Tag: ಪಬ್ಲಿಕ್ ಟಿವಿ Vijay

  • ಇಳಿ ವಯಸ್ಸಿನಲ್ಲಿ ಕೊರೊನಾ ಗೆದ್ದ ದುನಿಯಾ ವಿಜಯ್ ಪೋಷಕರು

    ಇಳಿ ವಯಸ್ಸಿನಲ್ಲಿ ಕೊರೊನಾ ಗೆದ್ದ ದುನಿಯಾ ವಿಜಯ್ ಪೋಷಕರು

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ದುನಿಯಾ ವಿಜಯ್ ತಂದೆ-ತಾಯಿ ಕೊರೊನಾ ಸೋಂಕಿಗೆ ಒಳಗಾಗಿದ್ದರು ಎಂಬ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಇಷ್ಟು ದಿನ ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ ಪಡೆದು ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಬಗ್ಗೆ ದುನಿಯ ವಿಜಯ್‍ರವರು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.

    ವೀಡಿಯೋದಲ್ಲಿ ದುನಿಯಾ ವಿಜಯ್‍ರವರು ತಮ್ಮ ತಂದೆ ತಾಯಿಗೆ ಆರೈಕೆ ಮಾಡಿದ್ದು, ವಯಸ್ಸಾದ ಕಾಲದಲ್ಲಿ ತಂದೆ ತಾಯಿಗೆ ನೆರವಾಗಿದ್ದಾರೆ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ವೀಡಿಯೋ ಜೊತೆಗೆ ಅವರು ಒಂದು ತಿಂಗಳು ಕಾಲ ಕಳೆದಿರುವುದರ ಬಗ್ಗೆ ಸಣ್ಣ ಕಥೆಯೊಂದನ್ನು ಹೇಳಿಕೊಂಡಿದ್ದಾರೆ.

    ‘ಸುಮಾರು ಒಂದು ತಿಂಗಳಿಂದ ನನ್ನ ಜೀವನದಲ್ಲಿ ನಡೆದ ಕೆಲವು ಘಟನೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ಮನುಷ್ಯ ಯಾವಾಗಲೂ ಪಾಸಿಟಿವ್ ಆಗಿರಬೇಕು ಅಂತಾರೆ. ನಾನು ಜೀವನದಲ್ಲಿ ಇರೋದು ಯಾವಾಗಲೂ ಹಾಗೇನೆ. ಆದರೆ ಒಂದು ದಿನ ನನ್ನ ಜನ್ಮದಾತರಿಬ್ಬರಿಗೂ ಕೊರೊನಾ ಪಾಸಿಟಿವ್ ಆಗಿದೆ ಎಂದಾಗ ಒಂದು ಕ್ಷಣ ನಲುಗಿದೆ. ಮತ್ತೆ ಮರುಕ್ಷಣ ಕಾರ್ಯಶೀಲನಾದೆ. ಬಿಯು ನಂಬರ್ ಬರೋವರೆಗೂ ನಮ್ಮ ತಂದೆ ತಾಯಿಗೆ ಬೆಡ್ ಸಿಗಲ್ಲ ಎಂಬ ವಿಷಯ ನನಗೆ ತಿಳಿಯಿತ್ತು.

    ನನ್ನ ತಂದೆಗೆ 80 ವರ್ಷ ವಯಸ್ಸು, ನನ್ನ ತಾಯಿಗೆ 76 ವರ್ಷ. ಈಗಾಗಲೇ ಅವರ ಆರೋಗ್ಯದ ಸ್ಥಿತಿ ಹದಗೆಟ್ಟಿದೆ. ಯೋಚಿಸಿಕೊಂಡು ಕೋರುವ ಸಮಯ ಇದಲ್ಲ ಎಂದು ತಿಳಿದ ನಾನು ನನ್ನ ಆತ್ಮೀಯ ವೈದ್ಯ ವಿದ್ಯಾನಂದರನ್ನು ಸಂಪರ್ಕಿಸಿದೆ. ಆಗ ಅವರು ಬೆಡ್‍ಗೆ ಕಾಯದೆ ಟ್ರೀಟ್ಮೆಂಟ್ ಆರಂಭಿಸಲು ಹೇಳಿದರು. ಅಂದು ಡಾಕ್ಟರ್ ಜೊತೆ ಸಾಯಂಕಾಲ ಮಾತನಾಡಿ ನಂತರ ರಾತ್ರಿ ಒಬ್ಬನೇ ಯೋಚಿಸುತ್ತಾ ಕುಳಿತಾಗ ‘ನಿಮ್ಮ ತಂದೆ-ತಾಯಿಗೆ ಬಂದಿರುವ ಕೊರೊನಾ ಅವರನ್ನು ಆರೈಕೆ ಮಾಡುವ ಸಮಯದಲ್ಲಿ ನಿನಗೂ ಬಂದು ಸಾಯುವೆ ನೆಂಬ ಭಯವೇ’ ಎಂಬ ಪ್ರಶ್ನೆಯನ್ನು ನನ್ನ ಆತ್ಮಸಾಕ್ಷಿ ನನ್ನ ಮುಂದಿಟ್ಟಿತು. ಮರುಕ್ಷಣದಲ್ಲೇ ನನ್ನ ಆತ್ಮಸಾಕ್ಷಿಗೆ ನನ್ನ ಉತ್ತರ ನಗುವಾಗಿತ್ತು. ಅವರೇ ನೀಡಿದ ಈ ಜನ್ಮ ಅವರ ಆರೈಕೆ ಸಂದರ್ಭದಲ್ಲಿ ಹೋದರೆ ಅದಕ್ಕಿಂತ ಅದೃಷ್ಟ ಇನ್ನೇನಿದೆ ಎಂದುಕೊಂಡು. ಸುಮಾರು 15 ಗಂಟೆಗಳ ನಂತರ ಅಂದರೆ ಮರುದಿನ ಬೆಳಗ್ಗೆ 9:00ರ ಮುಂಜಾನೆಗೆ ಒಂದು ಆಟೋದಲ್ಲಿ ಆಕ್ಸಿಜನ್, ಮೆಡಿಸಿನ್ ಜತೆ ಈಶ್ವರ್ ಎಂಬ ಆರೋಗ್ಯ ಶುಶ್ರೂಷಕ ಬಂದು ಇಳಿದರು.

     

    ನಾನು ನನ್ನ ಮಗ ಮತ್ತು ಕೀರ್ತಿ ಮೂರು ಜನ ನಮ್ಮ ತಂದೆ ತಾಯಿಯನ್ನು ಕರೆದುಕೊಂಡು ಹೋಗಲು ಬಂದಿದ್ದ ಕ್ರೂರಿ ಕೊರೊನಾ ಜೊತೆ ಸೆಣೆಸಾಡಲು ನಿಂತೆವು. ಮಾನಸಿಕವಾಗಿ ನಾನು ನಂಬಿದ ಗುರುಗಳು ನನ್ನ ಜತೆಯಲ್ಲಿದ್ದರೆ, ದೈಹಿಕವಾಗಿ ನಮ್ಮ ಜೊತೆ ಆರೋಗ್ಯ ಶುಶ್ರೂಷಕ ಈಶ್ವರ್ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಅರ್ಧಗಂಟೆ ಬಂದು ಹೋಗುತ್ತಿದ್ದರು. ನಮ್ಮ ತಂದೆ ಈಗಾಗಲೇ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಅದರಲ್ಲಿ ಈ ಕೊರೊನಾ ಅವರನ್ನು ತುಂಬಾ ಬಳಲುವಂತೆ ಮಾಡಿತು. ನಮ್ಮ ತಾಯಿ ಎರಡು ಮೂರು ದಿನದಲ್ಲಿ ಚಿಕಿತ್ಸೆಗೆ ಸ್ಪಂದಿಸಲು ಪ್ರಾರಂಭಿಸಿದರು. ಈ ನಡುವೆ ಪ್ರತಿ ದಿನ ವೀಡಿಯೋ ಕಾಲ್ ಮೂಲಕ ವೈದ್ಯರು ಚಿಕಿತ್ಸೆಯನ್ನು ಹೇಳುತ್ತಿದ್ದರು ಮತ್ತು ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಅದರ ಜತೆಗೆ ಪ್ರತಿ ದಿನ ಬರುತ್ತಿದ್ದ ಈಶ್ವರ ನಮ್ಮಗಳ ಪಾಲಿಗೆ ನಿಜವಾದ ಈಶ್ವರನೆ ಆದ. ನಮ್ಮ ತಂದೆಯ ಆರೋಗ್ಯ ಮಾತ್ರ ದಿನದಿಂದ ದಿನಕ್ಕೆ ಬಿಗಡಾಯಿಸಲು ಪ್ರಾರಂಭಿಸಿತು. ಯಾವ ಮಟ್ಟಿಗೆ ಎಂದರೆ ನನ್ನ ಆತ್ಮೀಯರು ಫೋನ್ ಮಾಡಿದಾಗ ನಮ್ಮ ತಂದೆ ನಮ್ಮನ್ನು ಬಿಟ್ಟು ಹೋಗುತ್ತಾರೆ ಏನು ಎಂಬ ಅನುಮಾನ ಕಾಡುತ್ತಿದೆ ಎಂದು ಸ್ವತಃ ನಾನೇ ಹೇಳಿದ್ದುಂಟು. ಆ ಕಾರಣಕ್ಕೆ ಅವರ ಜತೆ ಕಳೆಯುತ್ತಿರುವ ಕೊನೆಯ ಕ್ಷಣಗಳು ನೆನಪಿನಲ್ಲಿ ಉಳಿಯಲಿ ಎಂಬ ಉದ್ದೇಶದಿಂದ ವಿಡಿಯೋ ಮಾಡಲು ಪ್ರಾರಂಭಿಸಿದೆವು. ಇದರ ಮಧ್ಯೆ ನಾನು ಭರವಸೆಯನ್ನು ಮಾತ್ರ ಕಳೆದುಕೊಂಡಿರಲಿಲ್ಲ.

    ಮೊದಲು ನನ್ನ ತಾಯಿ ಚೇತರಿಸಿಕೊಂಡು ಕೊರೋನಾದಿಂದ ಸಂಪೂರ್ಣವಾಗಿ ಗುಣಮುಖರಾದರು. ‘ ನೀನು ಹೆದರಬೇಡ. ಚೇತರಿಸಿಕೊಂಡ ನಂತರ ನನ್ನಮ್ಮ ನನ್ನನ್ನು ಕರೆದು ‘ ನಮಗೆ ಯಾರಿಗೂ ಸಿಗದ ಯೋಗ ನಿನಗೆ ಸಿಕ್ಕಿದೆ. ನಿನ್ನನ್ನು ಪ್ರೀತಿಸುವವರು ಇರುವವರೆಗೂ, ಅವರ ಆಶೀರ್ವಾದ, ಆರೈಕೆ ನಿನ್ನನ್ನು ಕಾಯುತ್ತದೆ’ ಎಂದು ಹೇಳಿದರು. ನಿಜವಾಗಲೂ ನಮ್ಮ ತಾಯಿ ಹೇಳಿದಂತೆ ಆಯಿತು. ನಿಮ್ಮಗಳ ಆಶೀರ್ವಾದ ಮತ್ತು ದೈವ ಬಲದಿಂದ ನಮ್ಮ ಮನೆಯಲ್ಲಿ ಚಮತ್ಕಾರ ನಡೆಯಿತು. ನಮ್ಮ ತಂದೆ ದಿನದಿಂದ ದಿನಕ್ಕೆ ಚೇತರಿಸಿಕೊಳ್ಳುತ್ತಾ ಬಂದರು. ನಾನು ನಿಮ್ಮೆಲ್ಲರ ಬಳಿ ಕೇಳಿಕೊಳ್ಳುವುದಿಷ್ಟೆ. ಕೊರೋನಾ ಬಂತು ಎಂದು ಧೃತಿಗೆಡಬೇಡಿ, ತಂದೆ-ತಾಯಿಯರನ್ನು ಕೈಬಿಡಬೇಡಿ. ನನ್ನ ತಂದೆ-ತಾಯಿ ಬದುಕಿದ್ದಾರೆ ಎಂಬ ಖುಷಿಯಿಂದ ಈ ಘಟನೆಯನ್ನು ಹಂಚಿಕೊಳ್ಳುತ್ತಿಲ್ಲ, ಎಷ್ಟೋ ಜನ ನನ್ನ ರೀತಿ ಸೇವೆ ಮಾಡಿ ತಂದೆತಾಯಿಯನ್ನು ಕಳೆದುಕೊಂಡವರಿದ್ದಾರೆ. ಅವರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಆದರೆ ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ. ಸಕಾರಾತ್ಮಕವಾಗಿ ಯೋಚಿಸಿ ಈ ಕೊರೊನಾ ವಿರುದ್ಧ ಗೆಲ್ಲೋಣ. ಜತೆಗೆ ನನ್ನ ಜೀವನದಲ್ಲಿ ನಡೆದ ಈ ಘಟನೆ ಕೆಲವರಿಗೆ ಸ್ಪೂರ್ತಿಯಾಗುತ್ತದೆ ಎಂಬ ಕಾರಣಕ್ಕೆ ಇದನ್ನು ಹಂಚಿಕೊಂಡಿರುವುದಾಗಿ ತಿಳಿಸಿದ್ದಾರೆ.

  • ದಳಪತಿ ವಿಜಯ್‍ಗೆ ಆ್ಯಕ್ಷನ್ ಕಟ್ ಹೇಳ್ತಾರಾ ಪ್ರಶಾಂತ್ ನೀಲ್?

    ದಳಪತಿ ವಿಜಯ್‍ಗೆ ಆ್ಯಕ್ಷನ್ ಕಟ್ ಹೇಳ್ತಾರಾ ಪ್ರಶಾಂತ್ ನೀಲ್?

    ಬೆಂಗಳೂರು: ಟಾಲಿವುಡ್‍ನ ಖ್ಯಾತ ನಿರ್ಮಾಪಕ ದಿಲ್ ರಾಜು ತಮಿಳಿನ ಸೂಪರ್ ಸ್ಟಾರ್ ವಿಜಯ್ ಜೊತೆಗೂಡಿ ದೊಡ್ಡ ಮಟ್ಟದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಪ್ಲಾನ್ ಮಾಡಿದ್ದಾರೆ. ವಿಶೇಷವೆಂದರೆ ಈ ಸಿನಿಮಾವನ್ನು ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್‍ರವರನ್ನ ಕರೆತರಲು ಆಸಕ್ತಿ ಹೊಂದಿದ್ದಾರಂತೆ. ಅಲ್ಲದೆ ಈ ಸಿನಿಮಾಕ್ಕಾಗಿ ದಕ್ಷಿಣ ಭಾರತದ ಹಲವಾರು ನಟರನ್ನು ಕರೆತರಲು ಆಯೋಚನೆ ನಡೆಸುತ್ತಿದ್ದಾರೆ ಎನ್ನಲಾಗ್ತಿದೆ.

    ಸಿನಿಮಾ ಕುರಿತಂತೆ ನಿರ್ಮಾಪಕ ದಿಲ್ ರಾಜು, ಪ್ರಶಾಂತ್ ನೀಲ್ ಜೊತೆ ಈಗಾಗಲೇ ಮಾತನಾಡಿರುವುದಾಗಿ ತಿಳಿಸಿದ್ದಾರೆ. ದಳಪತಿ ವಿಜಯ್ ಅಭಿನಯಿಸುತ್ತಿರುವ ಈ ಮೆಗಾ ಬಜೆಟ್ ಚಿತ್ರಕ್ಕೆ ಪ್ರತಿಭಾವಂತ ನಿದೇರ್ಶಕ ಪ್ರಶಾಂತ್ ನೀಲ್‍ರನ್ನು ಸಿನಿಮಾ ನಿರ್ದೇಶಿಸಲು ಕರೆತರಕಲು ಆಸಕ್ತಿ ಹೊಂದಿರುದಾಗಿ ಹೇಳಿಕೊಂಡಿದ್ದಾರೆ. ಸದ್ಯ ಈ ಪ್ರೊಜೆಕ್ಟ್ ಕುರಿತಂತೆ ವಿಜಯ್, ದಿಲ್ ರಾಜು ಹಾಗೂ ಪ್ರಶಾಂತ್ ನೀಲ್ ಇತ್ತೀಚೆಗೆ ಭೇಟಿಯಾಗಿದ್ದು, ಚರ್ಚೆ ನಂತರ ಮೂವರು ಪಾಸಿಟಿವ್ ರಿಯಾಕ್ಷನ್ ಹೊಂದಿದ್ದಾರೆ ಎಂದು ವರದಿಯಾಗಿದೆ.

    ಈ ಹೊಸ ಪ್ರೊಜೆಕ್ಟ್ ಗೆ ಆ್ಯಕ್ಷನ್ ಕಟ್ ಹೇಳಲು ಪ್ರಶಾಂತ್ ನೀಲ್‍ರವರಿಗೆ ದಿಲ್ ರಾಜು ಹಾಗೂ ವಿಜಯ್ ಕೇಳಿಕೊಂಡಿದ್ದಾರಂತೆ. ಇದೀಗ ಪ್ರಶಾಂತ್ ನೀಲ್ ಕೆಜಿಎಫ್ ಹಾಗೂ ಸಾಲರ್ ಮೂವಿಯಲ್ಲಿ ಬ್ಯುಸಿಯಾಗಿದ್ದು, ಎಲ್ಲಾ ಒಕೆಯಾದರೆ 2023ರಲ್ಲಿ ಈ ಪ್ರಾಜೆಕ್ಟ್ ಕೈಗೆತ್ತಿಕೊಳ್ಳಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಕುರಿತಂತೆ ಮುಂದಿನ ದಿನಗಳಲ್ಲಿ ದಳಪತಿ ವಿಜಯ್‍ಗೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳುತ್ತಾರಾ ಇಲ್ಲವಾ ಎಂದು ಕಾದು ನೋಡಬೇಕಾಗಿದೆ.

    ಸದ್ಯ ವಿಜಯ್ 65ನೇ ಸಿನಿಮಾದಲ್ಲಿ ಕಾನ್ ಏಜೆಂಟ್ ಆಗಿ ಅಭಿನಯಿಸುತ್ತಿದ್ದು, ವಿಜಯ್‍ಗೆ ಜೋಡಿಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾಕ್ಕೆ ನಿರ್ದೇಶಕ ನೆಲ್ಸನ್ ದೀಲಿಪ್‍ಕುಮಾರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.