Tag: ಗ್ರೇ ಪಟ್ಟಿ

  • ವಾರ್ಷಿಕ 68 ಸಾವಿರ ಕೋಟಿ ನಷ್ಟ: ಪಾಕಿಸ್ತಾನಕ್ಕೆ ತಲೆನೋವು ತಂದ ಭಾರತದ ಲಾಬಿ

    ವಾರ್ಷಿಕ 68 ಸಾವಿರ ಕೋಟಿ ನಷ್ಟ: ಪಾಕಿಸ್ತಾನಕ್ಕೆ ತಲೆನೋವು ತಂದ ಭಾರತದ ಲಾಬಿ

    ಇಸ್ಲಾಮಾಬಾದ್: ಏರ್ ಸ್ಟ್ರೈಕ್ ಮೂಲಕ ಶಾಕ್ ಕೊಟ್ಟು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಏಕಾಂಗಿಯಾಗಿಸುವ ನಿಟ್ಟಿನಲ್ಲಿ ಭಾರತ ನಿರಂತರ ಪ್ರಯತ್ನ ನಡೆಸುತ್ತಿರುವುದು ಪಾಕಿಗೆ ಈಗ ಭಾರೀ ತಲೆನೋವು ತಂದಿದೆ.

    ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ನಡೆಸುವ ತೆರೆಮರೆಯ ಲಾಬಿಯಿಂದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ಕಪ್ಪು ಪಟ್ಟಿಗೆ ಸೇರಬಹುದಾದ ಭೀತಿ ಆವರಿಸಿದೆ ಎಂದು ಪಾಕ್ ವಿದೇಶಾಂಗ ಸಚಿವ ಖುರೇಷಿ ಆತಂಕ ವ್ಯಕ್ತಪಡಿಸಿದ್ದಾರೆ.

    ಬೂದು ಪಟ್ಟಿಯಲ್ಲಿ (ಗ್ರೇ ಲಿಸ್ಟ್) ಪಾಕಿಸ್ತಾನ ಮುಂದುವರಿಯುತ್ತಿರುವುದರಿಂದ ವಾರ್ಷಿಕವಾಗಿ 68 ಸಾವಿರ ಕೋಟಿ ರೂ. ನಷ್ಟ ಅನುಭವಿಸುತ್ತಿದೆ ಎಂದು ಖುರೇಷಿ ತಿಳಿಸಿದ್ದಾರೆ. ಈಗ ಭಾರತ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲು ಹರಸಹಾಸ ಪಡುತ್ತಿದೆ. ಇದಕ್ಕಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಲಾಬಿ ಮಾಡುತ್ತಿದೆ ಎಂದು ಹೇಳಿದ್ದಾರೆ. ಒಂದು ವೇಳೆ ಕಪ್ಪು ಪಟ್ಟಿಗೆ ಸೇರಿದ್ದೇ ಆದಲ್ಲಿ ನಮಗೆ ಭಾರೀ ನಷ್ಟವಾಗಲಿದೆ ಎಂದು ತಿಳಿಸಿದ್ದಾರೆ.

    ಪಾಕಿಸ್ಥಾನವನ್ನು ಗ್ರೇ ಲಿಸ್ಟ್ ನಿಂದ ಮುಕ್ತಗೊಳಿಸುವ ಸಲುವಾಗಿ ಇತ್ತೀಚೆಗೆ ಪಾಕಿಸ್ಥಾನಕ್ಕೆ ಎಫ್‍ಎಟಿಎಫ್ ಭೇಟಿ ನೀಡಿತ್ತು. ಈ ವೇಳೆ ಪಾಕ್ ಸರ್ಕಾರ ಉಗ್ರರ ಮೇಲಿನ ನಿಯಂತ್ರಣಕ್ಕೆ ಏನು ಕ್ರಮ ಕೈಗೊಂಡಿದೆ ಎಂದು ಪರಾಮರ್ಶೆ ನಡೆಸಿತ್ತು. ನಂತರ ತನ್ನ ವರದಿಯಲ್ಲಿ ಗ್ರಾಮೀಣ, ಜಿಲ್ಲೆ, ಪ್ರಾಂತಿಯ ಮಟ್ಟದಲ್ಲಿ ನಿಷೇಧಿತ ಸಂಘಟನೆಗಳು ಈಗಲೂ ಸಕ್ರೀಯವಾಗಿದೆ. ಪಾಕ್ ಸರ್ಕಾರ ಉಗ್ರರ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳು ತೃಪ್ತಿದಾಯಕವಲ್ಲ ಎಂದು ವರದಿ ನೀಡಿತ್ತು.

    ಆಗಿದ್ದು ಏನು?
    ಪುಲ್ವಾಮಾ ದಾಳಿಯಾದ ನಂತರ ಪಾಕಿಸ್ತಾನವನ್ನು ಯಾವುದೇ ಕಾರಣಕ್ಕೂ ಗ್ರೇ ಪಟ್ಟಿಯಿಂದ ಹೊರಗಡೆ ಇಡಬಾರದು ಎಂದು ಭಾರತ ಒತ್ತಾಯಿಸಿತ್ತು. ಇದರ ಬೆನ್ನಲ್ಲೇ ಫ್ರಾನ್ಸ್ ಸಹ ಪಾಕಿಸ್ತಾನವನ್ನು ಗ್ರೇ ಪಟ್ಟಿಯಲ್ಲೇ ಇರಿಸುವಂತೆ ಎಫ್‍ಎಟಿಎಫ್ ಮೇಲೆ ಒತ್ತಡ ಹಾಕಿತ್ತು.

    ಉಗ್ರಗಾಮಿಗಳಿಗೆ ಪ್ರೋತ್ಸಾಹ ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದ ಒತ್ತಡ ಜಾಸ್ತಿಯಾದ ಹಿನ್ನೆಲೆಯಲ್ಲಿ ಎಫ್‍ಎಟಿಎಫ್ ಪಾಕಿಸ್ತಾನವನ್ನು ಮುಂದಿನ ಅಕ್ಟೋಬರ್ ವರೆಗೆ ಗ್ರೇ ಪಟ್ಟಿಯಲ್ಲಿ ಮುಂದುವರಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಗ್ರೇ ಪಟ್ಟಿಯಿಂದ ಹೊರಗೆ ಬರಲು ಪಾಕಿಸ್ತಾನ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮನವಿ ಮಾಡಿತ್ತು. ಆದರೆ ಪಾಕ್ ಮನವಿಯನ್ನು ಇತರೇ ರಾಷ್ಟ್ರಗಳು ಗಂಭೀರವಾಗಿ ಸ್ವೀಕರಿಸಿರಲಿಲ್ಲ.

    1989ರಲ್ಲಿ ಎಫ್‍ಎಟಿಎಫ್ ಸ್ಥಾಪಿಸಲಾಗಿದ್ದು, ಉಗ್ರರಿಗೆ ಹಣಕಾಸು ಪೂರೈಕೆ ತಡೆ, ಅಕ್ರಮ ಹಣ ವರ್ಗಾವಣೆ, ಅಂತರಾಷ್ಟ್ರೀಯ ಹಣಕಾಸು ವ್ಯವಸ್ಥೆ ಬೆದರಿಕೆ ಒಡ್ಡುವ ಕೃತ್ಯಗಳನ್ನು ತಡೆಯುವ ಕೆಲಸವನ್ನು ಈ ಕ್ರಿಯಾಪಡೆ ಮಾಡುತ್ತದೆ. ವಿಶ್ವದ ಒಟ್ಟು 38 ರಾಷ್ಟ್ರಗಳು ಎಫ್‍ಎಟಿಎಫ್ ಸದಸ್ಯ ರಾಷ್ಟ್ರಗಳಾಗಿವೆ. ತಾನು ನಿಗದಿಪಡಿಸಿದ ಕ್ರಮಗಳನ್ನು ಅನುಸರಿಸದೇ ಇದ್ದರೆ ಎಫ್‍ಎಟಿಎಫ್ ದೇಶಗಳನ್ನು ಗ್ರೇ ಅಥವಾ ಬ್ಲಾಕ್ ಲಿಸ್ಟ್ ಗೆ ಹಾಕುತ್ತದೆ. 2019ರ ಅಕ್ಟೋಬರ್ ಒಳಗಡೆ ಪಾಕಿಸ್ತಾನ ಎಫ್‍ಎಟಿಎಫ್ 27 ಬೇಡಿಕೆಯನ್ನು ಈಡೇರಿಸದೇ ಇದ್ದರೆ ಕಪ್ಪು ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ.

    ಏನಿದು ಗ್ರೇ ಲಿಸ್ಟ್?
    ಫುಟ್ ಬಾಲ್ ಪಂದ್ಯಗಳಲ್ಲಿ ತಪ್ಪು ಮಾಡಿದ ಆಟಗಾರಿಗೆ ಹೇಗೆ ಹಳದಿ ಕಾರ್ಡ್ ನೀಡಿ ಎಚ್ಚರಿಕೆ ನೀಡುತ್ತಾರೋ ಅದೇ ರೀತಿಯಾಗಿ ರಾಷ್ಟ್ರವೊಂದಕ್ಕೆ ಮೊದಲ ಎಚ್ಚರಿಕೆ ನೀಡಲು ಈ ಪಟ್ಟಿಗೆ ಸೇರಿಸಲಾಗುತ್ತದೆ. ಗ್ರೇ ಪಟ್ಟಿಗೆ ಒಂದು ದೇಶ ಸೇರಿದರೆ ಅದಕ್ಕೆ ಹಲವು ಸಮಸ್ಯೆಗಳಾಗುತ್ತದೆ. ವಿವಿಧ ಹಣಕಾಸು ಸಂಸ್ಥೆಗಳು(ಐಎಂಎಫ್, ವಿಶ್ವಬ್ಯಾಂಕ್) ಸಾಲ ನೀಡಲು ಹಿಂದೇಟು ಹಾಕಬಹುದು. ಆರ್ಥಿಕ ನಿರ್ಬಂಧ ಹೇರಬಹುದು. ರಾಷ್ಟ್ರಗಳು ವ್ಯಾಪಾರವನ್ನು ಕಡಿತಗೊಳಿಸಬಹುದು. ರೇಟಿಂಗ್ ಏಜೆನ್ಸಿಗಳು ದೇಶಕ್ಕೆ ಕಡಿಮೆ ರೇಟಿಂಗ್ ಕೊಡಹುದು.

    ಏನಿದು ಕಪ್ಪು ಪಟ್ಟಿ?
    ಎಫ್‍ಎಟಿಎಫ್ ನಿಗದಿ ಪಡಿಸಿದ ಮಾನದಂಡಕ್ಕೆ ಅನುಗುಣವಾಗಿ ಕೆಲಸ ಮಾಡದೇ ಇದ್ದರೆ ಗ್ರೇ ಪಟ್ಟಿಯಲ್ಲಿರುವ ದೇಶವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ.

    ಪಾಕಿಸ್ತಾನಕ್ಕೆ ಹೊಸದೆನಲ್ಲ:
    ಕುತಂತ್ರಿ ಪಾಕಿಸ್ತಾನಕ್ಕೆ ಗ್ರೇ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಹೊಸದೆನಲ್ಲ. ಈ ಹಿಂದೆ 2012 ರಿಂದ 2015 ರವರೆಗೆ ಗ್ರೇ ಪಟ್ಟಿಯಲ್ಲಿತ್ತು. ಭಾರತದ ನಿರಂತರ ಒತ್ತಡದ ಬಳಿಕ 2018ರ ಜೂನ್ ಕೊನೆಯಲ್ಲಿ ಗ್ರೇ ಪಟ್ಟಿಗೆ ಪಾಕಿಸ್ತಾನವನ್ನು ಸೇರಿಸಲಾಗಿತ್ತು. ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಪಾಕಿಸ್ತಾನ ಸಿಲುಕಿದ್ದು ವಿಶ್ವದ ರಾಷ್ಟ್ರಗಳಿಂದ ಭಿಕ್ಷೆ ಬೇಡಿ ತಿನ್ನುವ ಪರಿಸ್ಥಿತಿಗೆ ಬಂದಿದೆ. ಒಂದು ವೇಳೆ ಕಪ್ಪು ಪಟ್ಟಿಗೆ ಸೇರ್ಪಡೆಯಾದರೆ ಈಗಾಗಲೇ ವಿವಿಧ ರಾಷ್ಟ್ರಗಳಿಂದ ಸಾಲ ಮಾಡಿ ಪಾಕಿಸ್ತಾನದ ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಟ್ಟು ಡೋಲಾಯಮಾನವಾಗಬಹುದು.