ಸಿದ್ದರಾಮಯ್ಯ ಬಂದ್ಮೇಲೆ ಕಾಂಗ್ರೆಸ್ ಬಲಿಷ್ಠವಾಗಿದೆ – ಜನಾರ್ದನ ಪೂಜಾರಿಗೆ ಜಮೀರ್ ತಿರುಗೇಟು

ಹಾವೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‍ಗೆ ಬಂದ ಮೇಲೆ ಪಕ್ಷ ಬಲಿಷ್ಠವಾಗಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಬೋರ್ಡ್ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

ಇಂದು ಹಾವೇರಿ ನಗರದಲ್ಲಿ ಏರ್ಪಡಿಸಲಾಗಿದ್ದ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಜನಾರ್ದನ ಪೂಜಾರಿ ಹೇಳಿಕೆಗೆ ತಿರುಗೇಟು ನೀಡಿದರು. ಅವರು ಪಕ್ಷದ ಅಧ್ಯಕ್ಷರಾಗಿದ್ದವರು. ಅವರಿದ್ದಾಗ ಪಕ್ಷ ಹೇಗಿತ್ತು ಎನ್ನುವುದು ಗೊತ್ತಿದೆ. ಸಿದ್ದರಾಮಯ್ಯ ಅವರ ಶಕ್ತಿ ಪಕ್ಷ ಕಾರ್ಯಕರ್ತರಿಗೆ ಗೊತ್ತಿದೆ. ಆದರೆ ಪಾಪ ಜನಾರ್ದನ ಪೂಜಾರಿ ಅವರಿಗೆ ಗೊತ್ತಿಲ್ಲ ಎಂದರು.

ಕಾಂಗ್ರೆಸ್ ಪಕ್ಷವನ್ನು ಯಾರು ಮುಗಿಸಿದ್ದಾರೆ ಎನ್ನುವುದು ಕೂಡ ತಿಳಿದಿದ್ದು, ಸಿದ್ದರಾಮಯ್ಯ ಅವರು ಪಕ್ಷಕ್ಕೆ ಬಂದ ಕಾಲದಿಂದಲೂ ಅದನ್ನೇ ಹೇಳಿಕೊಂಡು ಬರುತ್ತಿದ್ದಾರೆ. ಆದರೆ ಅಂದಿನಿಂದಲೂ ಕೂಡ ಪಕ್ಷ ಮತ್ತಷ್ಟು ಬಲಿಷ್ಠ ಆಗುತ್ತಾ ಬರುತ್ತಿದೆ. ಎಲ್ಲವನ್ನ ಪಕ್ಷದ ಕಾರ್ಯಕರ್ತರು ನಿರ್ಧಾರ ಮಾಡುತ್ತಾರೆ ಎಂದು ಹೇಳಿ ಟಾಂಗ್ ನೀಡಿದರು.

ಮಂಗಳೂರಿನಲ್ಲಿ ಗುರುವಾರ ಮಾತನಾಡಿದ್ದ ಜನಾರ್ದನ ಪೂಜಾರಿ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್ ಮುಗಿಸುವುದಕ್ಕೆ ಪಕ್ಷ ಸೇರಿಕೊಂಡರು. ಸಿದ್ದರಾಮಯ್ಯನವರಿಂದ ಇಂದು ಸಮ್ಮಿಶ್ರ ಸರ್ಕಾರ ರಚನೆಯಾಗಿಲ್ಲ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಸಿಎಂ ಕುಮಾರಸ್ವಾಮಿ ಅವರಿಂದ ಮೈತ್ರಿ ಸರ್ಕಾರ ಉಳಿದುಕೊಂಡಿದೆ. ಸರ್ಕಾರ ಉಳಿಯುವಲ್ಲಿ ದೊಡ್ಡ ಗೌಡರದ್ದು ಮಹತ್ವದ ಪಾತ್ರವಿದೆ. ದೇವೇಗೌಡರನ್ನು ಯಾರು ಲಘುವಾಗಿ ತೆಗೆದುಕೊಳ್ಳಬಾರದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಹೇಳಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *