Tag: ಪದ್ಮ ಶ್ರೀ

  • ಕೇಂದ್ರ ಸರ್ಕಾರ, ಮೋದಿಗೆ ವೇದವ್ಯಾಸ ಕಾಮತ್ ಧನ್ಯವಾದ

    ಕೇಂದ್ರ ಸರ್ಕಾರ, ಮೋದಿಗೆ ವೇದವ್ಯಾಸ ಕಾಮತ್ ಧನ್ಯವಾದ

    ಮಂಗಳೂರು: 2020ನೇ ಸಾಲಿನ ಪದ್ಮ ಪ್ರಶಸ್ತಿಗಳಲ್ಲಿ ಕರಾವಳಿಯ 3 ಸಾಧಕರನ್ನು ಗುರುತಿಸಿ ಗೌರವಿಸಿದ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ್ ಕಾಮತ್ ಅವರು ಧನ್ಯವಾದ ತಿಳಿಸಿದ್ದಾರೆ.

    ಪೇಜಾವರ ಶ್ರೀ ಹಾಗೂ ಮಾಜಿ ಕೇಂದ್ರ ಸಚಿವ ಜಾರ್ಜ್ ಫೆರ್ನಾಂಡೀಸ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಹಾಗೂ ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ದೊರೆತಿರುವ ಪದ್ಮಶ್ರೀ ಪ್ರಶಸ್ತಿ ಕರಾವಳಿಯ ಘನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಅವರ ಸಾಧನೆಯಿಂದ ಕರಾವಳಿಯ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆಯಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಪೇಜಾವರ ಶ್ರೀ, ಜೇಟ್ಲಿ, ಸುಷ್ಮಾ ಸ್ವರಾಜ್, ಫರ್ನಾಂಡಿಸ್‍ಗೆ ಪದ್ಮ ವಿಭೂಷಣ

    ಸಾಮಾಜಿಕ ಕ್ರಾಂತಿಯ ಮೂಲಕ ಸಮಾಜದ ಗಟ್ಟಿಧ್ವನಿಯಾಗಿದ್ದ ಪೂಜ್ಯ ಪೇಜಾವರ ಶ್ರೀಗಳು, ಕಿತ್ತಳೆ ಹಣ್ಣು ವ್ಯಾಪಾರದಿಂದ ಅಕ್ಷರ ದೇಗುಲ ನಿರ್ಮಿಸಿದ ಹಾಜಬ್ಬ ಹಾಗೂ ಸಾಧಾರಣ ವ್ಯಕ್ತಿಯಿಂದ ಈ ದೇಶದ ರಕ್ಷಣಾ ಸಚಿವನಾಗಿ ಸಾಧನೆ ಮಾಡಿದ ಜಾರ್ಜ್ ಫೆರ್ನಾಂಡೀಸ್ ಅವರಿಗೆ ಪ್ರಶಸ್ತಿ ದೊರಕಿರುವುದು ಅತ್ಯಂತ ಹರ್ಷ ತಂದಿದೆ. ಅರ್ಹ ವ್ಯಕ್ತಿಗಳನ್ನು ಗುರುತಿಸಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಗೌರವ

  • ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಗೌರವ

    ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಗೌರವ

    ಬೆಂಗಳೂರು: ಅಕ್ಷರ ಸಂತ ಎಂದೇ ಖ್ಯಾತರಾಗಿರುವ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿದೆ.

    ಇವರು ಕಳೆದ 20 ವರ್ಷಗಳಿಂದ ದಕ್ಷಿಣ ಕನ್ನಡದ ಕೊಣಾಜೆ ಸಮೀಪದ ಹರೇಕಳ ನ್ಯೂ ಪಡ್ಪು ಗ್ರಾಮದಲ್ಲಿ ಬಡ ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿದ್ದಾರೆ. ವಿಶೇಷವೆಂದರೆ ತನಗಿಲ್ಲದ ಶಿಕ್ಷಣ ತನ್ನ ಊರಿನ ಮಕ್ಕಳಿಗೆ ಸಿಗಬೇಕು ಎನ್ನುವ ಮಹದಾಸೆಯಿಂದ ಕಿತ್ತಳೆ ಮಾರುತ್ತಿದ್ದ ಹರೇಕಳ ಹಾಜಬ್ಬ, ಕಿತ್ತಳೆ ಮಾರಿ ಜೀವನ ಸಾಗಿಸಿ ಉಳಿದ ಹಣದಿಂದಲೇ ಅಂಗನವಾಡಿ ಆರಂಭಿಸುವ ಮೂಲಕ ಶಿಕ್ಷಣ ನೀಡುತ್ತಿದ್ದಾರೆ.

    2004ರಲ್ಲಿ ಕನ್ನಡ ಪತ್ರಿಕೆಯೊಂದು ಹಾಜಬ್ಬರನ್ನು `ವರ್ಷದ ವ್ಯಕ್ತಿ’ ಎಂದು ಪ್ರಶಸ್ತಿ ನೀಡಿ ಗುರುತಿಸುವ ಮೂಲಕ ಹಾಜಬ್ಬ ಬೆಳಕಿಗೆ ಬಂದಿದ್ದರು. ಬಳಿಕ ದೆಹಲಿಯ ಸಿಎನ್‍ಎನ್-ಐಬಿಎನ್ `ರಿಯಲ್ ಹೀರೋ’ ಪ್ರಶಸ್ತಿ ನೀಡಿ ಗೌರವಿಸಿತ್ತು.

    ಮಂಗಳೂರು ವಿಶ್ವವಿದ್ಯಾನಿಲಯ ಇರುವ ಕೊಣಾಜೆ ಸಮೀಪದ ಹರೇಕಳದಲ್ಲಿ ಗ್ರಾಮೀಣ ಮಕ್ಕಳಲ್ಲಿ ಶಾಲೆಯ ಸೌಲಭ್ಯ ಇರಲಿಲ್ಲ. ಮಂಗಳೂರಿನ ಕೇಂದ್ರ ಪ್ರದೇಶ ಸ್ಟೇಟ್ ಬ್ಯಾಂಕ್ ಸರ್ಕಲಿನಲ್ಲಿ ಕಿತ್ತಳೆ ಹಣ್ಣು ಮಾರಾಟ ಮಾಡುವ ಕಾಯಕ ಮಾಡುತ್ತಿದ್ದ ಹಾಜಬ್ಬ ತಾವೇ ಶಾಲೆಯೊಂದನ್ನು ತನ್ನೂರಿನಲ್ಲಿ ನಿರ್ಮಿಸಿದ್ದರು. ಇದನ್ನೂ ಓದಿ: ನಡೆದಾಡುವ ಅರಣ್ಯದ ವಿಶ್ವಕೋಶ ತುಳಸಿ ಗೌಡರಿಗೆ ಪದ್ಮಶ್ರೀ ಗೌರವ

    ಕಿತ್ತಳೆ ಮಾರಾಟ ಮಾಡುತ್ತಿದ್ದಾಗ ವಿದೇಶಿ ಮಹಿಳೆಯ ಆಂಗ್ಲ ಭಾಷೆಯ ಪ್ರಶ್ನೆಗೆ ಉತ್ತರ ನೀಡಲಾಗದ ಹಾಜಬ್ಬರಿಗೆ ಶಿಕ್ಷಣದ ಮಹತ್ವ ಅರಿವಾಗಿತ್ತು. ಈ ಹಿನ್ನೆಲೆಯಲ್ಲಿಯೇ ತನ್ನೂರಿನ ಮಕ್ಕಳಿಗೆ ಶಾಲೆ ತೆರೆಯಲು ಕಚೇರಿಯಿಂದ ಕಚೇರಿಗೆ ಅಲೆದು ಶಾಲೆ ನಿರ್ಮಾಣ ಮಾಡಿದ್ದರು. ಇವರ ಸಾಧನೆಯ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದರೂ ಹೆಚ್ಚಿನ ಪ್ರಚಾರ ಪಡೆದುಕೊಂಡಿರಲಿಲ್ಲ. ಇದೀಗ ಅವರು ತನ್ನೂರಿನಲ್ಲಿ ಕಾಲೇಜು ಆರಂಭಿಸುವ ಆಶಯ ಹೊಂದಿದ್ದಾರೆ.