ಮಧ್ಯವರ್ತಿಗಳಿಗೆ ಅವಕಾಶವಿಲ್ಲ, ನೇರವಾಗಿ ರೈತರ ಖಾತೆಗಳಿಗೆ ಬೆಳೆ ಪರಿಹಾರ- ಅಶೋಕ್

ಬೆಂಗಳೂರು: ಬೆಳೆ ಪರಿಹಾರದ ಮೊತ್ತವನ್ನು ಮಧ್ಯವರ್ತಿಗಳಿಗೆ ಅವಕಾಶವಿಲ್ಲದಂತೆ ನೇರವಾಗಿ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯಾದ್ಯಂತ ಸುರಿದ ಅಕಾಲಿಕ ಮಳೆಯಿಂದ ಅಪಾರ ಬೆಳೆ ಮತ್ತು ಆಸ್ತಿ ಹಾನಿ ಸಂಭವಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ತುಮಕೂರು, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆ ಪ್ರವಾಸ ನಡೆಸಿ ಪರಿಶೀಲನೆ ನಡೆಸಿ ಶೀಘ್ರ ಪರಿಹಾರ ವಿತರಿಸುವ ಭರವಸೆ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಜನಪದರ ಬಾಯಲ್ಲಿ ಹಾಡಾದ ಪುನೀತ್ – ತಾಯಂದಿರ ಕಣ್ಣಲ್ಲಿ ನೀರು ತರಿಸ್ತಿದೆ ಹಾಡು

ಬೆಳೆ ಪರಿಹಾರಕ್ಕೆ ಸಂಬಂಧಿಸಿದಂತೆ ‘ಇಂದಿನವರೆಗೆ 3 ಲಕ್ಷ ರೈತರಿಗೆ 226.57 ಕೋಟಿ ಪರಿಹಾರ ವಿತರಿಸಿದ್ದೇವೆ. ಇಂದು 1.61 ರೈತರಿಗೆ 92.30 ಕೋಟಿ ಹಣ ಬಿಡುಗಡೆ ಮಾಡುತ್ತಿದ್ದೇವೆ. ಒಟ್ಟು 4.61 ರೈತರಿಗೆ 318.87 ಕೋಟಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಆಗಿದ್ದು, ಮಧ್ಯವರ್ತಿಗಳಿಗೆ ಯಾವುದೇ ಅವಕಾಶ ಸಿಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಹೇಳಿದರು.

ಈ ಹಿಂದೆ ಮೂರು ತಿಂಗಳಿಗೊಮ್ಮೆ ಬೆಳೆ ಪರಿಹಾರ ವಿತರಿಸಲಾಗುತ್ತಿತ್ತು. ಈಗ ಈ ವ್ಯವಸ್ಥೆಯನ್ನು ಸಂಪೂರ್ಣ ಬದಲಾವಣೆ ಮಾಡಿದ್ದು, ಎರಡು ಮೂರು ದಿನಕ್ಕೆ ಒಮ್ಮೆ ತಂತ್ರಾಂಶದಲ್ಲಿ ನಮೂದಿಸಿ ಪರಿಹಾರ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ಮಾಡಲಾಗಿದೆ. ಕೇಂದ್ರಕ್ಕೆ ಹೆಚ್ಚಿನ ಪರಿಹಾರ ನೀಡುವಂತೆ ವರದಿ ಸಿದ್ಧಪಡಿಸುತ್ತಿದ್ದೇವೆ. ಬೆಳೆ ಪರಿಹಾರ ನೀಡಲು ರಾಜ್ಯದಲ್ಲಿ ಹಣಕಾಸಿನ ಕೊರತೆ ಇಲ್ಲ. ರೈತರಿಗೆ ಅನುಕೂಲವಾಗಬೇಕು. ರೈತರ ಹಿತ ಕಾಯಲು ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎಂದರು.

ಸದ್ಯಕ್ಕಿಲ್ಲ ಲಾಕ್ ಡೌನ್
ಲಾಕ್‍ಡೌನ್ ಕುರಿತು ಮಾತನಾಡಿದ ಅವರು, ಸದ್ಯಕ್ಕೆ ಲಾಕ್ ಡೌನ್ ಇಲ್ಲ. ರಾಜ್ಯದ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಹೊರ ರಾಜ್ಯಗಳಿಂದ ಬಂದ ವಿದ್ಯಾರ್ಥಿಗಳಿಗೆ ಎರಡು ಬಾರಿ ಪರೀಕ್ಷೆ ನಡೆಸಬೇಕು. ನಿರಂತರವಾಗಿ ಸರ್ಕಾರ ಕೋವಿಡ್ ಪರಿಸ್ಥಿತಿಯ ಅವಲೋಕನ ಮಾಡುತ್ತಿದೆ. ಹೊರದೇಶದಿಂದ ಬರುವವರನ್ನು ತೀವ್ರ ತಪಾಸಣೆಗೆ ಒಳಪಡಿಸುತ್ತೇವೆ. ಹೊರದೇಶಗಳ ಸ್ಥಿತಿ ಸಹ ನಮ್ಮ ಗಮನದಲ್ಲಿದೆ ಎಂದರು.

ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸಾಕಷ್ಟು ಹಣ ಬಿಡುಗಡೆ ಮಾಡುತ್ತೇನೆ. ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ. ಸಾರ್ವಜನಿಕರು ಸಹಕರಿಸಬೇಕು. ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳುತ್ತದೆ. ಜನರು ಭಯ ಬಿಟ್ಟು ಜವಾಬ್ದಾರಿಯಿಂದ ಇರಬೇಕು ಎಂದು ಮನವಿ ಮಾಡಿದರು.

Comments

Leave a Reply

Your email address will not be published. Required fields are marked *