ರಷ್ಯಾದಲ್ಲಿ ಉಗ್ರರ ಅಟ್ಟಹಾಸ- 70ಕ್ಕೂ ಹೆಚ್ಚು ಮಂದಿ ದುರ್ಮರಣ

ಮಾಸ್ಕೋ: ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಉಗ್ರರ ಅಟ್ಟಹಾಸ ಮೆರೆದಿದ್ದು, ಶುಕ್ರವಾರ ರಾತ್ರಿ ಮಾಲ್‌ ಒಂದರಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದಲ್ಲಿ (Crocus City Hall Attack) ಉಗ್ರರು ಅಮಾಯಕರ ಜೀವ ಬಲಿತೆಗೆದುಕೊಂಡಿದ್ದಾರೆ.

ಹೌದು. ರಷ್ಯಾದ (Russia) ರಾಜಧಾನಿ ಮಾಸ್ಕೋದ (Moscow)  ಕ್ರೋಕಸ್ ಸಿಟಿ ಹಾಲ್‌ನಲ್ಲಿ ಐವರು ಬಂದೂಕುಧಾರಿಗಳು ಜನರ ಗುಂಪಿನ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ಭಯಾನಕ ಘಟನೆಯಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಜೊತೆಗೆ 140ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ, ಗುಂಡಿನ ದಾಳಿ ಪ್ರಾರಂಭವಾದ ಸ್ವಲ್ಪ ಸಮಯದ ನಂತರ ಕ್ರೋಕಸ್ ಸಿಟಿ ಹಾಲ್‌ನಲ್ಲಿ ಸ್ಫೋಟ ಸಂಭವಿಸಿದೆ. ಹಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯ ವೀಡಿಯೊಗಳು ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಮಾಸ್ಕೋದ ಕ್ರೋಕಸ್ ಸಿಟಿ ಹಾಲ್‌ನಲ್ಲಿ ಗುಂಡಿನ ದಾಳಿಯ ಬಳಿಕ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ ಎಂದು ರಷ್ಯಾದ ಭದ್ರತಾ ಸಂಸ್ಥೆ ಎಫ್‌ಎಸ್‌ಬಿ ಹೇಳಿದೆ. ಜೊತೆಗೆ ಅಲ್ಲಿ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯವೂ ನಡೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ದಾಳಿಕೋರನೊಬ್ಬ ಕೂಡ ಕಾಣಿಸಿಕೊಂಡಿದ್ದಾನೆ.

ಇರಾಕ್ ಮತ್ತು ಸಿರಿಯಾದ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್ ದಾಳಿಯ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ರಷ್ಯಾದ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ದಾಳಿಯಲ್ಲಿ ತನ್ನ ದೇಶದ ಕೈವಾಡವಿಲ್ಲ ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಹೇಳಿದ್ದಾರೆ.