Tag: ಪ್ರಿಯಾಂಕ ಮೇರಿ ಫ್ರಾನ್ಸಿಸ್

  • ಪ್ರಜ್ವಲ್ ರೇವಣ್ಣನ ಅತಂಕವನ್ನು ದೂರ ಮಾಡಿದ ಡಿಸಿ ಪತ್ರ

    ಪ್ರಜ್ವಲ್ ರೇವಣ್ಣನ ಅತಂಕವನ್ನು ದೂರ ಮಾಡಿದ ಡಿಸಿ ಪತ್ರ

    ಹಾಸನ: ಚುನಾವಣಾ ಆಯೋಗಕ್ಕೆ ಹಾಸನ ಡಿಸಿ ಬರೆದ ಪತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಅಪೂರ್ಣ ಅಫಿಡವಿಟ್ ಸಲ್ಲಿಕೆ ಆರೋಪ ಪ್ರಕರಣದಲ್ಲಿ ಪಾರಾಗಿದ್ದಾರೆ.

    ಬಿಜೆಪಿ ಅಭ್ಯರ್ಥಿ ಎ. ಮಂಜು ಅವರು ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಕೆಯ ವೇಳೆ ಸುಳ್ಳು ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ಆರೋಪಿಸಿ ಇದರ ಬಗ್ಗೆ ತನಿಖೆ ಆಗಬೇಕು ಎಂದು ಚುನಾವಣೆ ಅಯೋಗಕ್ಕೆ ದೂರು ನೀಡಿದ್ದರು.

    ಈ ದೂರಿನ ಅನ್ವಯ ಪ್ರಜಾ ಪ್ರಾತಿನಿಧ್ಯ ಕಾಯಿದೆ 1951 ಕಲಂ 125ಚಿ ಪ್ರಕಾರ ಕ್ರಮ ಕೈಗೊಳ್ಳುವಂತೆ ಚುನಾವಣೆ ಆಯೋಗ ಹಾಸನ ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಗೆ ಪತ್ರ ಬರೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಗಕ್ಕೆ ಉತ್ತರ ನೀಡಿರುವ ಡಿಸಿ ಚುನಾವಣಾ ಆಯೋಗದ ನಿರ್ದೇಶನಗಳನ್ನೇ ಉಲ್ಲೇಖಿಸಿ ಅಭ್ಯರ್ಥಿ ವಿರುದ್ಧ ಕ್ರಮ ಕೈಗೊಳ್ಳುವುದು ಅಸಾಧ್ಯ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಅಫಿಡವಿಟ್‍ನಲ್ಲಿ ತಪ್ಪು ಮಾಹಿತಿ ಬಗ್ಗೆ ಚುನಾವಣಾ ಅಧಿಕಾರಿ ನೇರ ಕ್ರಮ ಅಸಾಧ್ಯ. ಈ ಬಗ್ಗೆ ದೂರುದಾರರೇ ಸೂಕ್ತ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಬಹುದು ಎಂದು ಮರು ಪತ್ರ ಬರೆದಿದ್ದಾರೆ.

    ಅರೋಪವೇನು?
    ನಾಮಪತ್ರ ಸಲ್ಲಿಕೆ ಮಾಡುವ ವೇಳೆ ಪ್ರಜ್ವಲ್ ರೇವಣ್ಣ ಅವರು ಸುಳ್ಳು ಅಫಿಡವಿಟ್ ಸಲ್ಲಿಕೆ ಮಾಡಿದ್ದಾರೆ. ಅವರು 7 ಕೋಟಿಗೂ ಹೆಚ್ಚು ಆದಾಯ ತೋರಿಸಿದ್ದಾರೆ. ಆದರೆ ಕೇವಲ ಮೂರು ಕೋಟಿಯಷ್ಟು ಆದಾಯದ ಮೂಲ ತೋರಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು 23 ಲಕ್ಷ ಪ್ರಜ್ವಲ್‍ಗೆ ಸಾಲ ನೀಡಿರೋದಾಗಿ ಹೇಳಿದ್ದಾರೆ. ಆದರೆ ಪ್ರಜ್ವಲ್ ಅಫಿಡವಿಟ್‍ನಲ್ಲಿ ಇದರ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಎ. ಮಂಜು ಆರೋಪಿಸಿದ್ದರು.

  • ರೇವಣ್ಣ ಆರೋಪಕ್ಕೆ ತಿರುಗೇಟು ಕೊಟ್ಟ ಹಾಸನ ಡಿಸಿ

    ರೇವಣ್ಣ ಆರೋಪಕ್ಕೆ ತಿರುಗೇಟು ಕೊಟ್ಟ ಹಾಸನ ಡಿಸಿ

    ಹಾಸನ: ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಸಲಹೆ ಪಡೆದು ಕೆಲಸ ಮಾಡುತ್ತಿದ್ದಾರೆಂಬ ಆರೋಪಕ್ಕೆ ಪ್ರಸ್ತುತ ಹಾಸನ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿರುಗೇಟು ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಸ್ವತಂತ್ರವಾಗಿ ಕೆಲಸ ಮಾಡುತ್ತಿದ್ದೇನೆ. ಯಾರಿಂದಲೂ ಸಲಹೆ ಪಡೆಯುವ ಅವಶ್ಯಕತೆ ನನಗಿಲ್ಲ ಎಂದು ಪ್ರಿಯಾಂಕ ಅವರು ಹೇಳುವ ಮೂಲಕ ಸಚಿವ ರೇವಣ್ಣರ ಆರೋಪವನ್ನು ತಳ್ಳಿ ಹಾಕಿದ್ದಾರೆ.

    ರೋಹಿಣಿಯವರು ನನ್ನ ಬ್ಯಾಚ್ ಮೇಟ್, ಹೀಗಾಗಿ ಅವರನ್ನು ಭೇಟಿ ಮಾಡುತ್ತೇನೆ. ಅದರಲ್ಲಿ ವಿಶೇಷ ಏನಿದೆ? ನಾನು ರೋಹಿಣಿ ಸಿಂಧೂರಿ ಅವರನ್ನು ಎರಡು ದಿನ ಜೊತೆಯಲ್ಲಿ ಇಟ್ಟುಕೊಂಡಿರಲಿಲ್ಲ. ಸಚಿವರ ಆರೋಪದ ಬಗ್ಗೆ ತಮಗೆ ಗೊತ್ತಿಲ್ಲ ಎನ್ನುತ್ತಲೇ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಪರೋಕ್ಷ ತಿರುಗೇಟು ನೀಡಿದರು.

    ಆರೋಪವೇನು?
    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಸಚಿವ ರೇವಣ್ಣ ಅವರು, ಚುನಾವಣೆ ಮುಕ್ತವಾಗಿ ನಡೆದಿದೆ ಎಂದು ಹೇಳಿರುವ ಜಿಲ್ಲಾಧಿಕಾರಿಗಳೇ, 10 ದಿನಗಳ ಬಳಿಕ ಚುನಾವಣಾ ಅಕ್ರಮ ನಡೆದಿದೆ ಎನ್ನುವುದರ ಬಗ್ಗೆ ಏಕೆ ದೂರು ಪಡೆದುಕೊಂಡರು. ಈ ಬಗ್ಗೆ ತನಿಖೆ ಆಗಬೇಕು, ಅಲ್ಲದೇ ಕೂಡಲೇ ಅವರನ್ನು ವರ್ಗಾವಣೆ ಮಾಡಬೇಕು. ಅವರು ವರ್ಗಾವಣೆ ಆಗಿ ಬಂದ ಬಳಿಕ ನಡೆದ ಎಲ್ಲಾ ಬೆಳವಣಿಗೆಗಳ ಬಗ್ಗೆ ಮುಕ್ತ ತನಿಖೆ ನಡೆಸಬೇಕಿದೆ. ಜಿಲ್ಲಾಧಿಕಾರಿಗಳು ಬಿಜೆಪಿ ಪಕ್ಷದ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ. ಈ ಕುರಿತು ಶೀಘ್ರವಾಗಿ ಆಯೋಗಕ್ಕೆ ಲಿಖಿತ ಮನವಿ ನೀಡಲಾಗುವುದು ಎಂದಿದ್ದರು.

    ಇದೇ ವೇಳೆ ಹಾಸನಕ್ಕೆ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಡಿಸಿ ಅವರು ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಭೇಟಿ ಮಾಡಿದ್ದರು. ಅವರಿಂದ ನಿರ್ದೇಶನ ಪಡೆದು ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.