ಏತ ನೀರಾವರಿ ಯೋಜನೆ ಮೂಲಕ ಕೆರೆಗಳನ್ನ ತುಂಬಿಸಿ – ಸಚಿವ ಬೋಸರಾಜು ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಮಳೆಯ (Karnataka Rains) ಪ್ರಮಾಣ ಹೆಚ್ಚಾಗಿದ್ದು ಅಣೆಕಟ್ಟುಗಳು ತುಂಬಿವೆ. ನಮ್ಮ ಇಲಾಖೆಯ ವ್ಯಾಪ್ತಿಯ ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌ ಬೋಸರಾಜು (NS Bosaraju) ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಕಾಸಸೌಧದಲ್ಲಿಂದು ಪಿಎಂಕೆಎಸ್‌ವೈ ಕಾಮಗಾರಿಗಳ (PMKSY works) ಪ್ರಗತಿ ಪರಿಶೀಲನೆ ಹಾಗೂ ಕೇಂದ್ರ ಅನುದಾನದ ಕುರಿತು ಚರ್ಚಿಸಲು ಕೇಂದ್ರ ಜಲ ಆಯೋಗದ ನಿರ್ದೇಶಕರು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯ ನಡೆಸಲಾಯಿತು.

ಪಿಎಂಕೆಎಸ್‌ವೈ ಯೋಜನೆ ಅಡಿಯಲ್ಲಿ ಈಗಾಗಲೇ ಮಂಜೂರಾಗಿರುವ ಯೋಜನೆಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದ ಸಚಿವರು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು. ಈಗಾಗಲೇ ಸಲ್ಲಿಸಲಾಗಿರುವ ಪ್ರಸ್ತಾವನೆಗಳ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಜಲ ಆಯೋಗದ ನಿರ್ದೇಶಕರು, ಅದಕ್ಕೆ ಬೇಕಾದಂತಹ ಅಗತ್ಯ ಕ್ರಿಯಾಯೋಜನೆ ಸಲ್ಲಿಸುವಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆರೆಗಳನ್ನು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿ:
ರಾಜ್ಯಾದ್ಯಾಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಹತೇಕ ಅಣೆಕಟ್ಟುಗಳು ತುಂಬಿವೆ. ಆದರೂ ಕೆಲವು ಕೆರೆಗಳಲ್ಲಿ ಹೆಚ್ಚಿನ ನೀರಿನ ಸಂಗ್ರಹವಾಗದೇ ಇರುವ ಬಗ್ಗೆ ಅಧಿಕಾರಿಗಳು ವರದಿಯನ್ನು ನೀಡಿದ್ದಾರೆ. ಅಣೆಕಟ್ಟುಗಳಲ್ಲಿ ನೀರಿನ ಲಭ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದ ಕೆರೆ ತುಂಬಿಸುವ ಕಾರ್ಯವನ್ನ ಮರುಚಾಲನೆಗೊಳಿಸಬೇಕು. ಎಲ್ಲಾ ಕೆರೆಗಳು ತುಂಬುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳುವುದಲ್ಲದೇ, ಅವುಗಳ ಸಮರ್ಪಕ ನಿರ್ವಹಣೆಗೂ ಆದ್ಯತೆ ನೀಡುವಂತೆ ಸೂಚನೆ ನೀಡಿದರು.

ನಿಷ್ಕ್ರಿಯಗೊಂಡಿರುವ ಏತ ನೀರಾವರಿ ಯೋಜನೆ ವರದಿ ನೀಡಿ:
ಆಯಾ ಕಾಲಕ್ಕೆ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಹಲವಾರು ಏತ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಂಡು ಅವುಗಳ ನಿರ್ಮಾಣ ಮಾಡಲಾಗಿದೆ. ಅವುಗಳ ನಿರ್ವಹಣೆ ಅವಧಿ ಮುಗಿದ ನಂತರ ಹಾಗೂ ಕಾಲಕ್ರಮೇಣ ಹಲವು ನಿಷ್ಕ್ರಿಯಗೊಂಡಿವೆ. ಆಯಾ ವಲಯವಾರು ಕೈಗೊಂಡಿರುವ ಏತ ನೀರಾವರಿ ಯೋಜನೆಗಳ ಬಗ್ಗೆ, ಈಗ ಚಾಲ್ತಿಯಲ್ಲಿರುವ, ಸರಿಯಾದ ನಿರ್ವಹಣೆ ಆಗುತ್ತಿರುವ ಹಾಗೂ ನಿಷ್ಕ್ರಿಯಗೊಂಡಿರುವ ಯೋಜನೆಗಳ ಬಗ್ಗೆ ವರದಿ ನೀಡಬೇಕು. ಇವುಗಳನ್ನು ಪುನರುಜ್ಜೀವನಗೊಳಿಸಿದರೇ ಆಗುವ ಅನುಕೂಲಗಳು ಹಾಗೂ ಅದಕ್ಕೆ ತಗಲುವ ವೆಚ್ಚದ ಬಗ್ಗೆಯು ಮಾಹಿತಿಯನ್ನು ಅದರಲ್ಲಿ ಅಳವಡಿಸುವಂತೆ ಸೂಚನೆ ನೀಡಿದರು.

ವಿಭಾಗವಾರು ಹಾಗೂ ಉಪವಿಭಾಗವಾರು ಕಚೇರಿಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಜಾಗದ ಕೊರತೆಯಿದ್ದಲ್ಲಿ ಆಯಾ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರದ ಗಮನಕ್ಕೆ ತರುವಂತೆ ಸೂಚನೆ ನೀಡಿದರು. ತೆರೆದ ಬಾವಿಗಳು ಹಾಗೂ ಹೂಳು ಎತ್ತುವ ಹೊಸ ಯೋಜನೆಗಳ ಪ್ರಸ್ತಾವನೆ ಸಲ್ಲಿಸುವುದನ್ನೂ ನಿಲ್ಲಿಸುವಂತೆ ಸೂಚಿಸಿದರು.

ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿಗಳಾದ ರಾಘವನ್‌, ಕೇಂದ್ರ ಜಲ ಆಯೋಗದ ನಿರ್ದೇಶಕ ಹರ್ಷ ಸೇರಿದಂತೆ ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ಸ್‌ ಉಪಸ್ಥಿತರಿದ್ದರು.