Tag: ಜಾರಿ ನಿದೇರ್ಶನಾಲಯ

  • ಚಿದಂಬರಂಗೆ ಮತ್ತೆ ಅನಾರೋಗ್ಯ- ಚಿಕಿತ್ಸೆ ಕೊಡಿಸಿ ಕಚೇರಿಗೆ ಕರೆತಂದ ಇಡಿ ಅಧಿಕಾರಿಗಳು

    ಚಿದಂಬರಂಗೆ ಮತ್ತೆ ಅನಾರೋಗ್ಯ- ಚಿಕಿತ್ಸೆ ಕೊಡಿಸಿ ಕಚೇರಿಗೆ ಕರೆತಂದ ಇಡಿ ಅಧಿಕಾರಿಗಳು

    ನವದೆಹಲಿ: ಐಎನ್‍ಎಕ್ಸ್ ಮೀಡಿಯಾ ಹಗರಣ ಸಂಬಂಧ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಮತ್ತೆ ಆರೋಗ್ಯ ಸಮಸ್ಯೆ ಎದುರಾಗಿತ್ತು. ಹೀಗಾಗಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿದ್ದ ಅಧಿಕಾರಿಗಳು, ಚಿಕಿತ್ಸೆ ಬಳಿಕ ಜಾರಿ ನಿರ್ದೇಶನಾಲಯ ಕಚೇರಿಗೆ ಕರೆತಂದಿದ್ದಾರೆ.

    ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಪಿ.ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಒಂದು ಲಕ್ಷ ಬಾಂಡ್ ಜೊತೆಗೆ ಪಾಸ್ ಪೋರ್ಟ್ ಅನ್ನು ಕೋರ್ಟ್ ಗೆ ಸಲ್ಲಿಸಬೇಕೆಂದು ಆದೇಶಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಆದರೆ ಮತ್ತೊಂದು ಪ್ರಕರಣದಲ್ಲಿ ಪಿ.ಚಿದಂಬರಂ ಪ್ರಮುಖ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ತಿಹಾರ್ ಜೈಲಿನಲ್ಲೇ ಮುಂದುವರಿಯಬೇಕಾದ ಪರಿಸ್ಥಿತಿ ಎದುರಾಗಿದೆ.

    ದೆಹಲಿ ನ್ಯಾಯಾಲಯವು ಪಿ.ಚಿದಂಬರಂ ಅವರನ್ನು ಅಕ್ಟೋಬರ್ 30ವರೆಗೆ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಗೆ ನೀಡಿದೆ. ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್, ಚಿದಂಬರಂ ಅವರನ್ನು ಇಡಿ ಪ್ರಶ್ನಿಸಲು ಅವಕಾಶ ನೀಡಿದ್ದಾರೆ. ಜೊತೆಗೆ ಯಾವುದೇ ವೈದ್ಯಕೀಯ ತೊಂದರೆಗಳಿದ್ದಲ್ಲಿ ತಕ್ಷಣ ಅವರನ್ನು ಏಮ್ಸ್ ಗೆ ಕರೆದೊಯ್ಯಬೇಕೆಂದು ಆದೇಶಿಸಿದ್ದರು.

    ತಿಹಾರ್ ಜೈಲಿನಲ್ಲಿರುವ ಆರೋಪಿಗಳಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ಸಾಮಾನ್ಯವಾಗಿ ದೀನ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಗುತ್ತದೆ. ಆದರೆ ಕಾಂಗ್ರೆಸ್ ನಾಯಕ ಚಿದಂಬರಂ ಪ್ರಕರಣದಲ್ಲಿ ಮಾತ್ರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಾಗ ಏಮ್ಸ್ ಆಸ್ಪತ್ರೆಗೆ ದಾಖಲಿಸಬೇಕೆಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ಇಡಿ ಅಧಿಕಾರಿಗಳು ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಕಚೇರಿಗೆ ಕರೆತಂದಿದ್ದಾರೆ.

    ಏನಿದು ಪ್ರಕರಣ?
    ಚಿದಂಬರಂ ಅವರು 2007ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶ ಬಂಡವಾಳ ಹೂಡಿಕೆ ಪ್ರೋತ್ಸಾಹಕಾ ಮಂಡಳಿ (ಎಫ್‍ಐಪಿಬಿ)ಯ ಅನುಮೋದನೆ ಸಿಕ್ಕಿತ್ತು. ಈ ಮೂಲಕ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ 305 ಕೋಟಿ ರೂ. ಮೊತ್ತದಷ್ಟು ವಿದೇಶಿ ಬಂಡವಾಳ ಹೂಡಿಕೆ ಲಭ್ಯವಾಗಿತ್ತು. ಆದರೆ ಪುತ್ರ ಕಾರ್ತಿ ಚಿದಂಬರಂ ಶಿಫಾರಸಿನ ಮೇಲೆ ಈ ಅನುಮೋದನೆಯನ್ನು ಚಿದಂಬರಂ ದೊರಕಿಸಿಕೊಟ್ಟಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

    ಈ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಕಂದಾಯ ಸಚಿವಾಲಯ ವಿಚಾರಣೆಗೆ ಆದೇಶಿಸಿತ್ತು. ಈ ಸಂದರ್ಭದಲ್ಲಿ ಪಿ ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಅವರು ಮಧ್ಯಸ್ಥಿಕೆ ವಹಿಸಿ, ತಂದೆಯ ಪ್ರಭಾವವನ್ನು ಬಳಸಿಕೊಂಡು ವಿಚಾರಣೆಯನ್ನು ತಪ್ಪಿಸಲು ತಮ್ಮ ಕಂಪನಿಯ ಮೂಲಕ 10 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಸಿಬಿಐ, 2017ರಲ್ಲಿ ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಮತ್ತಿತರರ ವಿರುದ್ಧ ಎಫ್‍ಐಆರ್ ದಾಖಲಿಸಿತ್ತು.