Tag: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  • ನಾನೇನೂ ಮಾತನಾಡಲ್ಲ ಎಂದ ಪ್ರಹ್ಲಾದ್ ಜೋಶಿ

    ನಾನೇನೂ ಮಾತನಾಡಲ್ಲ ಎಂದ ಪ್ರಹ್ಲಾದ್ ಜೋಶಿ

    ಬೆಂಗಳೂರು: ನಾಯಕತ್ವ ಬದಲಾವಣೆ ಸೇರಿದಂತೆ ಯಾವುದೇ ವಿಚಾರದ ಕುರಿತು ನಾನು ಮಾತನಾಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಪ್ರಹ್ಲಾದ್ ಜೋಶಿ ನಿರಾಕರಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ನಂತರ ಸಂಭಾವ್ಯ ಸಿಎಂ ಅಂತಲೇ ಪ್ರಹ್ಲಾದ್ ಜೋಶಿಯವರ ಹೆಸರು ಮುನ್ನೆಲೆಗೆ ಬಂದಿದ್ದು, ಸಾಕಷ್ಟು ಚರ್ಚೆ ಸಹ ನಡೆಯುತ್ತಿದೆ. ಆದರೆ ಜೋಶಿ ಮಾತ್ರ ಯಾವುದಕ್ಕೂ ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ.

    ಸಿಎಂ ಹೇಳಿದ್ದೇನು?:
    ತಾವು ರಾಜೀನಾಮೆ ನೀಡುವ ಕುರಿತು ಪ್ರತಿಕ್ರಿಯಿಸಿದ ಸಿಎಂ, ಕೋವಿಡ್, ಪ್ರವಾಹ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಬೇಡ ಎಂಬ ರೀತಿಯಲ್ಲಿ ಪರೋಕ್ಷವಾಗಿ ಮುಖ್ಯಮಂತ್ರಿಗಳು ಕಾದು ನೋಡೋಣ ಅಂತಾ ಹೇಳಿದರು. ನಾಳೆ ಸಾಧ್ಯವಾದರೆ ಮಧ್ಯಾಹ್ನದ ಬಳಿಕ ಕಾರವಾರಕ್ಕೆ ಭೇಟಿ ನೀಡುವೆ. ಕೇಂದ್ರ ಸರ್ಕಾರ ಏನೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧನಿದ್ದೇನೆ. ಚುನಾವಣೆಗೆ ಒಂದು ಮುಕ್ಕಾಲು ವರ್ಷ ಇದೆ. ಹಾಗಾಗಿ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ. ನೂರು ಸಿದ್ದರಾಮಯ್ಯ ಬಂದ್ರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಬರಲಿದೆ ಎಂದು ಭವಿಷ್ಯ ನುಡಿದರು.

    ಇದೇ ವೇಳೆ ಮಾಜಿ ಸಚಿವ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್‍ವೈ, ನಮ್ಮ ರಾಜ್ಯದಲ್ಲಿ ಬೇರೆ ಯಾರಿಗೂ ಸಿಗದ ಸ್ಥಾನಮಾನ ನನಗೆ ಸಿಕ್ಕಿದೆ. ಅದಕ್ಕಾಗಿ ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಅವರಿಗೆ ವಂದನೆ ಸಲ್ಲಿಸುವೆ. ಪಕ್ಷದಲ್ಲಿ ನಾವೆಲ್ಲರೂ ಕಾರ್ಯಕರ್ತರಾಗಿದ್ದು, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದು ಹೇಳಿದರು. ಇನ್ನೂ ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ, ಕಾದು ನೋಡೋಣ ಎಂದು ಮೂರು ಬಾರಿ ಹೇಳಿ ಹೊರಟರು.

  • ಯಡಿಯೂರಪ್ಪನವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ, ಯಾವುದೇ ರಾಜಕೀಯ ಬೆಳವಣಿಗೆ ಇಲ್ಲ: ನಡ್ಡಾ

    ಯಡಿಯೂರಪ್ಪನವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ, ಯಾವುದೇ ರಾಜಕೀಯ ಬೆಳವಣಿಗೆ ಇಲ್ಲ: ನಡ್ಡಾ

    ಪಣಜಿ: ರಾಜ್ಯದಲ್ಲಿ ನಾಯತ್ವ ಬದಲಾವಣೆ ಕುರಿತು ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅಚ್ಚರಿಯ ಹೇಳಿಕೆ ನೀಡಿದ್ದು, ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ರಾಜಕೀಯ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಈ ಕುರಿತು ಗೋವಾದಲ್ಲಿ ಮಾತನಾಡಿರುವ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಅವರ ನಾಯಕತ್ವದದಲ್ಲಿ ಸರ್ಕಾರ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಎಲ್ಲವನ್ನೂ ನಾವು ನೋಡುತ್ತಿದ್ದೇವೆ. ರಾಜಕೀಯ ಬೆಳವಣಿಗೆ ಹಾಗೂ ನಾಯತ್ವ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಯುತ್ತಿಲ್ಲ ಎಂದು ತಿಳಿಸಿದ್ದಾರೆ.

    ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಮುರುಗೇಶ್ ನಿರಾಣಿಯವರು ದೆಹಲಿಗೆ ಹಾರಿದ್ದು, ಇತ್ತ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಬೆಂಗಳೂರಿನಲ್ಲಿದ್ದರೂ ಅಜ್ಞಾತ ಸ್ಥಳದಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಇದಾವುದರ ಬಗ್ಗೆಯೂ ತಲೆ ಕೆಡಿಸಿಕೊಳ್ಳದ ಸಿಎಂ, ಬೆಳಗಾವಿಯ ಪ್ರವಾಹ ಪೀಡಿತ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಪರೋಕ್ಷವಾಗಿ ಹೈಕಮಾಂಡ್‍ಗೆ ಶಾಕ್ ನೀಡಿದ್ರಾ ಅನ್ನೋ ಪ್ರಶ್ನೆ ಮುನ್ನಲೆಗೆ ಬಂದಿದೆ. ಇಂದು ಮೂರು ಬಾರಿ ಒಂದೇ ಹೇಳಿಕೆ ನೀಡಿರುವ ಸಿಎಂ ಬಿಎಸ್‍ವೈ, ಕಾದು ನೋಡೋಣ ಅಂತ ಹೇಳುವ ಮೂಲಕ ಹೈಕಮಾಂಡ್‍ಗೆ ಸಂದೇಶ ರವಾನಿಸಿದ್ರಾ ಎಂಬ ಚರ್ಚೆಗಳು ಕಮಲ ಪಾಳಯದಲ್ಲಿ ಆರಂಭಗೊಂಡಿವೆ.

    ಕಾದು ನೋಡೋಣ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ನಮ್ಮ ಪರವಾಗಿದ್ದಾರೆ. ನಮ್ಮ ಅಭಿಮಾನಿಗಳು ಯಾರೂ ಆತಂಕಕ್ಕೊಳಗಾಗಬಾರದು ಎಂದು ಧೈರ್ಯ ತುಂಬಿದ್ದಾರೆ. ಸಿಎಂ ಈ ಹೇಳಿಕೆ ಬಿಜೆಪಿ ಪಾಳಯದಲ್ಲಿ ಅಚ್ಚರಿ ಮೂಡಿಸಿದೆ.

  • ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆಗಳ ಪ್ರಗತಿ ಪರಿಶೀಲಿಸಿದ ಸಿಎಂ

    ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆಗಳ ಪ್ರಗತಿ ಪರಿಶೀಲಿಸಿದ ಸಿಎಂ

    ಬೆಂಗಳೂರು: ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.

    ಎತ್ತಿನಹೊಳೆ ಯೋಜನೆಯಲ್ಲಿ ಈ ವರೆಗೆ 9003.86 ಕೋಟಿ ರೂ. ವೆಚ್ಚವಾಗಿದ್ದು, ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ವ್ಯಾಲಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಅಲ್ಲದೆ ಎತ್ತಿನಹೊಳೆ ಯೋಜನೆಯು ಏಳು ಜಿಲ್ಲೆಯ 29 ತಾಲೂಕುಗಳ 6,557 ಗ್ರಾಮಗಳ 68 ಲಕ್ಷಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರು ಒದಗಿಸಲಿದೆ ಎಂದು ವಿವರಿಸಿದರು.

    ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕ ಚರ್ಚಿಸಲಾಗಿದ್ದು, ಶೀಘ್ರ ಅನುಮೋದನೆ ನೀಡಲು ಕೋರಲಾಗಿದೆ. ಅಗತ್ಯ ಬಿದ್ದರೆ ಕೇಂದ್ರ ಸಚಿವರನ್ನು ಖುದ್ದು ಭೇಟಿ ಮಾಡಿ ಮಂಜೂರಾತಿಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

    ಈ ಯೋಜನೆಯಡಿ ಕಳೆದೆರಡು ವರ್ಷಗಳಲ್ಲಿ 2362.62 ಕೋಟಿ ರೂ.ಗಳ ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದ್ದು, ಯೋಜನೆಯಿಂದ ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಅನುಕೂಲವಾಗಲಿದೆ. ನೀರಾವರಿ ಯೋಜನೆಗಳನ್ನು ಯಾವುದೇ ಲೋಪವಿಲ್ಲದಂತೆ ಅನುಷ್ಠಾನಗೊಳಿಸಬೇಕು. ಯಾವುದೇ ಲೋಪದೋಷಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಸಿಎಂ ಎಚ್ಚರಿಸಿದರು.

    ಸಭೆಯಲ್ಲಿ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

  • 15 ದಿನ ರ‍್ಯಾಲಿ, ಪ್ರತಿಭಟನೆ, ಧಾರ್ಮಿಕ ಕಾರ್ಯಕ್ರಮಗಳು ಬಂದ್, ಲಾಕ್‍ಡೌನ್, ನೈಟ್ ಕರ್ಫ್ಯೂ ಇಲ್ಲ: ಸಿಎಂ

    15 ದಿನ ರ‍್ಯಾಲಿ, ಪ್ರತಿಭಟನೆ, ಧಾರ್ಮಿಕ ಕಾರ್ಯಕ್ರಮಗಳು ಬಂದ್, ಲಾಕ್‍ಡೌನ್, ನೈಟ್ ಕರ್ಫ್ಯೂ ಇಲ್ಲ: ಸಿಎಂ

    – ಅಪಾರ್ಟ್‍ಮೆಂಟ್‍ನ ಕಾಮನ್ ಏರಿಯಾ, ಸ್ವಿಮ್ಮಿಂಗ್ ಪೂಲ್ ಬಂದ್

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಪ್ರತಿಭಟನೆ, ರ‍್ಯಾಲಿ, ಧಾರ್ಮಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ.

    ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೋವಿಡ್ 19 ಪ್ರಕರಣ ಹೆಚ್ಚಳದ ಬಗ್ಗೆ ಎರಡು ಗಂಟೆಗಳ ಕಾಲ ತಜ್ಞರು, ಸಚಿವರು, ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗಿದೆ. ಮುಂದಿನ 15 ದಿನಗಳ ಕಾಲ ರ‍್ಯಾಲಿ, ಪ್ರತಿಭಟನೆ, ಚಳುವಳಿಗಳಿಗೆ ನಿಷೇಧ ಹೇರಲಾಗಿದೆ. ಮೇಳ, ಧಾರ್ಮಿಕ ಕಾರ್ಯಕ್ರಮ, ಅಪಾರ್ಟ್‍ಮೆಂಟ್‍ನ ಕಾಮನ್ ಏರಿಯಾ ಚಟುವಟಿಕೆಯನ್ನು ಸಹ ನಿಷೇಧಿಸಲು ಸೂಚನೆ ನೀಡಲಾಗಿದೆ. ಅಲ್ಲದೆ ಸ್ವಿಮ್ಮಿಂಗ್ ಪೂಲ್ ಬಂದ್ ಮಾಡಲಾಗಿದ್ದು, ಕ್ಲಬ್ ಗಳಲ್ಲಿ ಹಲವು ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದರು.

    ಯಾವುದೇ ರೀತಿಯ ಲಾಕ್‍ಡೌನ್, ನೈಟ್ ಕರ್ಫ್ಯೂ ವಿಧಿಸುವುದಿಲ್ಲ. ನಾಳೆಯಿಂದ ಮಾಸ್ಕ್ ಹಾಕದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಶಾಲೆಗಳಿಗೆ ಯಾವುದೇ ನಿರ್ಬಂಧ ಹೇರಿಲ್ಲ, ತೆರೆದಿರುತ್ತವೆ. ಆದರೆ 1 ರಿಂದ 9ನೇ ತರಗತಿವರೆಗೆ ಕಡ್ಡಾಯವಾಗಿ ಪಾಸ್ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿ ಪತ್ರ ಬರೆದಿದ್ದಾರೆ. ಅವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.

    ಕೋವಿಡ್ ನಿರ್ವಹಣೆಗೆ ಅನುದಾನದ ಕೊರತೆ ಇಲ್ಲ. ಈಗಾಗಲೇ 150 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅಗತ್ಯ ಬಿದ್ದಲ್ಲಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು. ನಗರದಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ನಿರ್ವಹಿಸಲು ಸರ್ಕಾರ, ಬಿಬಿಎಂಪಿ ಎಲ್ಲ ರೀತಿಯಲ್ಲೂ ಸಜ್ಜಾಗಿದ್ದು, ಈಗಾಗಲೇ ಹೆಚ್.ಎ.ಎಲ್. ಮತ್ತು ಹಜ್ ಭವನಗಳಲ್ಲಿ ತಲಾ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲಾಗಿದೆ. ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಸಹ 250 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಏಪ್ರಿಲ್ 5ರಿಂದ ಆರಂಭವಾಗಲಿದೆ. ಸ್ಲಂಗಳಲ್ಲಿ ಕೋವಿಡ್ ಸಂಖ್ಯೆ ವಿರಳವಾಗಿರುವುದು ಸಮಾಧಾನದ ಸಂಗತಿಯಾಗಿದೆ. ಅಪಾರ್ಟ್‍ಮೆಂಟ್‍ಗಳಲ್ಲಿ ಕೋವಿಡ್ ಸಂಖ್ಯೆ ಹೆಚ್ಚಳವಾಗಿದೆ ಎಂದು ತಿಳಿಸಿದರು.

    ಬೆಂಗಳೂರಲ್ಲಿ ಫೆಬ್ರವರಿಯಲ್ಲಿ ಸೋಂಕಿತರ ಪ್ರಮಾಣ ಶೇ.0.94 ಇತ್ತು ಮಾರ್ಚ್ ನಲ್ಲಿ ಶೇ.1.94 ಕ್ಕೆ ಹೆಚ್ಚಿದೆ. ಪ್ರಸ್ತುತ 15,882 ಸಕ್ರಿಯ ಪ್ರಕರಣಗಳಿದ್ದು, ಈ ವರೆಗೆ 6.61 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ನಿಗದಿತ ಗುರಿಗಿಂತ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಶೇ.90ಕ್ಕೂ ಹೆಚ್ಚು ಆರ್ ಟಿಪಿಸಿಆರ್ ಪರೀಕ್ಷೆಗಳನ್ನೇ ನಡೆಸಲಾಗುತ್ತಿದೆ. ಕೋವಿಡ್ ಪರೀಕ್ಷೆ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಪ್ರತಿ ವಾರ್ಡಿನಲ್ಲಿ 2 ಮೊಬೈಲ್ ಮತ್ತು 1 ಸ್ಟಾಟಿಕ್ ತಂಡಗಳನ್ನು ನಿಯೋಜಿಸಲಾಗಿದೆ. ಸಂಪರ್ಕಿತರ ಪತ್ತೆಗೆ ಕಂದಾಯ, ಶಿಕ್ಷಣ ಇಲಾಖೆ ಸಿಬ್ಬಂದಿಯನ್ನೂ ಬಳಸಿಕೊಳ್ಳಲಾಗುತ್ತಿದೆ. ಸಂಪರ್ಕಿತರ ಪತ್ತೆಯ ಗುರಿಯನ್ನು ಸಹ 30ಕ್ಕೆ ಹೆಚ್ಚಿಸಲು ಸೂಚಿಸಲಾಗಿದೆ ಎಂದರು.

    ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ 1,166 ಬೆಡ್‍ಗಳನ್ನು ಮೀಸಲಿಡಲಾಗಿದ್ದು, ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಹಾಸಿಗೆಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು. ಖಾಸಗಿ ಆಸ್ಪತ್ರೆಗಳೂ ಸಹಕರಿಸುವಂತೆ ಹಾಗೂ ಕೋವಿಡ್ ಚಿಕಿತ್ಸೆಗೆ ಹಾಸಿಗೆಗಳನ್ನು ಒದಗಿಸಲು ಸಿದ್ಧರಿರುವಂತೆ ತಿಳಿಸಲಾಗಿದೆ. ಬಿಬಿಎಂಪಿ ಎಂಟು ವಲಯಗಳಿಗೆ ಹಿರಿಯ ಅಧಿಕಾರಿಗಳನ್ನು ಈಗಾಗಲೇ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ಪರೀಕ್ಷೆ ನೆಗೆಟಿವ್ ವರದಿ ಕಡ್ಡಾಯವಾಗಿದ್ದು, ಪ್ರಯಾಣಿಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾರ್ವಜನಿಕರು ಜಾಗೃತರಾಗಿ, ಮಾಸ್ಕ್, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಇತರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ತಡೆಗಟ್ಟಿ. ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು. ಎಲ್ಲ ಅರ್ಹ ನಾಗರಿಕರೂ ಲಸಿಕೆ ಹಾಕಿಸಿಕೊಳ್ಳಬೇಕು. ಶಿಕ್ಷಕರಿಗೂ ಕೋವಿಡ್ ಲಸಿಕೆ ಹಾಕಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ತಿಳಿಸಿದರು.

  • ಉಲ್ಟಾ ಹೊಡೆದ ಸಿಎಂ – ಪಂಚಮಸಾಲಿ 2ಎ ಮೀಸಲಾತಿ ಸಮಗ್ರ ಅಧ್ಯಯನಕ್ಕೆ ಸೂಚನೆ

    ಉಲ್ಟಾ ಹೊಡೆದ ಸಿಎಂ – ಪಂಚಮಸಾಲಿ 2ಎ ಮೀಸಲಾತಿ ಸಮಗ್ರ ಅಧ್ಯಯನಕ್ಕೆ ಸೂಚನೆ

    ಬೆಂಗಳೂರು: ಪಂಚಮಸಾಲಿ ಜನಾಂಗವನ್ನು ಹಿಂದುಳಿದ ವರ್ಗ 2ಎ ಮೀಸಲಾತಿಗೆ ಒಳಪಡಿಸುವ ಕುರಿತು ಸಮಗ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ.

    ನಮ್ಮದು ರಾಷ್ಟ್ರೀಯ ಪಕ್ಷ, ಕೇಂದ್ರ ನಾಯಕರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಬೆಳಗ್ಗೆಯಷ್ಟೇ ಸದನದಲ್ಲಿ ಹೇಳಿದ್ದ ಸಿಎಂ ಇದೀಗ ರಾತ್ರಿ ಆಗುತ್ತಿದ್ದಂತೆ ಉಲ್ಟಾ ಹೊಡೆದಿದ್ದಾರೆ. ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂಗದವರು ತಮ್ಮ ಸಮಾಜ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಔದ್ಯೋಗಿಕವಾಗಿ ಹಿಂದುಳಿದಿದೆ ಮತ್ತು ಸಮಾಜದ ಕಡುಬಡವರಿಗೆ ತೊಂದರೆಯಾಗುವುದರಿಂದ ಸಮಾಜವನ್ನು ಹಿಂದುಳಿದ ವರ್ಗ 2ಎ ಮೀಸಲಾತಿಗೆ ಒಳಪಡಿಸಬೇಕೆಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಿ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನಿಡಿದ್ದಾರೆ.

    ಬೆಳಗ್ಗೆಯಷ್ಟೇ ವಿಧಾನಸಭೆಯಲ್ಲಿ ನಮ್ಮದು ರಾಷ್ಟ್ರೀಯ ಪಕ್ಷ ಎಂದು ಕೇಂದ್ರ ನಾಯಕರ ಮೇಲೆ ಬೊಟ್ಟು ಮಾಡಿದ್ದ ಯಡಿಯೂರಪ್ಪ, ಇದೀಗ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ರಾತ್ರಿ ಆದೇಶ ಹೊರಡಿಸಿದ್ದಾರೆ.

    ಈ ಕುರಿತು ಸ್ಪಷ್ಟೀಕರಣ ನೀಡಿರುವ ಸಿಎಂ, ಅಧಿವೇಶನದಲ್ಲಿ ನನ್ನ ಹೇಳಿಕೆಯನ್ನು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಅಪಾರ್ಥ ಮಾಡಿಕೊಂಡಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ನಾನು ಈಗಾಗಲೇ ಸಮಾಜದ ಸಚಿವರಾದ ಮುರುಗೇಶ್ ನಿರಾಣಿ, ಸಿ.ಸಿ.ಪಾಟೀಲ್ ಮತ್ತು ಶಾಸಕರ ಜೊತೆ ಚರ್ಚಿಸಿದ್ದೇನೆ. ಬಳಿಕ ಸಮಾಜದ ಇಬ್ಬರು ಸ್ವಾಮೀಜಿಗಳನ್ನು ಭೇಟಿ ಮಾಡಿ ಮನವರಿಕೆ ಮಾಡುವಂತೆ ಫೆ.4ರಂದು ಕಳುಹಿಸಿದ್ದೆ ಎಂದು ತಿಳಿಸಿದ್ದಾರೆ.

    ಪಂಚಮಸಾಲಿ ಸಮಾಜವನ್ನು 2ಎ ಮೀಸಲಾತಿಗೆ ಸೇರಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ವಿಷಯ ನೀಡಿ ಅಧ್ಯಯನ ಮಾಡಿ, ವರದಿ ಸಲ್ಲಿಸಲು ಕೋರಲಾಗಿದೆ. ನಾನು ಅಧಿವೇಶನದಲ್ಲಿ ಹೇಳಿದ್ದು, ನಮ್ಮದು ರಾಷ್ಟ್ರೀಯ ಪಕ್ಷ, ಸಂಸತ್ ಸದಸ್ಯರ ಜೊತೆ ಚರ್ಚಿಸಿ, ರಾಷ್ಟ್ರೀಯ ನಾಯಕರೊಂದಿಗೆ ವಿಷಯ ಮನವರಿಕೆ ಮಾಡಿಕೊಡಬೇಕು. ನಮ್ಮ ಸರ್ಕಾರ ಈ ಹಿಂದೆ ಪಂಚಮಸಾಲಿ ಸಮಾಜವನ್ನು 3ಬಿಗೆ ಸೇರಿಸುವುದನ್ನು ನೆನಪಿಸಿಕೊಳ್ಳಬಹುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ರಾಜ್ಯದ ಮುಖ್ಯಮಂತ್ರಿಯಾಗಿ ಎಲ್ಲ ಸಮುದಾಯಗಳ ಒಳಿತಿಗೆ ನಾನು ಬದ್ಧನಾಗಿದ್ದೇನೆ. ಇಂತಹ ಗಂಭೀರ ವಿಷಯಗಳ ಬಗ್ಗೆ ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳದೆ, ತಜ್ಞರೊಂದಿಗೆ ಸಮಗ್ರವಾಗಿ ಚರ್ಚಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯಬೇಕು ಎಂದು ವಿವರಿಸಿದ್ದಾರೆ.

  • ಹುಣಸೋಡು ಸ್ಫೋಟ ಪ್ರಕರಣ- 150ಕ್ಕೂ ಹೆಚ್ಚು ಮನೆಗಳಿಗೆ ಹಾನಿ

    ಹುಣಸೋಡು ಸ್ಫೋಟ ಪ್ರಕರಣ- 150ಕ್ಕೂ ಹೆಚ್ಚು ಮನೆಗಳಿಗೆ ಹಾನಿ

    – 7 ಗ್ರಾಮದ 1,422 ಕುಟುಂಬಗಳಿಗೆ ತೊಂದರೆ
    – 7 ಗ್ರಾಮಗಳಲ್ಲಿ ಕ್ರಷರ್ ಗಳದ್ದೇ ಸಾಮ್ರಾಜ್ಯ

    ಶಿವಮೊಗ್ಗ: ಜಿಲ್ಲೆಯಲ್ಲಿ ಸಂಭವಿಸಿದ ಬ್ಲಾಸ್ಟ್ ನಿಂದಾಗಿ ಭಾರೀ ಪ್ರಮಾಣದ ಹಾನಿ ಸಂಭವಿಸಿದ್ದು, ಹಲವು ಕಾರ್ಮಿಕರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸದ್ಯ ಐವರ ಮೃತದೇಹಗಳು ಪತ್ತೆಯಾಗಿವೆ. ಸ್ಫೋಟದಿಂದ ಜೀವ ಹಾನಿ ಜೊತೆಗೆ ಆಸ್ತಿ ಪಾಸ್ತಿ ಸಹ ಹಾನಿಯಾಗಿದ್ದು, 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಅಲ್ಲದೆ 1,422 ಕುಟುಂಬಗಳಿಗೆ ತೊಂದರೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಶಿವಮೊಗ್ಗದ ಹುಣಸೋಡು ಗ್ರಾಮದ ಬಳಿ ಭೀಕರ ಸ್ಫೋಟ ಸಂಭವಿಸಿದ್ದು, ಜಿಲ್ಲೆಯ ಅಬ್ಬಲೆಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹೂಣಸೊಂಡ, ಬಸವನಗಂಗೂರು, ಕಲ್ಲುಗಂಗೂರು, ಅಬ್ಬಲಗೆರೆಯಲ್ಲಿ 150 ಕ್ಕು ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಅಬ್ಬಲಗೆರೆ ಸೇರಿ ಒಟ್ಟು 7 ಗ್ರಾಮಗಳಲ್ಲಿ ಕ್ರಷರ್ ಗಳದ್ದೇ ಸಾಮ್ರಾಜ್ಯ ಎನ್ನುವಂತಾಗಿದ್ದು, ಹೂಣಸೊಂಡದಲ್ಲಿ ಆಪಾರ ಪ್ರಮಾಣದ ಹಾನಿ ಸಂಭವಿಸಿದೆ.

    ಕಲ್ಲುಗಂಗೂರು ಗ್ರಾಮದಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ತಗಡಿನ ಶೀಟ್, ಸಿಮೆಂಟ್ ಶೀಟ್ ಹಾಗೂ ಹೆಂಚಿನ ಮನಗೆಳನ್ನು ರಿಪೇರಿ ಮಾಡಲೇಬೇಕು ಎನ್ನುವಷ್ಟರಮಟ್ಟಿಗೆ ಹಾನಿಯಾಗಿವೆ. ಮುರಿದ, ಬಿರುಕು ಬಿಟ್ಟ ಮನೆಗಳಲ್ಲಿ ಭೀತಿಯಲ್ಲೇ ಜನ ವಾಸ ಮಾಡುವ ಅನಿವಾರ್ಯತೆ ಎದುರಾಗಿದೆ. 7 ಗ್ರಾಮದ 1,422 ಕುಟುಂಬಗಳಿಗೆ ಒಂದಲ್ಲ ಒಂದು ರೀತಿಯಲ್ಲಿ ತೊಂದರೆಯಾಗಿದೆ ಎಂದು ಅಂದಾಜಿಸಲಾಗಿದೆ.

    ಇದೀಗ ಅನಧಿಕೃತ ಗಣಿಗಾರಿಕೆಗಳಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಜೆಲ್ ಸ್ಫೋಟಕ ಎಲ್ಲಿಂದ ಬಂತು, ಅದನ್ನು ಎಲ್ಲಿ ಸ್ಟೋರ್ ಮಾಡುತ್ತಾರೆ ಎಂಬುದನ್ನು ಅಧಿಕಾರಿಗಳು ಪತ್ತೆಹಚ್ಚುತ್ತಿದ್ದಾರೆ. ಅಭಿವೃದ್ಧಿ ಕೆಲಸಗಳಿಗೆ ಜಲ್ಲಿ, ಮರಳು ಬೇಕು. ಅದನ್ನು ಕಾನೂನಾತ್ಮಕವಾಗಿ ಮಾಡಬೇಕು ಎಂಬ ಬಗ್ಗೆ ಚಿಂತಿಸುತ್ತಿದ್ದೇವೆ. ನಮ್ಮ ಸರ್ಕಾರದಲ್ಲಿ ಗಣಿ ಇಲಾಖೆ ಸೇರಿ ಯಾವುದೇ ಇಲಾಖೆಯಲ್ಲಿ ಕಾನೂನು ಚೌಕಟ್ಟು ಮೀರಿ ಕೆಲಸ ಮಾಡಿದ್ದರೆ, ಯಾರೇ ತಪ್ಪು ಮಾಡಿದ್ದರೂ ಅದರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅಲ್ಲದೆ ಉನ್ನತ ಮಟ್ಟದ ತನಿಖೆ ನಡೆಸಲು ಸಿಎಂ ಸಮಿತಿ ರಚನೆ ಮಾಡಿದ್ದಾರೆ.

    ಈ ಬಗ್ಗೆ ಹುಣಸೋಡಿನಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಇಂತಹ ದುರ್ಘಟನೆ ನಡೆಯಬಾರದಿತ್ತು. ನಡೆದು ಹೋಗಿದೆ. ಘಟನೆಯಲ್ಲಿ 5 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಒಂದು ಸಂಶಯಾಸ್ಪದ ಇದೆ. ರಾಜ್ಯದಲ್ಲಿನ ಎಲ್ಲ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲಾಗುವುದು. ಈ ಬಗ್ಗೆ ತನಿಖೆ ನಡೆಸಲು ಶೀಘ್ರವಾಗಿ ಸಮಿತಿ ರಚಿಸಲಾಗುವುದು. ಹುಣಸೋಡು ಘಟನೆ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಈ ರೀತಿ ಘಟನೆ ರಾಜ್ಯದಲ್ಲಿ ಇನ್ನು ಎಲ್ಲಿಯೂ ನಡೆಯಬಾರದು. ಮೃತ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರವನ್ನು ಸಿಎಂ ಘೋಷಣೆ ಮಾಡಿದ್ದಾರೆ ಎಂದರು.

  • ನಾಲ್ಕೈದು ವಾರಗಳಲ್ಲಿ ಕೊರೊನಾ ಲಸಿಕೆ: ಸಿಎಂ ಬಿಎಸ್‍ವೈ

    ನಾಲ್ಕೈದು ವಾರಗಳಲ್ಲಿ ಕೊರೊನಾ ಲಸಿಕೆ: ಸಿಎಂ ಬಿಎಸ್‍ವೈ

    ಮೈಸೂರು: ಇನ್ನು ನಾಲ್ಕು ವಾರಗಳಲ್ಲಿ ಕೊರೊನಾ ಲಸಿಕೆ ಬರಬಹುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

    ಮೈಸೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇನ್ನು ನಾಲ್ಕೈದು ವಾರಗಳಲ್ಲಿ ಕೊರೊನಾ ಲಸಿಕೆ ಬರಲಿದೆ. ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಹಲವು ರಾಜ್ಯಗಳ ಸಿಎಂ ಸಭೆ ಕರೆದಿದ್ದರು. ಕೊರೊನಾ ಲಸಿಕೆ ವಿಚಾರವಾಗಿಯೇ ಚರ್ಚೆ ನಡೆಸಲಾಗಿದೆ. ಅಲ್ಲದೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸಹ ಹೇಳಿದ್ದಾರೆ. ಇದೇ ವೇಳೆ ನಾಲ್ಕು ವಾರಗಳಲ್ಲಿ ಕೊರೊನಾ ಲಸಿಕೆ ಬರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ ಎಂದರು.

    ಲಸಿಕೆಗೆ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದರು. ನಾವು ಸಹ ಜಿಲ್ಲಾ ಮಟ್ಟದಲ್ಲಿ ಲಸಿಕೆ ಹಂಚಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅದಕ್ಕೆ ಬೇಕಾದ ತಯಾರಿ ನಡೆದಿದೆ. ದೊಡ್ಡ ಮಟ್ಟದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

    ಕೊರೊನಾ ಲಸಿಕೆ ವಿತರಣೆಯ ತಯಾರಿ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ರಾಜ್ಯಗಳ ಸಿಎಂಗಳ ಜೊತೆ ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದ ಬಳಿಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಈ ಕುರಿತು ವಿವರಿಸಿದ್ದಾರೆ. ಸಭೆಯಲ್ಲಿ ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್ ಅವರು ಭಾಗವಹಿಸಿ ಲಸಿಕೆ ಬಗ್ಗೆ ಮಾಹಿತಿ ನೀಡಿದರು. ಯಾವ್ಯಾವ ದೇಶಗಳಲ್ಲಿ ಲಸಿಕೆ ತಯಾರಿಕೆ ಸ್ಥಿತಿ ಯಾವ ಹಂತದಲ್ಲಿದೆ ಎಂಬ ಬಗ್ಗೆ ತಿಳಿಸಿದರು. ಇಡೀ ವಿಶ್ವದಲ್ಲಿ ಹಲವು ಕಡೆ ಲಸಿಕೆ ತಯಾರಾಗುತ್ತಿದೆ. ಈ ಪೈಕಿ ನಮ್ಮ ದೇಶದಲ್ಲಿ 50 ಲಸಿಕೆಗಳು ಕ್ಲಿನಿಕಲ್ ಸಂಶೋಧನೆಗಳ ಹಂತದಲ್ಲಿವೆ. 25 ಲಸಿಕೆಗಳು ಅಡ್ವಾನ್ಸ್ ಟ್ರಯಲ್ ನಲ್ಲಿವೆ. 5 ಲಸಿಕೆಗಳು ಕ್ಲಿನಿಕಲ್ ಟ್ರಯಲ್ ಹಂತದಲ್ಲಿವೆ. ಭಾರತದಲ್ಲಿ ಒಟ್ಟು 24 ಸಂಸ್ಥೆಗಳಿಗೆ ಲಸಿಕೆ ತಯಾರಿಸುವ ಸಾಮರ್ಥ್ಯ ಇದೆ ಎಂಬ ಮಾಹಿತಿ ನೀಡಿದರು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

    30 ಕೋಟಿ ಜನರಿಗೆ ಲಸಿಕೆ:
    ಲಸಿಕೆ ಬರುವಾಗ ಸರಿಯಾದ ರೀತಿಯಲ್ಲಿ ವಿತರಣೆಗೆ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಯಿತು. ಅದ್ಯತೆ ಮೇರೆಗೆ ವಿತರಣೆ ಬಗ್ಗೆ ಸಭೆಯಲ್ಲಿ ಹೇಳಲಾಯಿತು. ದೇಶದಲ್ಲಿ ಆರಂಭಿಕವಾಗಿ 30 ಕೋಟಿ ಜನರಿಗೆ ಕೋವಿಡ್ ಲಸಿಕೆ ಹಂಚುವ ಉದ್ದೇಶ ಹೊಂದಲಾಗಿದೆ. ಈ ಪೈಕಿ 1 ಕೋಟಿ ಆರೋಗ್ಯ ಕಾರ್ಯಕರ್ತರಿಗೆ, 2 ಕೋಟಿ ಕೊರೊನಾ ವಾರಿಯರ್ಸ್‍ಗೆ ಹಾಗೂ 26 ಕೋಟಿ 50, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ ಎಂದು ವಿವರಿಸಿದ್ದಾರೆ.

    ಬೂತ್ ಮಾದರಿಯಲ್ಲಿ ಹಂಚಿಕೆ:
    ಲಸಿಕೆ ವಿತರಣೆಗೆ ರಾಜ್ಯದಲ್ಲಿ ಮೂರು ಸಮಿತಿಗಳ ರಚನೆಗೆ ನಿರ್ಧರಿಸಲಾಗಿದ್ದು, ಸಿಎಂ ನೇತೃತ್ವದಲ್ಲಿ, ಡಿಸಿಗಳ ನೇತೃತ್ವದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಸಮಿತಿಗಳ ರಚನೆಗೆ ನಿರ್ಧಾರಿಸಲಾಗಿದೆ. ಲಸಿಕೆ ಹಂಚಿಕೆಗೆ ಬೂತ್ ಗಳನ್ನು ರಚನೆ ಮಾಡಲಾಗುತ್ತಿದ್ದು, ಚುನಾವಣಾ ಬೂತ್ ಗಳ ಮಾದರಿಯಲ್ಲಿ ವಿತರಣೆ ಕೇಂದ್ರಗಳನ್ನು ರಚಿಸಲಾಗುತ್ತಿದೆ. ಅಲ್ಲದೆ ಕೊರೊನಾ ಲಸಿಕೆ ಕೊಟ್ಟ ಬಳಿಕ ಟ್ರ್ಯಾಕ್ ರಿಪೋರ್ಟ್ ಸಂಗ್ರಹಕ್ಕೆ ಸಹ ಸೂಚಿಸಲಾಗುತ್ತದೆ. ಲಸಿಕೆಯ ಡೋಸ್ ಕೊಟ್ಟ ವ್ಯಕ್ತಿಗಳ ಟ್ರ್ಯಾಕ್ ರಿಪೋರ್ಟ್ ಸಂಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸೂಚಿಸಿದ್ದಾರೆ ಎಂದು ಮಾಹಿತಿ ನೀದ್ದಾರೆ.

     

  • ಕೇವಲ 23 ನಿಮಿಷದಲ್ಲಿ ವಿಶ್ವ ವಿಖ್ಯಾತ ಜಂಬೂ ಸವಾರಿ ಮುಕ್ತಾಯ

    ಕೇವಲ 23 ನಿಮಿಷದಲ್ಲಿ ವಿಶ್ವ ವಿಖ್ಯಾತ ಜಂಬೂ ಸವಾರಿ ಮುಕ್ತಾಯ

    – 500 ಮೀ. ಮಾತ್ರ ಸಾಗಿದ ಜಂಬೂ ಸವಾರಿ

    ಮೈಸೂರು: ಕೊರೊನಾ ಹಿನ್ನೆಲೆ ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ಸರಳವಾಗಿ ಆಚರಿಸಲಾಗಿದ್ದು, ಕೇವಲ 23 ನಿಮಿಷಗಳಲ್ಲಿ ಜಂಬೂ ಸವಾರಿ ಮುಕ್ತಾಯಗೊಂಡಿದೆ.

    ಪ್ರತಿ ವರ್ಷ ವಿಜೃಂಭಣೆಯಿಂದ ಗಂಟೆಗಟ್ಟಲೇ ನಡೆಯುತ್ತಿದ್ದ ಮೈಸೂರು ದಸರಾದ ಜಂಬೂ ಸವಾರಿ ಈ ಬಾರಿ ಕೇವಲ 23 ನಿಮಿಷಕ್ಕೆ ಮುಕ್ತಾಯವಾಯಿತು. ಮಧ್ಯಾಹ್ನ 3.21ಕ್ಕೆ ಕುಂಬ ಲಗ್ನದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು. ಅರಮನೆ ಆವರಣದಲ್ಲೇ ಜಂಬೂ ಸವಾರಿ ನೆರವೇರಿಸಲಾಗಿದ್ದು, ಕೇವಲ 500 ಮೀಟರ್ ಮಾತ್ರ ನಡೆಸಲಾಗಿದೆ.

    750 ಕೆ.ಜಿ. ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿಯನ್ನು ಮೆರವಣಿಗೆ ಮಾಡಲಾಯಿತು. ಕೇವಲ 500 ಮೀಟರ್ ಸಾಗಿದ ಜಂಬೂ ಸವಾರಿ, ಬಲರಾಮ ದ್ವಾರದ ಬಳಿ ಮುಕ್ತಾಯಗೊಂಡಿತು.

    ಪ್ರತಿ ವರ್ಷ ಸಂಭ್ರಮದಿಂದ ದಸರಾ ಆಚರಿಸಲಾಗುತ್ತಿತ್ತು. ವಿವಿಧ ಜಿಲ್ಲೆ, ರಾಜ್ಯಗಳಿಂದ ಸಾಂಸ್ಕೃತಿಕ ತಂಡಗಳ ಕಲಾವಿದರು ಆಗಮಿಸಿ ವಿವಿಧ ಕಲೆ ಪ್ರದರ್ಶಿಸುತ್ತಿದ್ದರು. ಆದರೆ ಈ ಬಾರಿ ಕೇವಲ ಕೊರೊನಾ ಜಾಗೃತಿ, ಅರಮನೆ ವಾದ್ಯಗೋಷ್ಠಿ, 2 ಟ್ಯಾಬ್ಲೋ, ಚಂಡೆಮೇಳ, ವೀರಗಾಸೆ, ಮರಗೋಲು ಸೇರಿದಂತೆ ಇತರ ಕೆಲವು ಕಲಾ ಮೇಳಗಳಷ್ಟೇ ಭಾಗವಹಿಸಿದ್ದವು.

    ಜಂಬೂ ಸವಾರಿ ಹೆಚ್ಚು ಹೊತ್ತು ನಡೆಯದ ಕಾರಣ ಅರಮನೆ ಸುತ್ತಲಿನ ಸಂಚಾರ ಸಹಜ ಸ್ಥಿತಿಯತ್ತ ಮರಳಿದೆ. ಜಂಬೂ ಸವಾರಿ ಕಾರಣದಿಂದಾಗಿ ಬ್ಯಾರಿಕೇಡ್ ಹಾಕಿ ಸಂಚಾರವನ್ನು ಪೊಲೀಸರು ಸಂಚಾರ ನಿರ್ಬಂಧಿಸಿದ್ದರು. ಇದೀಗ ಎಲ್ಲ ಕಡೆ ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

  • ಮಳೆ, ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ- ಎಷ್ಟು ಹಾನಿಯಾದ್ರೆ ಎಷ್ಟು ರೂ. ಸಿಗುತ್ತೆ?

    ಮಳೆ, ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ- ಎಷ್ಟು ಹಾನಿಯಾದ್ರೆ ಎಷ್ಟು ರೂ. ಸಿಗುತ್ತೆ?

    ಬೆಂಗಳೂರು: ಮಳೆ, ನೆರೆ ಪೀಡಿತ ಜಿಲ್ಲೆಗಳ ಸಂತ್ರಸ್ತರಿಗೆ ನೀಡಬೇಕಾದ ಪರಿಹಾರ ಮೊತ್ತಕ್ಕೆ ಸರ್ಕಾರದಿಂದ ಮಂಜೂರಾತಿ ಸಿಕ್ಕಿದೆ.

    ಶೇ.75 ಕ್ಕಿಂತ ಹೆಚ್ಚು ಹಾನಿಯಾದ ಮನೆಗಳಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ತಿಳಿಸಿದೆ. ಶೇ.25-75 ರಷ್ಟು ಭಾಗಶಃ ಹಾನಿಯಾದ ಮನೆಗಳನ್ನು ಕೆಡವಿ ಕಟ್ಟಲು 5 ಲಕ್ಷ ರೂ. ಪರಿಹಾರ, ಶೇ.25-75 ರಷ್ಟು ಭಾಗಶಃ ಹಾನಿಯಾದ ಮನೆಗಳ ದುರಸ್ತಿಗೆ 3 ಲಕ್ಷ ರೂ. ಪರಿಹಾರದ ಮೊತ್ತವನ್ನು ನಿಗದಿ ಮಾಡಿದೆ.

    ಶೇ.15-35 ರಷ್ಟು ಅಲ್ಪ ಹಾನಿಯಾದ ಮನೆಗಳ ದುರಸ್ತಿಗೆ 50 ಸಾವಿರ ರೂ. ಹಾಗೂ ಬಟ್ಟೆ, ದಿನಬಳಕೆ ವಸ್ತುಗಳ ಹಾನಿಗೆ ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ ರೂ. ಪರಿಹಾರ ಸಿಗಲಿದೆ.

    ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದು, ಬಳ್ಳಾರಿಗೆ ತೆರಳಿದ್ದಾರೆ, ಸಿಎಂ ಜೊತಡ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಹ ತೆರಳಿದ್ದಾರೆ. ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿ ಬಳ್ಳಾರಿಯ ಜಿಂದಾಲ್ ಏರ್ ಸ್ಟ್ರಿಪ್ ನಿಂದ 10.15ಕ್ಕೆ ವೈಮಾನಿಕ ಸಮೀಕ್ಷೆ ಆರಂಭಿಸಿದ್ದಾರೆ. ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

  • ಪ್ರವಾಹ ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

    ಪ್ರವಾಹ ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

    ಬೆಂಗಳೂರು: ಪ್ರವಾಹ ಸಂತ್ರಸ್ತರ ನೋವಿಗೆ ಸ್ಪಂದಿಸಬೇಕು. ನೆರೆ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೆ ರಾಜ್ಯದ ಪ್ರವಹ ಪೀಡಿತ ಜಿಲ್ಲೆಗಳಿಗೆ 85.49 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

    ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ವೀಡಿಯೋ ಸಂವಾದ ನಡೆಸಿದರು. ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ 85.49 ಕೋಟಿ ರೂ.ಗಳನ್ನು ತುರ್ತು ಪರಿಹಾರಕ್ಕಾಗಿ ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ರಕ್ಷಣಾ ಕಾರ್ಯಗಳಿಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಈಗಾಗಲೇ ಜಿಲ್ಲಾಡಳಿತಗಳಿಗೆ ಒದಗಿಸಲಾಗಿದೆ. ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.

    ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ವಾಸ್ತವ ಸ್ಥಿತಿಯ ಚಿತ್ರಣ ನೀಡಿ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಅಕ್ಟೋಬರ್ 10 ರಿಂದ 15 ರವರೆಗೆ ಕಲಬುರಗಿ, ಬೀದರ್, ಯಾದಗಿರಿ, ಬಳ್ಳಾರಿ, ರಾಯಚೂರು, ಬಾಗಲಕೋಟೆ, ದಾವಣಗೆರೆ, ಕೊಪ್ಪಳ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಿಂದ ಭೀಮಾ ಮತ್ತು ಇದರ ಉಪನದಿಗಳಲ್ಲಿ ದಾಖಲೆ ಪ್ರಮಾಣದ ಒಳಹರಿವು ಕಂಡುಬಂದಿದೆ ಎಂದು ಮಾಹಿತಿ ನೀಡಿದರು.

    ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲು ಕ್ರಮ ವಹಿಸಿ. ಸಂತ್ರಸ್ತರಿಗೆ ಉತ್ತಮ ಆಹಾರ ಪೂರೈಕೆಯಾಗಬೇಕು, ಕೋವಿಡ್ ಪರಿಸ್ಥಿತಿ ಹಿನ್ನೆಲೆ ಕಾಳಜಿ ಕೇಂದ್ರಗಳಲ್ಲಿ ಎಸ್.ಒ.ಪಿ ಪಾಲನೆ ಮಾಡಿ. ಈ ಬಗ್ಗೆ ಯಾವುದೇ ದೂರುಗಳು ಬರಬಾರದು. ಜಾನುವಾರುಗಳಿಗೂ ರಕ್ಷಣೆ ನೀಡಿ, ಮೇವು ಪೂರೈಕೆಯಾಗಬೇಕು ಎಂದು ತಿಳಿಸಿದರು.

    ಕೋವಿಡ್-19 ಹಿನ್ನೆಲೆ ಕಾಳಜಿ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಗಳ ಪೂರೈಕೆ ಸೇರಿದಂತೆ ವೈದ್ಯರು ಭೇಟಿ ನೀಡಿ ತಪಾಸಣೆ ಮಾಡುವಂತೆ ವ್ಯವಸ್ಥೆ ಕೈಗೊಳ್ಳಲು ಹಾಗೂ ಕೋವಿಡ್ ಲಕ್ಷಣಗಳಿರುವವರು ಕಂಡುಬಂದಲ್ಲಿ ಆಸ್ಪತ್ರೆಗಳಿಗೆ ತಕ್ಷಣ ಸ್ಥಳಾಂತರಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

    ನೆರೆ ಸಂತ್ರಸ್ತರ ರಕ್ಷಣೆಗಾಗಿ ಪುಣೆ ಮತ್ತು ಚನ್ನೈ ನಿಂದ ಎನ್‍ಡಿಆರ್‍ಎಫ್ ನ ಆರು ಹೆಚ್ಚುವರಿ ತಂಡಗಳು ಸೇರಿದಂತೆ ಒಟ್ಟು 12 ಎನ್‍ಡಿಆರ್‍ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಕಲಬುರಗಿಗೆ ಮೂರು, ಯಾದಗಿರಿಗೆ ಎರಡು ಹಾಗೂ ರಾಯಚೂರಿಗೆ ಒಂದು ತಂಡವನ್ನು ರಕ್ಷಣಾ ಕಾರ್ಯಗಳಿಗೆ ನಿಯೋಜಿಸಲಾಗಿದೆ.

    ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ ಹಾಗೂ ಬಳ್ಳಾರಿ ಜಿಲ್ಲೆಗಳಿಂದ 14 ದೋಣಿಗಳನ್ನು ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ನೆರೆ ಸಂತ್ರಸ್ತರ ರಕ್ಷಣೆಗಾಗಿ ರಕ್ಷಣಾ ಹೆಲಿಕಾಪ್ಟರ್‍ಗಳನ್ನು ಕಳುಹಿಸಲಾಗಿದೆ. ಸಂಘ ಸಂಸ್ಥೆಗಳು, ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಿ. ಜನರ ನೋವಿಗೆ ತಕ್ಷಣ ಸ್ಪಂದಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ಇದೇ ಸಂದರ್ಭದಲ್ಲಿ ಪ್ರವಾಹದಿಂದ ಬೆಳೆ ಹಾನಿಯಾದ 51,810 ಸಂತ್ರಸ್ತ ರೈತರ ಬ್ಯಾಂಕ್ ಖಾತೆಗೆ 36.57 ಕೋಟಿ ರೂ.ಗಳ ಇನ್‍ಪುಟ್ ಸಬ್ಸಿಡಿಯನ್ನು ನೇರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಆನ್‍ಲೈನ್ ಮೂಲಕ ಜಮೆ ಮಾಡಿದರು. ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.