ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ; ಫ್ಯಾನ್ಸ್‌ ಸಾವು-ನೋವಿಗೆ ಆರ್‌ಸಿಬಿ ಶೋಕ

ಮುಂಬೈ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತಕ್ಕೆ ಸಂಭವಿಸಿದ ಸಾವು-ನೋವಿಗೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಶೋಕ ವ್ಯಕ್ತಪಡಿಸಿದೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ ಆರ್‌ಸಿಬಿ, ಬುಧವಾರ ಮಧ್ಯಾಹ್ನ ತಂಡದ ಆಗಮನದ ನಿರೀಕ್ಷೆಯಲ್ಲಿ ಬೆಂಗಳೂರಿನಲ್ಲಿ ಸಂಭವಿಸಿದ ದುರಂತದ ಬಗ್ಗೆ ಮಾಧ್ಯಮ ವರದಿಗಳ ಮೂಲಕ ಬೆಳಕಿಗೆ ಬಂದಿರುವ ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದೆ.

ಜೀವಹಾನಿಗೆ ಆರ್‌ಸಿಬಿ ಶೋಕ ವ್ಯಕ್ತಪಡಿಸುತ್ತದೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪಗಳು. ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ, ನಾವು ನಮ್ಮ ಕಾರ್ಯಕ್ರಮವನ್ನು ತ್ವರಿತವಾಗಿ ತಿದ್ದುಪಡಿ ಮಾಡಿದ್ದೇವೆ. ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಯನ್ನು ಅನುಸರಿಸಿದ್ದೇವೆ. ಆರ್‌ಸಿಬಿ ಅಭಿಮಾನಿಗಳು ದಯವಿಟ್ಟು ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಂಡಿದೆ.

ಆರ್‌ಸಿಬಿ ಗೆಲುವು ವಿಜಯೋತ್ಸವದ ವೇಳೆ ಯಡವಟ್ಟು ಸಂಭವಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ 11 ಆರ್‌ಸಿಬಿ ಫ್ಯಾನ್ಸ್‌ ದುರ್ಮರಣಕ್ಕೀಡಾಗಿದ್ದಾರೆ. 50ಕ್ಕೂ ಹೆಚ್ಚು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.