ಅವಕಾಶವಾದಿ ರಾಜಕಾರಣಕ್ಕೆ ನೀಡಿರುವ ಕೊಡಲಿ ಏಟು: ಸಿದ್ದರಾಮಯ್ಯ

ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಅವರು ತುರ್ತು ಸುದ್ದಿಗೋಷ್ಠಿ ಕರೆದು ಇಂದು 14 ಮಂದಿ ಅತೃಪ್ತ ಶಾಸಕರನ್ನು ಅನರ್ಹ ಮಾಡಿದ್ದಾರೆ. ಸ್ಪೀಕರ್ ಅವರ ತೀರ್ಪಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ಮೊದಲಿಗೆ, “ಮಾನ್ಯ ಸಭಾಧ್ಯಕ್ಷರು ಎಲ್ಲ 14 ಶಾಸಕರನ್ನು ಪಕ್ಷ ವಿರೋಧಿ ಚಟುವಟಿಕೆಯಡಿ ಅನರ್ಹಗೊಳಿಸಿ ಹೊರಡಿಸಿರುವ ಆದೇಶ ಪ್ರಜಾಪ್ರಭುತ್ವಕ್ಕೆ ಸಂದ ನೈಜ ಗೆಲುವು. ಸ್ವಾರ್ಥ ಸಾಧನೆ, ಅಧಿಕಾರಾದಾಸೆಯಿಂದ ಜನಾದೇಶವನ್ನು ಧಿಕ್ಕರಿಸಿ ತಮ್ಮನ್ನು ತಾವು ಮಾರಿಕೊಳ್ಳುವ ಹೀನ ಸಂಸ್ಕೃತಿಗೆ ಈ ತೀರ್ಪು ಇತಿಶ್ರೀ ಹಾಡಲಿದೆ ಎಂಬುದು ನನ್ನ ನಂಬಿಕೆ” ಎಂದು ಸ್ಪೀಕರ್ ರಮೇಶ್ ಕುಮಾರ್ ತೀರ್ಪಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತೊಂದು ಟ್ವೀಟ್ ಮಾಡಿದ ಸಿದ್ದರಾಮಯ್ಯ, “ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಪದವಿ, ಅಧಿಕಾರ ರಾಜಕಾರಣದಲ್ಲಿ ಎಂದಿಗೂ ಶಾಶ್ವತವಲ್ಲ. ಮುಂದಿನ ಪೀಳಿಗೆಯ ರಾಜಕಾರಣಕ್ಕೆ ನಾವು ಮಾದರಿಯಾಗಿ ಏನನ್ನು ಬಿಟ್ಟುಹೋಗುತ್ತೇವೆ ಎಂಬುದು ಮುಖ್ಯ. ಸಭಾಧ್ಯಕ್ಷರ ಇಂದಿನ ನಿರ್ಣಯ ಅವಕಾಶವಾದಿ ರಾಜಕಾರಣಕ್ಕೆ ನೀಡಿರುವ ಕೊಡಲಿ ಏಟು. ಅವರ ಈ ತೀರ್ಮಾನವನ್ನು ನಾನು ಸ್ವಾಗತಿಸುತ್ತೇನೆ” ಎಂದು ಅತೃಪ್ತ ಶಾಸಕರಿಗೆ ಟ್ವೀಟ್ ಮೂಲಕ ಏಟು ಕೊಟ್ಟಿದ್ದಾರೆ.

Comments

Leave a Reply

Your email address will not be published. Required fields are marked *