Tag: ಚೌಕಿದರ್ ಚೋರ್ ಹೈ

  • ಚೌಕಿದಾರ್ ಚೋರ್ ಹೈ ಹೇಳಿಕೆ – ಸುಪ್ರೀಂನಲ್ಲಿ ರಾಹುಲ್ ಗಾಂಧಿ ವಿಷಾದ

    ಚೌಕಿದಾರ್ ಚೋರ್ ಹೈ ಹೇಳಿಕೆ – ಸುಪ್ರೀಂನಲ್ಲಿ ರಾಹುಲ್ ಗಾಂಧಿ ವಿಷಾದ

    ನವದೆಹಲಿ: ಚುನಾವಣಾ ಪ್ರಚಾರ ಭಾಷಣದಲ್ಲಿ ಮೋದಿಯನ್ನು ಟೀಕಿಸುವ ಸಂದರ್ಭದಲ್ಲಿ `ಚೌಕಿದರ್ ಚೋರ್ ಹೈ’ ಎಂದು ಹೇಳಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟಿನಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ.

    ಪ್ರಚಾರದ ಅಬ್ಬರದಲ್ಲಿ ಚೌಕಿದಾರ್ ಚೋರ್ ಹೈ ಎಂಬ ಹೇಳಿದ್ದೇನೆ ಎಂದು ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್ ನೋಟಿಸ್‍ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ತನ್ನ ಹೇಳಿಕೆಯನ್ನು ವಿರೋಧಿಗಳು ತಿರುಚಿದ್ದಾರೆ.  ಅಷ್ಟೇ ಅಲ್ಲದೇ ರಫೇಲ್ ತೀರ್ಪನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಅಫಿಡವಿಟ್ ನಲ್ಲಿ ಉಲ್ಲೇಖಿಸಿದ್ದಾರೆ.

    ರಾಹುಲ್ ಗಾಂಧಿ ಉತ್ತರಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ, ರಾಹುಲ್ ಗಾಂಧಿ ನೀಡಿದ ಉತ್ತರ ನನಗೆ ತೃಪ್ತಿ ತಂದಿದೆ. ನಾನು ಸುಳ್ಳು ಹೇಳಿದ್ದೇನೆ ಎನ್ನುವುದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ. ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎನ್ನುವುದನ್ನು ಕೋರ್ಟ್ ನಿರ್ಧರಿಸುತ್ತದೆ ಎಂದು ತಿಳಿಸಿದ್ದಾರೆ. ಸುಪ್ರೀಂ ಈ ನ್ಯಾಯಾಂಗ ನಿಂದನೆಯ ಅರ್ಜಿಯನ್ನು ಮಂಗಳವಾರ ನಡೆಸಲಿದೆ.

    ಏನಿದು ಪ್ರಕರಣ?
    ರಫೇಲ್ ತೀರ್ಪಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಯನ್ನು ಪುರಸ್ಕರಿಸಬಾರದು ಎಂದು ಕೇಂದ್ರದ ವಾದವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಈ ಆದೇಶ ಬಂದ ನಂತರ ಚೌಕಿದಾರ್ (ಪ್ರಧಾನಿ ಮೋದಿ) ಕಳ್ಳತನ ಮಾಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ರಾಹುಲ್ ಗಾಂಧಿ ಅವರು ತಮ್ಮ ಪ್ರಚಾರ ಭಾಷಣದಲ್ಲಿ ಹೇಳಿದ್ದರು.

    ರಾಹುಲ್ ಗಾಂಧಿ ಅವರು, ರಫೇಲ್ ಡೀಲ್ ಪ್ರಕರಣದ ಆದೇಶದಲ್ಲಿ ಇಲ್ಲದೆ ಇರುವ ಅಂಶಗಳನ್ನು ಉಲ್ಲೇಖಿಸಿ ಮೋದಿ ಅವರನ್ನು ಟೀಕೆ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ಸುಪ್ರೀಂ ಕೋರ್ಟಿನಲ್ಲಿ ರಾಹುಲ್ ವಿರುದ್ಧ ನ್ಯಾಯಾಂಗ ನಿಂದನೆ ದೂರು ನೀಡಿದ್ದರು. ಮೀನಾಕ್ಷಿ ಲೇಖಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿ ಏ.22 ರಂದು ಸ್ಪಷ್ಟನೆ ನೀಡಬೇಕೆಂದು ಸೂಚಿಸಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯೂ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೂ ದೂರು ನೀಡಿತ್ತು.