ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ನಾಲ್ಕಂತಸ್ತಿನ ಕಟ್ಟಡದಿಂದ ಜಿಗಿದ ಅಪ್ರಾಪ್ತೆ – ವಿಡಿಯೋ ವೈರಲ್

ಮುಂಬೈ: ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಅಪ್ರಾಪ್ತ ಬಾಲಕಿಯೊಬ್ಬಳು ಮಹಡಿಯಿಂದ ಕೆಳಗೆ ಧುಮುಕಿರುವ ಆಘಾತಕಾರಿ ಘಟನೆ ನಗರದಲ್ಲಿ ನಡೆದಿದೆ.

ಮಹಡಿಯಿಂದ ಕೆಳಕ್ಕೆ ಜಿಗಿದ ಪರಿಣಾಮ ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

12 ವರ್ಷದ ಬಾಲಕಿಯನ್ನು ನಂಬಿಸಿ ವ್ಯಕ್ತಿಯೊಬ್ಬ ನಿರ್ಮಾಣ ಹಂತದ ನಾಲ್ಕಂತಸ್ತಿನ ಕಟ್ಟಡಕ್ಕೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದ್ದಾನೆ. ಆತನಿಂದ ತಪ್ಪಿಸಿಕೊಂಡು ಬಂದ ಬಾಲಕಿ ಕಟ್ಟಡದಿಂದ ಕೆಳಗೆ ಧುಮುಕುಲು ಅಣಿಯಾಗಿದ್ದಳು. ಇದನ್ನು ಗಮನಿಸಿದ ಆಟೋ ಗ್ಯಾರೇಜಿನ ಮೂವರು ಕಾರ್ಮಿಕರು ತಕ್ಷಣ ಮಹಡಿಗೆ ಓಡಿದ್ದು, ಅಷ್ಟರಲ್ಲಾಗಲೇ ಬಾಲಕಿ ಕೆಳಗೆ ಜಿಗಿದಿದ್ದಾಳೆ. ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಾಲಕಿಯ ಬೆನ್ನಿಗೆ ಗಂಭೀರವಾಗಿ ಪೆಟ್ಟಾಗಿದೆ. ಆಕೆಯ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಆರೋಪಿ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ. ಅಲ್ಲದೇ ಘಟನೆ ನಡೆದ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸುತ್ತಿರುವುದಾಗಿ ಇನ್ಸ್ ಪೆಕ್ಟರ್ ಹೇಳಿದ್ದಾರೆ.

Comments

Leave a Reply

Your email address will not be published. Required fields are marked *