ಕುಶಾಲನಗರ-ಸಂಪಾಜೆ ಚತುಷ್ಪಥ ರಸ್ತೆ ನಿರ್ಮಾಣ ಇಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ

ಮಡಿಕೇರಿ: ಕುಶಾಲನಗರದಿಂದ ಸಂಪಾಜೆವರೆಗೆ ನಾಲ್ಕು ಪಥದ ರಸ್ತೆ ನಿರ್ಮಾಣ ಆಗುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟಪಡಿಸಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕುಶಾಲನಗರದಿಂದ ಸಂಪಾಜೆಯವರೆಗೆ ಈಗಿರುವ ರಸ್ತೆ ಸ್ವಲ್ಪ ವಿಸ್ತರಣೆ ಆಗಲಿದೆ. ಸುಂಟಿಕೊಪ್ಪದಲ್ಲಿ ಬೈಪಾಸ್ ರಸ್ತೆ ನಿರ್ಮಾಣವಾಗಲಿದೆ. ಕುಶಾಲನಗರದಿಂದ ಸಂಪಾಜೆ ವರೆಗೆ 18 ಕಡೆ ತಡೆಗೋಡೆ ನಿರ್ಮಾಣವಾಗಿದೆ. 98 ಕೋಟಿ ರೂ. ವೆಚ್ಚದಲ್ಲಿ ಹೊಸ ಸೇತುವೆ ಹಾಗೂ ಇತರೆ ಕೆಲಸಗಳು ಆಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಖಾಸಗಿ ಬಸ್‍ಗಳ ಲೈಸನ್ಸ್ ರದ್ದು ಮಾಡುತ್ತೇವೆ: ಶ್ರೀರಾಮುಲು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ಎಲ್ಲಾ ಜನಸಾಮಾನ್ಯರಿಗೂ ತಲುಪುವಂತೆ ಇದ್ದು, ಕೈಗಾರಿಕೆ, ಕೃಷಿ ವಲಯದವರ ದುಃಖ ದುಮ್ಮಾನಗಳಿಗೆ ಸ್ಪಂದಿಸುವ ಮುಂಗಡ ಪತ್ರವಾಗಿದೆ. ಕೊಡಗು ಜಿಲ್ಲೆಗೆ ಬಜೆಟ್‌ನಲ್ಲಿ ವಿಶೇಷ ಕೊಡುಗೆ ನೀಡಲಾಗಿದೆ. ಶಾಸಕ ಕೆ.ಜಿ.ಬೋಪಯ್ಯ, ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಗೆ ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಜೆಟ್‌ನಲ್ಲಿ ಕೊಡವ ಜನಾಂಗದ ಅಭಿವೃದ್ಧಿಗಾಗಿ 10 ಕೋಟಿ ರೂ. ಪ್ರಕಟಿಸಿದ್ದಾರೆ ಎಂದು ಹೇಳಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ವಿಶೇಷ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಈಗಾಗಲೇ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಎಂಜಿನಿಯರಿಂಗ್ ಕಾಲೇಜು ಆರಂಭವಾಗಿ ಕಾರ್ಯನಿರ್ವಹಿಸುತ್ತಿವೆ. ಕೆ.ಜಿ.ಬೋಪಯ್ಯ ಮತ್ತು ಅಪ್ಪಚ್ಚು ರಂಜನ್ ಪ್ರಯತ್ನದಿಂದ ಕೊಡಗು ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಆಗಿರುವುದನ್ನು ಯಾರೂ ಮರೆಯುವಂತಿಲ್ಲ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಕುಲಪತಿಗಳ ಸರ್ಕಾರಿ ಬಂಗಲೆಗೆ ಬೇಕಾಬಿಟ್ಟಿ ಖರ್ಚು – ಕುಲಪತಿ ಮೇಲೆ ಗಂಭೀರ ಆರೋಪ

ಕೊಡಗು ಜಿಲ್ಲೆಯಲ್ಲಿ ಜನಸಂಖ್ಯೆ ಕಡಿಮೆಯಿದ್ದರೂ ಸರ್ಕಾರದಿಂದ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಆಗುತ್ತಿವೆ ಎಂಬುದನ್ನು ಮರೆಯುವಂತಿಲ್ಲ. ಈ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಕ್ಕೆ, ಶಾಸಕರು, ವಿಧಾನ ಪರಿಷತ್ ಸದಸ್ಯರು ಹೀಗೆ ಎಲ್ಲರೂ ಕೈಜೋಡಿಸಿದ್ದಾರೆ. ಕಾಡಾನೆ ಹಾವಳಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರೈಲ್ವೆ ಕಂಬಿ ಅಳವಡಿಸುವ ನಿಟ್ಟಿನಲ್ಲಿ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಒಟ್ಟು 100 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟಿನಲ್ಲಿ ಘೋಷಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Comments

Leave a Reply

Your email address will not be published. Required fields are marked *