ಜನರಿಗೆ ಹಣ ಕೊಟ್ಟು ಕರೆಸಿಕೊಂಡು ನಡೆಸುತ್ತಿರುವ ಈ ಜಾತ್ರೆಯಿಂದ ಮೇಕೆದಾಟು ಸಾಕಾರ ಅಸಾಧ್ಯ: ಎಚ್‍ಡಿಕೆ

-ಮೇಕೆದಾಟು ಬಗ್ಗೆ ಬಿಜೆಪಿ-ಕಾಂಗ್ರೆಸ್ ಜಾಹೀರಾತು ಕೊಟ್ಟುಕೊಂಡು ಸಮಜಾಯಿಷಿ
-ಇಂಥ ಹೈಟೆಕ್ ಪಾದಯಾತ್ರೆಯನ್ನು ನೋಡಿರಲಿಲ್ಲ

ಬೆಂಗಳೂರು: ಕಳೆದ 4 ದಿನಗಳಿಂದ ಜಿಲ್ಲೆಗಳಿಂದ ಬಸ್‍ಗಳಲ್ಲಿ ಜನರಿಗೆ ಹಣ ಕೊಟ್ಟು ಕರೆಸಿಕೊಂಡು ನಡೆಸುತ್ತಿರುವ ಈ ಜಾತ್ರೆಯಿಂದ ಮೇಕೆದಾಟು ಸಾಕಾರ ಅಸಾಧ್ಯ. ಇದು ‘ಸೋಂಕಿನ ಸಮಾರಾಧನೆ’ಯಷ್ಟೇ ಹೊರತು ಹೋರಾಟವಲ್ಲ. ಸರ್ಕಾರ ಜಿಲ್ಲೆಗಳಿಂದ ಬರುವ ಜನರನ್ನು ಅಲ್ಲಲ್ಲಿಯೇ ತಡೆಯುವ ಕೆಲಸ ಮಾಡಬೇಕು ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡುವ ಮೂಲಕ ಆಗ್ರಹಿಸಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?:
ಮೇಕೆದಾಟು ಪಾದಯಾತ್ರೆಯನ್ನು ‘ಓಮಿಕ್ರಾನ್ ಜಾತ್ರೆ’ಯನ್ನಾಗಿ ಪರಿವರ್ತಿಸಿದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ಸೋಂಕನ್ನು ನಿರ್ಲಕ್ಷಿಸಿದ ಸರ್ಕಾರಕ್ಕೂ ಚಾಟಿ ಬೀಸಿದೆ. ಕೂಡಲೇ ಈ ಬಗ್ಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ನೀರಿನ ನೆಪದ ಈ ದೊಂಬರಾಟಕ್ಕೆ ಕೊನೆ ಹಾಡಬೇಕು. ಇದನ್ನೂ ಓದಿ: ಪಾದಯಾತ್ರೆಗೆ ಹೈಕೋರ್ಟ್ ಕೆಂಡಾಮಂಡಲ – ಕೈ ಮುಗಿದು ಮುಖದ ಮೇಲೆ ಕೈಯಿಟ್ಟ ಡಿಕೆಶಿ

ಕೋವಿಡ್ ರಕ್ಕಸ ರೂಪ ಪಡೆದು ವೇಗವಾಗಿ ಹರಡುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಅನೇಕ ನಾಯಕರೇ ಪಾಸಿಟವ್ ಆಗಿ ಆಸ್ಪತ್ರೆ ಸೇರಿಕೊಂಡಿದ್ದಾರೆ. ಸರಿಯಾಗಿ ಪರೀಕ್ಷೆ ನಡೆಸಿದರೆ ದೊಡ್ಡ ಸಂಖ್ಯೆಯ ಜನರು ಸೋಂಕಿತರಾಗಿರುವುದು ಬಯಲಾಗುತ್ತದೆ. ನ್ಯಾಯಾಲಯದಿಂದ ಮತ್ತೆ ಛೀಮಾರಿ ಹಾಕಿಸಿಕೊಳ್ಳುವುದು ಬೇಡ. ಪರಿಸ್ಥಿತಿ ಕೈಮೀರಿದೆ. ಎಚ್ಚರ ತಪ್ಪಿದರೆ ಇರುವ ಆಸ್ಪತ್ರೆಗಳು, ವೈದ್ಯ ವ್ಯವಸ್ಥೆ ಸಾಲುವುದಿಲ್ಲ. ಮತ್ತೊಮ್ಮೆ ಸರಕಾರ ಮುಜುಗರಕ್ಕೆ ಒಳಗಾಗುವುದು ಸರಿಯಲ್ಲ. ಇದನ್ನೂ ಓದಿ: ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ ಈಗಲಾದರೂ ಸುಳ್ಳಿನಜಾತ್ರೆ ನಿಲ್ಲಿಸುತ್ತೀರೋ – ಕಾಂಗ್ರೆಸ್‍ಗೆ ಬಿಜೆಪಿ ಪ್ರಶ್ನೆ

ಮೇಕೆದಾಟು ಬಗ್ಗೆ ಏನೇನು ಮಾಡಲಾಗಿದೆ ಎಂದು ಸರ್ಕಾರ ಜಾಹೀರಾತು ನೀಡಿದೆ. ಬಿಜೆಪಿ-ಕಾಂಗ್ರೆಸ್ ಪಕ್ಷಗಳೂ ಜಾಹೀರಾತು ಕೊಟ್ಟುಕೊಂಡು ಸಮಜಾಯಿಷಿ ನೀಡಿವೆ. ಯಾವುದು ಸತ್ಯ? ಯಾವುದು ಸುಳ್ಳು? ಎನ್ನುವ ಲೆಕ್ಕವನ್ನು ನಾನು ಜನರ ಮುಂದೆ ಇಡುತ್ತೇನೆ. 1924ರಿಂದ ಕಾವೇರಿ ವಿಷಯದಲ್ಲಿ ಏನೆಲ್ಲಾ ನಡೆಯಿತು? ರಾಜ್ಯಕ್ಕೆಷ್ಟು ಅನ್ಯಾಯ ಆಯಿತು ಎಂಬುದನ್ನು ಮುಂದೆ ನಾನು ವಿವರವಾಗಿ ಚರ್ಚೆ ಮಾಡುತ್ತೇನೆ. ಕಾಂಗ್ರೆಸ್ ಪಾದಯಾತ್ರೆಯಿಂದ ನಮ್ಮ ಪಕ್ಷಕ್ಕೇನು ಆತಂಕವಿಲ್ಲ. ಆದರೆ ಜನ ಆರೋಗ್ಯದ ಆತಂಕದಲ್ಲಿದ್ದಾರೆ. ಹಾಗಂತ, ಇವರ ಯಾತ್ರೆ ಬಗ್ಗೆ ಅಥವಾ ನಾಡಿನ ಪರ ದನಿಯೆತ್ತುವ ಬಗ್ಗೆ ನನ್ನ ತಕರಾರಿಲ್ಲ. ಆದರೆ, ಕೋವಿಡ್ ಅಟ್ಟಹಾಸದ ಹೊತ್ತಿನಲ್ಲಿ ಇದು ಖಂಡಿತಾ ಬೇಕಿರಲಿಲ್ಲ. ಇದನ್ನೂ ಓದಿ: ಸಿದ್ದರಾಮಯ್ಯಗೆ ತೀವ್ರ ಬೆನ್ನು ನೋವು- ಬೆಂಗ್ಳೂರಿಗೆ ವಾಪಸ್ ಆದ ಮಾಜಿ ಸಿಎಂ

ಗಾಂಧೀಜಿ ಅವರ ಪಾದಯಾತ್ರೆ ಬಗ್ಗೆ ಓದಿದ್ದೇನೆ. ವಿನೋಬಾ ಭಾವೆ ಅವರ ಪಾದಯಾತ್ರೆ ಬಗ್ಗೆ ಅರಿತಿದ್ದೇನೆ. ದೇವೇಗೌಡರ ಪಾದಪಾತ್ರೆಯನ್ನು ಕಣ್ಣಾರೆ ಕಂಡಿದ್ದೇನೆ. ಆದರೆ, ಇಂಥ ‘ಹೈಟೆಕ್ ಪಾದಯಾತ್ರೆ’ಯನ್ನು ನೋಡಿರಲಿಲ್ಲ. ಇಂಥ ದೊಂಬರಾಟದಿಂದ ಕಾನೂನಿನ ವ್ಯಾಪ್ತಿಯಲ್ಲಿರುವ ಮೇಕೆದಾಟು ಯೋಜನೆ ಜಾರಿ ಸಾಧ್ಯವಿಲ್ಲ. ಚುನಾವಣೆ ಹತ್ತಿರದಲ್ಲಿದೆ. ಕಾಂಗ್ರೆಸ್ ಸಂಘಟನೆ ಮಾಡಿಕೊಳ್ಳಲಿ. ಕೋವಿಡ್ ಇಳಿಮುಖವಾದ ನಂತರ ಅದನ್ನು ಮಾಡಲಿ. ಅದನ್ನು ಬಿಟ್ಟು ಜನರ ಜೀವದ ಜೊತೆ ಚೆಲ್ಲಾಟ ಆಡುವುದು ಸರಿಯಲ್ಲ. ಕಾಂಗ್ರೆಸ್ ಒಂದು ಜವಾಬ್ದಾರಿ ಪಕ್ಷವಾಗಿದ್ದರೆ ತಕ್ಷಣ ಪಾದಯಾತ್ರೆ ನಿಲ್ಲಿಸಲಿ. ಗಂಡಸ್ತನ ತೋರಿಸುವುದಕ್ಕೆ ಹೋಗಿ ‘ಮೇಕೆದಾಟನ್ನು ಮಸಣ’ ಮಾಡುವುದು ಬೇಡ.

ಕಳೆದ 4 ದಿನಗಳಿಂದ ಸರ್ಕಾರ ತೋರಿದ ಉದಾರತೆ ಸಾಕು. ಇನ್ನೂ ಔದಾರ್ಯ ತೋರಿದರೆ ರಾಜ್ಯದ ಅವನತಿಗೆ ದಾರಿಯಾದೀತು. ಕೋವಿಡ್ ನಿಯಮ ಪಾಲಿಸುವಂತೆ ಜನರಿಗೆ ಹಿಂಸೆ ಕೊಟ್ಟು, ರಾಜಕಾರಣಿಗಳಿಗೆ ವಿನಾಯಿತಿ ಕೊಡುವುದು ಉತ್ತಮ ಆಡಳಿತದ ಲಕ್ಷಣವಲ್ಲ. ಸರ್ಕಾರ ಕೆಚ್ಚೆದೆಯ ಕ್ರಮ ಕೈಗೊಳ್ಳಬೇಕು.

Comments

Leave a Reply

Your email address will not be published. Required fields are marked *