ದು, ಸೋಲ್ಜರ್ ಅಮರ್ ರಹೇ ಎಂದು ಘೋಷಣೆ ಕೂಗಿದ್ದಾರೆ. ಕೋಟೆನಾಡು ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ವಂದೇ ಮಾತರಂ ಜಾಗೃತಿ ವೇದಿಕೆಯಿಂದ ಹುತಾತ್ಮ ಯೋಧರಿಗೆ ಕ್ಯಾಂಡಲ್ ಹಚ್ಚಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಇತ್ತ ಹಾವೇರಿ ಜಿಲ್ಲೆ ರಾಣೇಬೆನ್ನೂರಿನ ಕೋರ್ಟ್ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಿ, ಮೊಂಬತ್ತಿ ಹಿಡಿದು ಉಗ್ರರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವಂತೆ ಆಗ್ರಹಿಸಿದ್ದಾರೆ. ಮೈಸೂರಿನ ನ್ಯಾಯಾಲಯದ ಮುಂಭಾಗದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ದು, ಮೊಂಬತ್ತಿ ಹಿಡಿದು ರಣಹೇಡಿ ಉಗ್ರರಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲೆನಾಡು ಭಾಗದ ಚಿಕ್ಕಮಗಳೂರಿನಲ್ಲಿ ಹುತಾತ್ಮ ಯೋಧರಿಗೆ ವೀರ ಜವಾನ್ ಅಮರ್ ರಹೇ ಎಂದು ಘೋಷಣೆ ಕೂಗಿ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ವಿಜಯಪುರದಲ್ಲಿ ದೇಶ ರಕ್ಷಕರ ಪಡೆ ಮತ್ತು ಸಾರ್ವಜನಿಕರಿಂದ ಪುಲ್ವಾಮಾ ವೀರ ಯೋಧರಿಗೆ ಸನ್ಮಾನಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಜ್ಞಾನಗಂಗಾ ಉಚಿತ ಮನೆ ಪಾಠ ಕೇಂದ್ರದ ಸದಸ್ಯರು ಹಾಗೂ ಸಾರ್ವಜನಿಕರಿಂದ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ನಗರದ ದುರ್ಗದ ಬೈಲ್ ವೃತ್ತದಲ್ಲಿ ಸಾರ್ವಜನಿಕರಿಂದ ಮೊಂಬತ್ತಿ ಹಚ್ಚಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಭಯೋತ್ಪಾದನೆ ತೊಲಗಲಿ ಎಂಬ ಘೋಷಣೆ ಮೂಲಕ ಉಗ್ರರ ಕೃತ್ಯಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ಗಡಿಯಾರ ಕಂಬದ ಬಳಿ ಹುತಾತ್ಮ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದು, ಯೋಧರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *