Tag: ಚಳ್ಳಕೆರೆ ಶಾಸಕ

  • ಮಾಜಿ ಸಚಿವ ತಿಪ್ಪೇಸ್ವಾಮಿ ನಿಧನ

    ಮಾಜಿ ಸಚಿವ ತಿಪ್ಪೇಸ್ವಾಮಿ ನಿಧನ

    ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದಾಗಿ ಬಳಲುತ್ತಿದ್ದ ಮಾಜಿ ಸಚಿವ ತಿಪ್ಪೇಸ್ವಾಮಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    76 ವರ್ಷದ ತಿಪ್ಪೇಸ್ವಾಮಿಯವರು, ಬಹು ಅಂಗಾಂಗ ಸಮಸ್ಯೆಯಿಂದ ಕಳೆದೊಂದು ವಾರದಿಂದ ನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಬಾರದ ಲೋಕಕ್ಕೆ ತೆರಳಿದ್ದಾರೆ.

    ಕುಟುಂಬಸ್ಥರು ಮೃತರ ಪಾರ್ಥಿವ ಶರೀರವನ್ನು ಚಳ್ಳಕೆರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ್ದು, ಇಂದು ಸಂಜೆ ಸ್ವಗ್ರಾಮವಾದ ಕಾಳಪ್ಪನಹಟ್ಟಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

    ತಿಪ್ಪೇಸ್ವಾಮಿಯವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಕಾಳಪ್ಪನಹಟ್ಟಿಯ ಗ್ರಾಮದವರಾಗಿದ್ದರು. ತಮ್ಮ ರಾಜಕೀಯ ಜೀವನವನ್ನು ಜೆಡಿಎಸ್ ನೊಂದಿಗೆ ಪ್ರಾರಂಭಿಸಿದ್ದರು. ಇವರು ಮೂರು ಬಾರಿ ಚಳ್ಳಕೆರೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಗೊಂಡಿದ್ದರು. ಅಲ್ಲದೇ ದೇವೇಗೌಡರ ಸಚಿವ ಸಂಪುಟದಲ್ಲಿ ಅಬಕಾರಿ ಸಚಿವರಾಗಿ ಹಾಗೂ ಜೆ.ಎಚ್.ಪಟೇಲ್ ಸರ್ಕಾರದಲ್ಲಿ ಸಣ್ಣ ನೀರಾವರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

    ಜೆಡಿಎಸ್ ತೊರೆದು ಬಿಜೆಪಿ ಸೇರಿಕೊಂಡಿದ್ದ ತಿಪ್ಪೇಸ್ವಾಮಿಯವರು ಯಡಿಯೂರಪ್ಪನವರ ವಲಯದಲ್ಲಿ ಗುರುತಿಸಿಕೊಂಡಿದ್ದರು. ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡರಾಗಿದ್ದ ಅವರು ವಾಲ್ಮೀಕಿ ಗುರುಪೀಠ ಸ್ಥಾಪನೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ರಾಜ್ಯ ಸರ್ಕಾರದಿಂದ ವಾಲ್ಮೀಕಿ ಪುರಸ್ಕಾರಕ್ಕೂ ಭಾಜನರಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews