ಸಂಕಷ್ಟದಲ್ಲಿರುವ ದೇಶವಾಸಿಗಳಿಗೆ ವಿಶೇಷ ಪ್ಯಾಕೇಜ್ – ಮೋದಿ ನಡೆಗೆ ಸೋನಿಯಾ, ರಾಹುಲ್ ಬೆಂಬಲ

ನವದೆಹಲಿ: ಕೊರೊನಾ ವೈರಸ್‍ನಿಂದ ದೇಶದಲ್ಲಿ ಆಗುತ್ತಿರುವ ಪರಿಣಾಮವನ್ನು ತಡೆಗಟ್ಟಿ ಜನರಿಗೆ ನೆರವಾಗಲು ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಈ ನಡೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಅವರು ಪುತ್ರ ರಾಹುಲ್ ಗಾಂಧಿಯವರು ಮೆಚ್ಚುಗೆ ಸೂಚಿಸಿದ್ದಾರೆ.

ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ 21 ದಿನಗಳ ಕಾಲ ಲಾಕ್‍ಡೌನ್ ಘೋಷಿಸಿದ್ದಾರೆ. ಇದು ಜನರ ಜೀವನ ಮತ್ತು ಆರ್ಥಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ. ಹೀಗಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಕೊರೊನಾ ವೈರಸ್ ಬಿಕ್ಕಟ್ಟಿನಿಂದ ಹೊರಬರಲು 1.70 ಲಕ್ಷ ಕೋಟಿ ರೂ. ಪರಿಹಾರದ ಪ್ಯಾಕೇಜ್ ಘೋಷಿಸಿದ್ದಾರೆ.

ಕೇಂದ್ರ ಸರ್ಕಾರದ ಈ ತೀರ್ಮಾನವನ್ನು ಮೆಚ್ಚಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕೊರೊನಾದಿಂದ ಆತಂಕಕೊಳಗಾದ ಜನರಿಗೆ ಹಣಕಾಸಿನ ನೆರವು ಪ್ಯಾಕೇಜ್ ಅನ್ನು ಇಂದು ಸರ್ಕಾರದ ಪ್ರಕಟಣೆ ಮಾಡುವ ಮೂಲಕ ಸರಿಯಾದ ದಿಕ್ಕಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ. ಈ ಲಾಕ್‍ಡೌನ್‍ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರು, ದೈನಂದಿನ ಕೂಲಿ ಮಾಡುವವರು, ಕಾರ್ಮಿಕರು, ಮಹಿಳೆಯರು ಮತ್ತು ವೃದ್ಧರಿಗೆ ಭಾರತ ಸರ್ಕಾರವು ಸಾಲ ನೀಡಬೇಕಿದೆ ಎಂದು ಬರೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದ್ದ ಸೋನಿಯಾ ಗಾಂಧಿ ಅವರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿ, ಕೊರೊನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ತೆಗೆದುಕೊಳ್ಳುವ ಪ್ರತಿಯೊಂದು ಹೆಜ್ಜೆಯನ್ನೂ ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ ಮತ್ತು ಸಹಕರಿಸುತ್ತೇವೆ ಎಂದು ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ನಿರ್ಮಲಾ ಸೀತಾರಾಮನ್ ಅವರು, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅಕ್ಕಿ ಯೋಜನೆ ಅಡಿ ಈಗಾಗಲೇ 5 ಕೆಜಿ ಅಕ್ಕಿ/ ಗೋಧಿ ನೀಡಲಾಗುತ್ತಿದೆ. ಇದರ ಜೊತೆ ಹೆಚ್ಚುವರಿಯಾಗಿ ಮೂರು ತಿಂಗಳ ಕಾಲ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ. ವಲಸೆ ಕಾರ್ಮಿಕರು, ನಗರ ಮತ್ತು ಗ್ರಾಮೀಣ ಬಡವವರಿಗೆ, ತಕ್ಷಣದ ಸಹಾಯದ ಅಗತ್ಯವಿರುವ ಬಡವರಿಗೆ ಪ್ಯಾಕೇಜ್ ಸಿದ್ಧವಾಗಿದೆ. ಯಾರೂ ಹಸಿವಿನಿಂದ ಬಳಲಬಾರದು ಎನ್ನುವುದು ನಮ್ಮ ಸರ್ಕಾರ ಉದ್ದೇಶ. ಹೀಗಾಗಿ 1.7 ಲಕ್ಷ ಕೋಟಿ ರೂ. ಮೌಲ್ಯದ ಪ್ಯಾಕೇಜ್ ಘೋಷಣೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದರು.

8.69 ಕೋಟಿ ರೂ. ರೈತರ ಖಾತೆಗೆ ಈ ಕೂಡಲೇ ಏಪ್ರಿಲ್ ತಿಂಗಳ 2 ಸಾವಿರ ರೂ. ಹಣವನ್ನು ಹಾಕಲಾಗುವುದು. ನರೇಗಾ ಯೋಜನೆ ಅಡಿ ಕೆಲಸ ಮಾಡುವ ಪ್ರತಿ ಕಾರ್ಮಿಕರಿಗೆ 2 ಸಾವಿರ ರೂ. ಹೆಚ್ಚುವರಿಯಾಗಿ ನೀಡಲಾಗುವುದು ಎಂದರು.

ಕೇಂದ್ರದ ವಿಶೇಷ ಪ್ಯಾಕೇಜ್‍ನ ಮುಖ್ಯಾಂಶಗಳು
1. ಕೊರೊನಾ ವೈರಸ್ ಸೊಂಕಿತರಿಗೆ ಚಿಕಿತ್ಸೆ ನೀಡುತ್ತಿರುವವರು, ಸೋಂಕಿನ ಅಪಾಯ ಇರುವವರಿಗೆ ಆರೋಗ್ಯ ವಿಮೆ. ಆರೋಗ್ಯ ಕಾರ್ಯಕರ್ತರಿಗೆ 50 ಲಕ್ಷ ವಿಮೆ.
2. ವಿಧವೆಯರು, ಹಿರಿಯ ನಾಗರಿಕರು, ದಿವ್ಯಾಂಗರು ಅಂಗವಿಕರಿಗೆ ಒಂದು ಬಾರಿಯ ಪರಿಹಾರ ಮೊತ್ತ 1,000 ರೂ. ಸಿಗಲಿದೆ. ಎರಡು ಕಂತುಗಳಲ್ಲಿ ಹಣ ಬಿಡುಗಡೆಯಾಗಲಿದ್ದು, ಸುಮಾರು 3 ಕೋಟಿ ಜನರಿಗೆ ಇದರಿಂದ ಅನುಕೂಲ.
3. 3 ತಿಂಗಳ ಕಾಲ ಮಹಿಳಾ ಜನ ಧನ್ ಖಾತೆಗೆ 500 ರೂ. ಹಾಕಲಾಗುವುದು. ಉಜ್ವಲ ಯೋಜನೆ ಅಡಿಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸಂಪರ್ಕ ಪಡೆದಿರುವ ಮಹಿಳೆಯರಿಗೆ 3 ತಿಂಗಳ ವರೆಗೂ ಮೂರು ಅನಿಲ ಸಿಲಿಂಡರ್ಗಳು ಉಚಿತ ವಿತರಣೆ. ಈ ನಿರ್ಧಾರದಿಂದ 8 ಕೋಟಿ ಮಹಿಳೆಯರು ಲಾಭ.
4. ಮುಂದಿನ ತಿಂಗಳ ಸಂಸ್ಥೆಗಳು ಮತ್ತು ಉದ್ಯೋಗಿಗಳ ಇಪಿಎಫ್ ಮೊತ್ತವನ್ನು ಸರ್ಕಾರವೇ ತುಂಬಲಿದೆ. 100 ಉದ್ಯೋಗಿಗಳು ಇರುವ ಸಂಸ್ಥೆ ಹಾಗೂ ತಿಂಗಳಿಗೆ 15,000 ರೂ.ವರೆಗೂ ವೇತನ ಪಡೆಯುತ್ತಿರುವ ಉದ್ಯೋಗಿಗಳಿರುವ ಸಂಸ್ಥೆಗಳಿಗೆ ಇದರ ಲಾಭ ಸಿಗಲಿದೆ.
5. ಇಪಿಎಫ್ ಯೋಜನೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಮೂಲಕ ಮರು ಪಾವತಿ ಮಾಡದಿರದ ವ್ಯವಸ್ಥೆಯಡಿ ಶೇ.75ರಷ್ಟು ಇಪಿಎಫ್ ಮುಂಗಡ ಮೊತ್ತ ಪಡೆಯಲು ಅವಕಾಶ ಸಿಗುತ್ತದೆ. ಕಾರ್ಮಿಕರು 3 ತಿಂಗಳ ಸಂಬಳ ಅಥವಾ ಶೇ.75ರಷ್ಟು ಮುಂಗಡ ಮೊತ್ತ;, ಇದರಲ್ಲಿ ಯಾವುದು ಕಡಿಮೆಯೋ ಅದನ್ನು ಪಡೆಯಬಹುದಾಗಿದೆ. ಇದರಿಂದ ಇಪಿಎಫ್ ನೋಂದಾಯಿಸಿರುವ ಸುಮಾರು 4.8 ಕೋಟಿ ಉದ್ಯೋಗಿಗಳಿಗೆ ಅನುಕೂಲವಾಗಲಿದೆ.

Comments

Leave a Reply

Your email address will not be published. Required fields are marked *