ಕತ್ತು, ಕೈಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ- ಸಾವಿಗೂ ಮುನ್ನ ನಡೆದಿದ್ದೇನೆಂದು ಹೇಳಿ ಕೊನೆಯುಸಿರೆಳೆದ ಮಹಿಳೆ

ಮಂಡ್ಯ: ಮಹಿಳೆಯೊಬ್ಬರ ಕತ್ತು ಮತ್ತು ಕೈಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಮಂಡ್ಯದ ಮದ್ದೂರಿನಲ್ಲಿ ನಡೆದಿದೆ.

ಸುಮಾರು 40 ವರ್ಷದ ಸವಿತ ಎಂಬವರೇ ಕೊಲೆಯಾದ ಮಹಿಳೆ. ಕೊಲೆಗೂ ಮುನ್ನ ದುಷ್ಕರ್ಮಿಗಳು ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗಿದೆ.

ಸವಿತಾ ತನ್ನ ಪತಿ ರಾಜು ಜೊತೆ ಮದ್ದೂರಿನಲ್ಲಿ ಟೀ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ತಾವು ಸಾಕಿದ್ದ ಕುರಿಗೆ ಹುಲ್ಲನ್ನು ತರಲು ಸವಿತಾ ಮದ್ದೂರು ಪಟ್ಟಣದ ಹೊರವಲಯಕ್ಕೆ ಹೋಗಿದ್ದಾರೆ. ಈ ವೇಳೆ ಮುಖಕ್ಕೆ ಬಟ್ಟೆ ಮುಚ್ಚಿಕೊಂಡು ಬಂದ ಇಬ್ಬರು ದುಷ್ಕರ್ಮಿಗಳು ಸವಿತಾ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಸವಿತಾರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಈ ವೇಳೆ ಮಹಿಳೆ ತನ್ನ ಮೇಲೆ ಅತ್ಯಾಚಾರ ಎಸಗಿರೋದಾಗಿ ಹೇಳುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ತೀವ್ರ ರಕ್ತಸ್ರಾವದಿಂದ ಬಳಲಿದ ಮಹಿಳೆ ಆಸ್ಪತ್ರೆಗೆ ದಾಖಲಾದ ತಕ್ಷಣವೇ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ವಿಷಯ ತಿಳಿದ ತಕ್ಷಣ ಮದ್ದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಕೊಲೆ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

Comments

Leave a Reply

Your email address will not be published. Required fields are marked *