ನಾಳೆ ಎಲ್ಲಾ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸೋಮವಾರ ಮಧ್ಯಾಹ್ನ 3 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

ಹೆಮ್ಮಾರಿ ಕೊರೊನಾ ವೈರಸ್‍ನಿಂದಾಗಿ ಹೇರಿದ್ದ ಲಾಕ್‍ಡೌನ್ ಸೇರಿದಂತೆ ವಿವಿಧ ಕ್ರಮ, ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಪ್ರಧಾನಿ ಸಭೆಯಲ್ಲಿ ಚರ್ಚಿಸಲಿದ್ದಾರೆ. ಮೇ 17ರಂದು ಮೂರನೇ ಹಂತದ ಲಾಕ್‍ಡೌನ್ ಮುಕ್ತಾಯವಾಗಲಿದೆ. ಮುಂದೆ ಯಾವ ರೀತಿ ಕ್ರಮ ಕೈಗೊಳ್ಳಬೇಕು, ರಾಜ್ಯದಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎಂಬ ವಿಚಾರವಾಗಿ ಸಲಹೆ ಸಂಗ್ರಹಿಸಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

ಮೂಲಗಳ ಪ್ರಕಾರ, ಕೊರೊನಾ ಸೋಂಕಿತರ ಸಂಖ್ಯೆ ಆಧಾರದ ಮೇಲೆ ಮಾಡಿರುವ ರೆಡ್, ಆರೇಂಜ್ ಹಾಗೂ ಗ್ರೀನ್ ಝೋನ್ ನಿಯಮಗಳ ಬಗ್ಗೆ ಅನೇಕ ರಾಜ್ಯಗಳು ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿವೆ. ಜೊತೆಗೆ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಹೋಗಲು ನೀಡಿದ ಎಡವಟ್ಟಿನಿಂದ ಗ್ರೀನ್ ಝೋನ್ ಪ್ರದೇಶಗಳು ಕೂಡ ಕೊರೊನಾ ಸೋಂಕಿನಿಂದ ತತ್ತರಿಸಿ ಹೋಗಿವೆ ಎಂಬುದು ಅನೇಕ ರಾಜ್ಯಗಳ ಆರೋಪವಾಗಿದೆ.

ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಮೀಷನರ್ ಜೊತೆಗೆ ಸುದೀರ್ಘ ಚರ್ಚೆ ನಡೆಸಲಿದ್ದಾರೆ. ಮುಂದಿನ ನಡೆಯ ಬಗ್ಗೆ ಸಲಹೆಯನ್ನು ಪಡೆಯಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.

Comments

Leave a Reply

Your email address will not be published. Required fields are marked *