ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ಕಾಲಮಿತಿಯೊಳಗೆ ಪೂರ್ಣಗೊಳಿಸಿ: ಕಟೀಲ್

ಮಂಗಳೂರು: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಹಲವು ಕಾಮಗಾರಿಗಳು ಪ್ರಗತಿಯಲ್ಲಿದ್ದು, ಅವುಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕರ ಸೇವೆಗೆ ಸಿಗಬೇಕೆಂದು ಸಂಸದ ನಳಿನ್ ಕುಮಾರ್ ಕಟೀಲ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಂಗಳೂರು ನಗರದ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸ್ಮಾರ್ಟ್‍ಸಿಟಿ ಯೋಜನೆಯಡಿ ರಸ್ತೆಗಳ ಅಭಿವೃದ್ದಿ ಹಾಗೂ ವಿವಿಧ ಕಾಮಗಾರಿಗಳ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆಗಳಾದಂತೆ ಎಚ್ಚರವಹಿಸಬೇಕು, ಕಾಮಗಾರಿಗಳನ್ನು ನಿಗದಿ ಪಡಿಸಿದ ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕರ ಸೇವೆಗೆ ಅರ್ಪಿಸಬೇಕು, ಈ ಯೋಜನೆಯ ಕಾಮಗಾರಿಗಳಿಗಾಗಿ ಮಂಜೂರಾದ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಸಂಬಂಧಿಸಿದ ಅಧಿಕಾರಿಗಳು ಸ್ಥಳದಲ್ಲಿದ್ದು ಕಾಮಗಾರಿಯ ಮೇಲ್ವಿಚಾರಣೆ ಮಾಡಬೇಕು ಎಂದರು. ಇದನ್ನೂ ಓದಿ: ರಾತ್ರಿಯಿಡೀ ಅಶ್ಲೀಲ ಮೆಸೇಜ್ ಕಳಿಸ್ತಿದ್ದ – ಮಂಗಳೂರು ವಕೀಲನ ವಿರುದ್ಧ ವಿದ್ಯಾರ್ಥಿನಿ ಆರೋಪ

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ, ನಗರದ ಎ.ಬಿ. ಶೆಟ್ಟಿ ಸರ್ಕಲ್ ಮುಖಾಂತರ ಹಾದು ಹೋಗುವ ಮಾರ್ಗಗಳ ಬಗ್ಗೆ ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ಒದಗಿಸಬೇಕು, ಈ ಕುರಿತ ಸೂಚನ ಫಲಕಗಳನ್ನು ಕೂಡಲೇ ಅಳವಡಿಸುವಂತೆ ಸಂಬಂಧಿಸಿದವರಿಗೆ ಸೂಚಿಸಿದರು. ಇದನ್ನೂ ಓದಿ: ಕಾನೂನು ಪಾಠ ಮಾಡಬೇಕಿದ್ದ ವಕೀಲನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಈ ವೇಳೆ ವಾಟರ್‍ಫ್ರಂಟ್ ಯೋಜನೆ, ಮಂಗಳಾ ಕ್ರಾನಿಕ್ ರಸ್ತೆ ಮತ್ತು ಇತರ ಸಂಪರ್ಕ ರಸ್ತೆಗಳ ಅಭಿವೃದ್ಧಿ, ಟಿಪಿ ಯೋಜನೆಯನ್ನು ಬಳಸಿಕೊಂಡು ಜಲಾಭಿಮುಖ ಪ್ರದೇಶದ ಸಮಗ್ರ ಅಭಿವೃದ್ಧಿ, ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಯೋಜನೆ ಹಾಗೂ ಇನ್ನಿತರ ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೋನ್ನು ರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್, ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಮಿಶ್ರಾ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *