Tag: ಅಮೆರಿಕ ದಂಗೆ

  • ಭಾರತದ ಜೊತೆ ಕ್ಷಮೆ ಕೇಳಿದ ಅಮೆರಿಕ

    ಭಾರತದ ಜೊತೆ ಕ್ಷಮೆ ಕೇಳಿದ ಅಮೆರಿಕ

    ವಾಷಿಂಗ್ಟನ್: ಪ್ರತಿಭಟನೆಯ ವೇಳೆ ಮಹಾತ್ಮ ಗಾಂಧೀಜಿ ಪ್ರತಿಮೆಯ ಭಗ್ನವಾಗಿದ್ದಕ್ಕೆ ಅಮೆರಿಕ ಕ್ಷಮೆ ಕೇಳಿದೆ.

    ಜಾರ್ಜ್ ಫ್ಲಾಯ್ಡ್ ಸಾವು ಖಂಡಿಸಿ ಕಪ್ಪು ವರ್ಣಿಯರು ಅಮೆರಿಕದಲ್ಲಿ ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಕಿಡಿಗೇಡಿಗಳು ವಾಷಿಂಗ್ಟನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಆವರಣದಲ್ಲಿದ್ದ ಗಾಂಧೀಜಿ ಪ್ರತಿಮೆಯನ್ನು ಭಗ್ನಗೊಳಿಸಿದ್ದಾರೆ.

    ಪ್ರತಿಮೆ ಭಗ್ನಗೊಂಡ ವಿಚಾರ ತಿಳಿಯುತ್ತಿದ್ದಂತೆ ಅಮೆರಿಕ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಸಂಬಂಧ ಅಮೆರಿಕದ ರಾಯಭಾರಿ ಕೆನ್ ಜಸ್ಟರ್, ಬಹಳ ಬೇಸರವಾಗುತ್ತಿದೆ. ವಾಷಿಂಗ್ಟನ್ ನಗರದಲ್ಲಿ ಗಾಂಧಿ ಪ್ರತಿಮೆ ಭಗ್ನವಾಗಿದ್ದಕ್ಕೆ ನಾವು ಕ್ಷಮೆ ಕೇಳುತ್ತಿದ್ದೇವೆ ಎಂದು ಹೇಳಿದ್ದಾರೆ.

    ಪ್ರತಿಭಟನೆ ಯಾಕೆ?
    ಅಮೆರಿಕದ ಪೊಲೀಸ್ ಅಧಿಕಾರಿಯೊಬ್ಬ ನಕಲಿ ನೋಟು ಚಲಾವಣೆಯ ಆರೋಪಿಯನ್ನು ಕ್ರೂರವಾಗಿ ಹತ್ಯೆ ಮಾಡಿದ್ದ. ಕುತ್ತಿಗೆ ಮೇಲೆ ಮೊಣಕಾಲನ್ನು ಇರಿಸಿ ಹತ್ಯೆ ಮಾಡಿದ ವಿಡಿಯೋ ಈಗ ವೈರಲ್ ಆಗಿದೆ. ಕ್ರೂರತ್ವಕ್ಕೆ ಆಫ್ರಿಕನ್ ಅಮೆರಿಕನ್ ಪ್ರಜೆ ಜಾರ್ಜ್ ಫ್ಲಾಯ್ಡ್ ಬಲಿಯಾಗಿದ್ದನ್ನು ಖಂಡಿಸಿ ಅಲ್ಲಿನ ಜನ ದಂಗೆ ಎದ್ದಿದ್ದಾರೆ. ಕಳೆದ ವಾರದಿಂದ ಅಮೆರಿಕದ ವಿವಿಧ ನಗರಗಳಲ್ಲಿ ಜಸ್ಟೀಸ್ ಫಾರ್ ಫ್ಲಾಯ್ಡ್, ಐ ಕಾಂಟ್ ಬ್ರೀತ್ ಹೆಸರಲ್ಲಿ ದೊಡ್ಡಮಟ್ಟದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ಹಿಂಸಾಚಾರಕ್ಕೆ ತಿರುಗಿದೆ.

    ಅನೇಕ ಕಡೆ ಪೊಲೀಸ್ ವಾಹನಗಳು, ರೆಸ್ಟೋರೆಂಟ್‍ಗಳಿಗೆ ಬೆಂಕಿ ಹಚ್ಚಲಾಗಿದೆ. ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ಆಶ್ರುವಾಯು, ರಬ್ಬರ್ ಬುಲೆಟ್ ಪ್ರಯೋಗಿಸಿದ್ದಾರೆ. ಆದರೆ ಇದನ್ನು ಜನ ಲೆಕ್ಕಿಸುತ್ತಿಲ್ಲ. ಫ್ಲಾಯ್ಡ್ ಹತ್ಯೆ ಮಾಡಿದ್ದ ಪೊಲೀಸ್ ಅಧಿಕಾರಿಯನ್ನು ಬಂಧಿಸಿದೆ. ಪೊಲೀಸರು ಸಾರ್ವಜನಿಕರಲ್ಲಿ ಕ್ಷಮೆ ಕೇಳಿದರೂ ಆಕ್ರೋಶ ಮಾತ್ರ ನಿಂತಿಲ್ಲ.

    ಮುಂಜಾಗ್ರತಾ ಕ್ರಮವಾಗಿ ಹಲವು ನಗರಗಳಲ್ಲಿ ಕರ್ಫ್ಯೂ  ವಿಧಿಸಲಾಗಿದೆ. ಪ್ರತಿಭಟನೆ ಹತ್ತಿಕ್ಕಲು ನ್ಯಾಷನಲ್ ಗಾರ್ಡ್ಸ್ ಗಳನ್ನು ಬಳಸಲಾಗುತ್ತಿದೆ.