Tag: ಕಮಲ್ ಹಸನ್

  • ತಮಿಳುನಾಡು ರಾಜಕಾರಣದಲ್ಲಿ ಅದ್ಭುತ ನಡೆಯಲಿದೆ- ರಜನಿಕಾಂತ್

    ತಮಿಳುನಾಡು ರಾಜಕಾರಣದಲ್ಲಿ ಅದ್ಭುತ ನಡೆಯಲಿದೆ- ರಜನಿಕಾಂತ್

    – ಕಮಲ್ ಹಸನ್ ಮೈತ್ರಿ ಹೇಳಿಕೆಗೆ ರಜನಿ ಪ್ರತಿಕ್ರಿಯೆ

    ಚೆನ್ನೈ: 2021ರ ವಿಧಾನಸಭೆ ಚುನಾವಣೆ ವೇಳೆ ತಮಿಳುನಾಡು ರಾಜಕಾರಣದಲ್ಲಿ ಮಹಾ ಅದ್ಭುತ ನಡೆಯಲಿದೆ ಎಂದು ಸೂಪರ್ ಸ್ಟಾರ್ ರಜಿನಿಕಾಂತ್ ಅಚ್ಚರಿ ಹೇಳಿಕೆ ನೀಡಿದ್ದಾರೆ.

    ಚೆನ್ನೈನಲ್ಲಿ ಮಾತನಾಡಿದ ಅವರು, ಅಧ್ಯಾತ್ಮಿಕ ರಾಜಕಾರಣಕ್ಕೆ ತಮಿಳುನಾಡು ಜನತೆ ಮಣೆ ಹಾಕುತ್ತಾರೆ ಎಂಬ ವಿಶ್ವಾಸವಿದೆ. 2021ರ ಚುನಾವಣೆಯಲ್ಲಿ ಶೇ.100 ತಮಿಳು ಜನತೆ ರಾಜಕೀಯದಲ್ಲಿ ದೊಡ್ಡ ಅದ್ಭುತ ಸೃಷ್ಟಿಸಲಿದ್ದಾರೆ ಎಂದರು.

    ನೀವು ಹಾಗೂ ಕಮಲ್ ಹಾಸನ್ ಇಬ್ಬರೂ ಕೈ ಜೋಡಿಸಿದಲ್ಲಿ ಯಾರು ತಮಿಳುನಾಡಿನ ಮುಖ್ಯಮಂತ್ರಿಯಾಗುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಕಾರ್ಯಕರ್ತರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ ನಂತರ ಇದನ್ನು ನಿರ್ಧರಿಸಲಾಗುವುದು. ಚುನಾವಣೆ ಸಮೀಪಿಸುತ್ತಿರುವಾಗ ಪರಿಸ್ಥಿತಿಯನ್ನು ಅವಲಂಬಿಸಿ ಸಿಎಂ ಆಯ್ಕೆ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.

    ತಮಿಳುನಾಡಿನ ಕಲ್ಯಾಣಕ್ಕಾಗಿ ಸುಪರ್‍ಸ್ಟಾರ್ ರಜನಿಕಾಂತ್ ಜೊತೆಗೆ ಕೈ ಜೋಡಿಸುವುದಾಗಿ ನಟ ಕಮಲ್ ಹಾಸನ್ ಹೇಳಿಕೆ ನೀಡಿದ ಕೆಲವೇ ಗಂಟೆಗಳ ನಂತರ ರಜನಿಕಾಂತ್ ಹೇಳಿಕೆ ಹೊರ ಬಿದ್ದಿದೆ. ಇಬ್ಬರೂ ಒಟ್ಟಿಗೆ ಸೇರುವ ಸಂದರ್ಭ ಎದುರಾದರೆ ಒಟ್ಟಿಗೆ ಸೇರುತ್ತೇವೆ ಎಂದು ಸ್ಪಷ್ಟಪಡಿಸಿದರು.

    2021ರಲ್ಲಿ ಅದ್ಭುತ ನಡೆಯಲಿದೆ ಎಂದು ರಜನಿಕಾಂತ್ ಯಾವ ಆಧಾರದ ಮೇಲೆ ಹೇಳುತ್ತಾರೆ ಎಂದುದೇ ಅರ್ಥವಾಗುತ್ತಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ರಜನಿಕಾಂತ್ ಹೇಳಿಕೆಗೆ ತಿರುಗೇಟು ನೀಡಿದರು. ಅಲ್ಲದೆ ಹಲವು ಎಐಎಡಿಎಂಕೆ ನಾಯಕರು ಈ ಕುರಿತು ಕಿಡಿಕಾರಿದ್ದು, ಇಬ್ಬರು ನಟರು ಒಟ್ಟುಗೂಡಿದರೆ ಅದ್ಭುತ, ಪವಾಡ ನಡೆಯುತ್ತದೆ ಎನ್ನುವುದೆಲ್ಲ ಭ್ರಮೆ ಎಂದು ಟೀಕಿಸಿದ್ದಾರೆ.

  • 370ನೇ ವಿಧಿ ರದ್ದು ಪ್ರಜಾಪ್ರಭುತ್ವದ ಮೇಲೆ ನಡೆಸಲಾದ ದಾಳಿ – ಕಮಲ್ ಹಾಸನ್

    370ನೇ ವಿಧಿ ರದ್ದು ಪ್ರಜಾಪ್ರಭುತ್ವದ ಮೇಲೆ ನಡೆಸಲಾದ ದಾಳಿ – ಕಮಲ್ ಹಾಸನ್

    ಚೆನ್ನೈ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿದ್ದಕ್ಕೆ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ‘ಪ್ರಜಾಪ್ರಭುತ್ವದ ಮೇಲೆ ನಡೆಸಲಾದ ಸ್ಪಷ್ಟ ದಾಳಿ’ ಎಂದು ಕಿಡಿಕಾರಿದ್ದಾರೆ.

    ಜಮ್ಮು ಕಾಶ್ಮೀರವನ್ನು ಎರಡು ಭಾಗಗಳನ್ನಾಗಿ ವಿಂಗಡಿಸಿ, ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿರುವುದು ಪ್ರಜಾಪ್ರಭುತ್ವದ ಮೇಲೆ ನಡೆದ ಸ್ಪಷ್ಟ ದಾಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಇದು ಅತ್ಯಂತ ಆಘಾತಕಾರಿ ಹಾಗೂ ನಿರಂಕುಶಾಧಿಕಾರತ್ವ. 370ನೇ ವಿಧಿ ಮತ್ತು 35ಎ ತನ್ನದೇ ಆದ ಮೂಲ ಹೊಂದಿವೆ. ಹೀಗಾಗಿ ಈ ಕುರಿತು ಯಾವುದೇ ಬದಲಾವಣೆ ತರಬೇಕಾದಲ್ಲಿ ಸಮಾಲೋಚನೆ ನಡೆಸಿ ನಂತರ ತೀರ್ಮಾನ ಕೈಗೊಳ್ಳಬೇಕಿತ್ತು ಎಂದು ಕಳೆದ ವರ್ಷ ಮಕ್ಕಳ್ ನಿಧಿ ಮೈಯಂ ಪಕ್ಷ (ಎಂಎನ್‍ಎಂ) ಸ್ಥಾಪಿಸಿದ್ದ ನಟ ಕಮಲ್ ಹಾಸನ್ ಅಭಿಪ್ರಾಯಪಟ್ಟಿದ್ದಾರೆ.

    ಪ್ರತಿಪಕ್ಷಗಳೊಂದಿಗೆ ಸಮಾಲೋಚನೆ ನಡೆಸದೆ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಮತಕ್ಕೆ ಹಾಕುವ ಮುನ್ನ ವಿರೋಧ ಪಕ್ಷಗಳೊಂದಿಗೆ ಚರ್ಚೆ ನಡೆಸಬೇಕಿತ್ತು. ಈ ಮೂಲಕ ಬಿಲ್ ಕುರಿತು ಪರಿಶೀಲನೆ ನಡೆಸಬೇಕಿತ್ತು. ಆದರೆ, ಬಲವಂತವಾಗಿ ವಿರೋಧ ಪಕ್ಷಗಳ ಬಾಯನ್ನು ಮುಚ್ಚಿಸಿ ಬಿಲ್ ಪಾಸ್ ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ.

    ಕೇಂದ್ರ ಸರ್ಕಾರ ಸೋಮವಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸಂವಿಧಾನಿಕ ಸವಲತ್ತುನ್ನು ಹಿಂಪಡೆದಿದ್ದು, ಈ ಮೂಲಕ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ಸ್ವಾಯತ್ತತೆಯನ್ನು ರದ್ದುಗೊಳಿಸಿದೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿ, ಆದೇಶ ಹೊರಡಿಸಿದೆ.

    ಜಮ್ಮು ಕಾಶ್ಮೀರವನ್ನು ದೇಶದ ಉಳಿದ ಭಾಗಗಳೊಂದಿಗೆ ಒಟ್ಟು ಗೂಡಿಸುವುದು ಹಾಗೂ ಭಯೋತ್ಪಾದನೆಯನ್ನು ಎದುರಿಸುವುದು ನಮ್ಮ ಗುರಿಯಾಗಿದೆ ಎಂದು ಕೇಂದ್ರ ಸರ್ಕಾರ ನಿನ್ನೆಯಷ್ಟೇ ತಿಳಿಸಿತ್ತು. ಆದರೆ, ಕಾಂಗ್ರೆಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳು ಈ ನಿರ್ಧಾರ ರಾಜಕೀಯವಾಗಿ ಹಾಗೂ ಸಾಮಾಜಿಕವಾಗಿ ಬಹುದೊಡ್ಡ ಪರಿಣಾಮಗಳನ್ನು ಉಂಟು ಮಾಡುತ್ತದೆ. ಅಲ್ಲದೆ, ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತದೆ. ಕೇಂದ್ರ ಸರ್ಕಾರದ ಈ ನಿರ್ಧಾರ ‘ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಆಕ್ರೋಶ ವ್ಯಕ್ತಪಡಿಸಿವೆ.

    370ನೇ ವಿಧಿಯನ್ನು ರದ್ದುಗೊಳಿಸುವುದಕ್ಕೂ ಮುನ್ನ ಜಮ್ಮು ಕಾಶ್ಮೀರದಲ್ಲಿ ಅಶಾಂತಿ, ಸಾರ್ವಜನಿಕರಿಗೆ ತೊಂದರೆಯಾಗಬಹುದು ಎಂಬ ಕಾರಣಕ್ಕೆ ಹೆಚ್ಚು ಸೈನಿಕರನ್ನು ಸ್ಥಳಾಂತರಿಸಿ ಸಂಪೂರ್ಣ ಭದ್ರತೆಯನ್ನು ಒದಗಿಸಲಾಗಿತ್ತು. ಇದೇ ಧೈರ್ಯದಿಂದಲೇ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ 370ನೇ ವಿಧಿಯನ್ನು ರದ್ದುಗೊಳಿಸುವ ಕುರಿತು ಘೋಷಿಸಿದರು.

    ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆ ನಂತರ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ‘ಭಾರತದ ಸಂಪೂರ್ಣ ಸಂವಿಧಾನ’ ಜಮ್ಮು ಕಾಶ್ಮೀರಕ್ಕೂ ಅನ್ವಯವಾಗಲಿದೆ ಎಂದು ತಿಳಿಸಿದರು.