ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

– ಕಳೆದ 2 ತಿಂಗಳಲ್ಲಿ ಮೂವರು ಸಾವು

ಶಿವಮೊಗ್ಗ: ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಅರಳಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕಸಗುಪ್ಪೆ ಗ್ರಾಮದ ನಿವಾಸಿ ಕೋಮರಾಜ್ ಜೈನ್ (32) ಎಂದು ಗುರುತಿಸಲಾಗಿದೆ. ಈ ಘಟನೆಯಿಂದಾಗಿ ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ಮಂಗನ ಕಾಯಿಲೆಗೆ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದಂತಾಗಿದೆ.

ಮೂಲತಃ ಕೃಷಿಕರಾಗಿದ್ದ ಮೃತ ಕೋಮರಾಜ್ ಜೈನ್ ಕಳೆದೊಂದು ವಾರದಿಂದ ಜ್ವರ ಹಾಗೂ ದೊಡ್ಡ ಕರಳು ಬೇನೆಯಿಂದ ಬಳಲುತ್ತಿದ್ದರು. ಹೀಗಾಗಿ ಈ ಮೊದಲು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ವೈದ್ಯರು ಪರಿಕ್ಷೀಸಿದಾಗ ಮಂಗನ ಕಾಯಿಲೆ ಇರುವುದು ಪತ್ತೆಯಾಗಿತ್ತು.

ಅಲ್ಲದೇ ಕಳೆದ ನಾಲ್ಕು ದಿನಗಳ ಹಿಂದೆ ಮತ್ತೆ ಜ್ವರ ಕಾಣಿಸಿಕೊಂಡಿದ್ದರಿಂದ ಕೋಮರಾಜ್ ಜೈನ್‍ರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೋಮರಾಜ್ ಜೈನ್ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Comments

Leave a Reply

Your email address will not be published. Required fields are marked *