ಮಂಗಳೂರು: ಪ್ರಚೋದನಕಾರಿ ಭಾಷಣ ಆರೋಪದಡಿ ಎಫ್‌ಐಆರ್ ದಾಖಲಾಗಿದ್ದ ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (Puttur) ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ನ್ಯಾಯಾಲಯದ ಮುಂದಿನ ವಿಚಾರಣೆಯವರೆಗೆ ಬಂಧನ ಸಹಿತ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿ, ಅಕ್ಟೋಬರ್ 29ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಏನಿದು ಪ್ರಕರಣ?
ಪ್ರಚೋದನಕಾರಿ ಭಾಷಣ ಆರೋಪದಡಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಅ.20ರಂದು ಪುತ್ತೂರು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿದ್ದರು. ಭಾಷಣದ ವೇಳೆ ಧಾರ್ಮಿಕ ದ್ವೇಷ ಹಾಗೂ ಮಹಿಳೆಯರ ಘನತೆಗೆ ಧಕ್ಕೆ ಮಾಡಿದ್ದಾರೆ ಎಂದು ಈಶ್ವರಿ ಪದ್ಮುಂಜ ಎಂಬವವರು ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿತ್ತು. ಭಾರತೀಯ ನ್ಯಾಯ ಸಂಹಿತೆ 2023ರ 79, 196, 299, 302 ಹಾಗೂ 3(5) ಕಲಂಗಳ ಅಡಿಯಲ್ಲಿ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸರು ಅ.30ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು.
ಹೀಗಾಗಿ ಕಲ್ಲಡ್ಕ ಪ್ರಭಾಕರ ಭಟ್ ಪೊಲೀಸರ ಎಫ್‌ಐಆರ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮುಂದಿನ ವಿಚಾರಣೆವರೆಗೆ ಬಂಧನ ಸಹಿತ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.















