Tag: ಆರ್.ಪಿ ಶರ್ಮಾ

  • ಗನ್ ಸ್ವಚ್ಛಗೊಳಿಸುವಾಗ ಗಾಯಗೊಂಡಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಆರ್.ಪಿ ಶರ್ಮಾ ನಿಧನ

    ಗನ್ ಸ್ವಚ್ಛಗೊಳಿಸುವಾಗ ಗಾಯಗೊಂಡಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಆರ್.ಪಿ ಶರ್ಮಾ ನಿಧನ

    ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಆರ್.ಪಿ ಶರ್ಮಾ ನಿಧನರಾಗಿದ್ದಾರೆ.

    2020ರ ಸೆಪ್ಟೆಂಬರ್ 2ರಂದು ಗನ್ ಸ್ವಚ್ಛಗೊಳಿಸುವಾಗ ಆಕಸ್ಮಿಕವಾಗಿ ಗುಂಡು ಹೊಕ್ಕಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

    ಬಹುಅಂಗಾಂಗ ವೈಫಲ್ಯದಿಂದ ಇದೀಗ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಶರ್ಮಾ ಅವರು ರಾಜ್ಯ ಪೊಲೀಸ್ ವಸತಿ ನಿಗಮದ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. 2020ರ ಡಿಸೆಂಬರ್ ನಲ್ಲಿ ಈ ಸೇವೆಯಿಂದ ನಿವೃತ್ತಿ ಹೊಂದಿದ್ದರು. ಇದೀಗ ಶರ್ಮಾ ಅವರು ಪತ್ನಿ ಹಿರಿಯ ಐಎಎಸ್ ಅಧಿಕಾರಿ ನಾಗಲಾಂಬಿಕ ದೇವಿ ಮತ್ತು ಇಬ್ಬರು ಮಕ್ಕಳನ್ನು ಶರ್ಮಾ ಅವರು ಅಗಲಿದ್ದಾರೆ.

    ಆರ್.ಪಿ ಶರ್ಮಾ ನಿಧನ ಸಂಬಂಧ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಿಎಂ ಆಫ್ ಕರ್ನಾಟಕ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು, ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ.ಶರ್ಮಾ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್‍ವೈರವರು ಸಂತಾಪ ವ್ಯಕ್ತಪಡಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

    ದಕ್ಷ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶರ್ಮಾ ಅವರ ಆತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದವರಿಗೆ ಈ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಚಿವ ರಮೇಶ್ ಜಾರಕಿಹೊಳಿ ಕೂಡ ಸಂತಾಪ ಸೂಚಿಸಿದ್ದಾರೆ.