ಸಣ್ಣ ಕೈಗಾರಿಕೆಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದ್ದಂತಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಲಾಕ್‍ಡೌನ್‍ನಿಂದ ಸಣ್ಣ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಹಾಗೂ ಪೀಣ್ಯ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳ ಜೊತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಚರ್ಚೆ ನಡೆಸಿದರು. ಚರ್ಚೆಯ ಬಳಿಕ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು ಸರ್ಕಾರಕ್ಕೆ ಕೆಲವು ಸಲಹೆಗಳನ್ನು ನೀಡಿದ್ದಾರೆ.

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘ ಹಾಗೂ ಪೀಣ್ಯ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ ತೀವ್ರ ನಷ್ಟಕ್ಕೆ ಒಳಗಾಗಿರುವ ರಾಜ್ಯದ ಸಣ್ಣ ಕೈಗಾರಿಕೆಗಳ ನೆರವಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಶೇಷ ಯೋಜನೆ ರೂಪಿಸುವ ಅಗತ್ಯವಿದೆ. ಕಳೆದ ನಲವತ್ತು ದಿನಗಳಿಂದ ಸಣ್ಣ ಕೈಗಾರಿಕೆಗಳಲ್ಲಿ ಉತ್ಪಾದನಾ ಚಟುವಟಿಕೆ ಬಂದ್ ಆಗಿದ್ದು, ಸರ್ಕಾರಕ್ಕೆ ಬರಬೇಕಾದ ಆದಾಯವೂ ನಿಂತು ಹೋಗಿದೆ. ಸಣ್ಣ ಕೈಗಾರಿಕೆಗಳಲ್ಲಿ ಮತ್ತೆ ಉತ್ಪಾದನಾ ಚಟುವಟಿಕೆಗಳು ಆರಂಭವಾಗಬೇಕಾದರೆ ಸರ್ಕಾರ ಆರ್ಥಿಕ ನೆರವು ಒದಗಿಸಬೇಕು.

ಸಣ್ಣ ಕೈಗಾರಿಕೆಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದ್ದಂತಿಲ್ಲ. ಇಲ್ಲಿಯವರೆಗೂ ಕೈಗಾರಿಕಾ ಸಂಘಗಳ ಜೊತೆ ಸರ್ಕಾರ ಮಾತುಕತೆಯನ್ನೇ ನಡೆಸಿಲ್ಲ. ನಷ್ಟದಲ್ಲಿರುವ ಸಣ್ಣ ಕೈಗಾರಿಕೆಗಳು ಚೇತರಿಸಿಕೊಳ್ಳಬೇಕಾದರೆ ಕೆಲವೊಂದು ರಿಯಾಯಿತಿ – ವಿನಾಯಿತಿಗಳನ್ನು ಸರ್ಕಾರ ಈ ಕೂಡಲೇ ಘೋಷಣೆ ಮಾಡಬೇಕು. ಕಾರ್ಖಾನೆ ಮಾಲೀಕರು ಬ್ಯಾಂಕ್‍ಗಳ ಮೂಲಕ ಪಡೆದಿರುವ ಸಾಲದ ಮೇಲಿನ ಬಡ್ಡಿ ಮನ್ನಾ, ಮಾಸಿಕ ಕಂತು ಪಾವತಿಗೆ ವಿನಾಯಿತಿ, ಉತ್ಪನ್ನಗಳ ರಫ್ತಿಗೆ ಉತ್ತೇಜನ ಸೇರಿದಂತೆ ವಿಶೇಷ ಸೌಲಭ್ಯಗಳನ್ನು ಒದಗಿಸಿದರೆ ಮಾತ್ರ ಸಣ್ಣ ಕೈಗಾರಿಕೆಗಳು ಮತ್ತು ಆ ಕೈಗಾರಿಕೆಗಳನ್ನು ಅವಲಂಭಿಸಿರುವ ಕಾರ್ಮಿಕರಿಗೆ ಅನುಕೂಲವಾಗುತ್ತದೆ.

ಈಗಾಗಲೇ ನಷ್ಟ ಅನುಭವಿಸಿರುವ ಕೆಲ ಕಾರ್ಖಾನೆಗಳು ಮತ್ತೆ ಉತ್ಪಾದನೆ ಆರಂಭಿಸಬೇಕಾದರೆ ಬಂಡವಾಳ ಅಗತ್ಯ. ಹಾಗಾಗಿ ಕಡಿಮೆ ಬಡ್ಡಿ ದರದಲ್ಲಿ ಸಾಲದ ವ್ಯವಸ್ಥೆ ಮಾಡಬೇಕು. ಸರ್ಕಾರ ನೆರವು ಒದಗಿಸದಿದ್ದರೆ ಸಾವಿರಾರು ಕಾರ್ಖಾನೆಗಳು ಮುಚ್ಚುವುದರ ಜೊತೆಗೆ ಅವುಗಳನ್ನೇ ನಂಬಿಕೊಂಡಿರುವ ಕಾರ್ಮಿಕರ ಬದುಕು ಬೀದಿಪಾಲಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *