Tag: ರಫೇಲ್ ಹಗರಣ

  • ಚೌಕಿದಾರ್ ಚೋರ್ ಎಂದ ರಾಹುಲ್‍ಗೆ ಮುಖಭಂಗ – ಇಂದಿನ ಸುಪ್ರೀಂ ಕಲಾಪದಲ್ಲಿ ಏನಾಯ್ತು?

    ಚೌಕಿದಾರ್ ಚೋರ್ ಎಂದ ರಾಹುಲ್‍ಗೆ ಮುಖಭಂಗ – ಇಂದಿನ ಸುಪ್ರೀಂ ಕಲಾಪದಲ್ಲಿ ಏನಾಯ್ತು?

    ನವದೆಹಲಿ: ಚೌಕಿದಾರ್ ಚೋರ್ ಎಂದು ಹೇಳಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ನಲ್ಲಿ ಮುಖಭಂಗವಾಗಿದ್ದು ಕ್ಷಮೆ ಕೇಳುವುದಾಗಿ ಹೇಳಿದ್ದಾರೆ.

    ರಾಹುಲ್ ಪರ ವಾದ ಮಂಡಿಸಿದ ವಕೀಲ ಅಭಿಷೇಕ್ ಸಿಂಘ್ವಿಗೆ ಮುಖ್ಯ ನ್ಯಾಯಮೂರ್ತಿ ಗೊಗೋಯ್, ಸಂಜಯ್ ಕಿಶನ್ ಕೌಲ್, ಜೋಸೆಫ್ ಪೀಠ ಸಖತ್ ಕ್ಲಾಸ್ ತೆಗೆದುಕೊಂಡಿದೆ. ಮೀನಾಕ್ಷಿ ಲೇಖಿ ಪರ ಮುಕುಲ್ ರೋಹ್ಟಗಿ ವಾದ ಮಂಡಿಸಿದ್ದರು.

    ಕಲಾಪ ಹೀಗಿತ್ತು:
    ಸುಪ್ರೀಂಕೋರ್ಟ್ ಹೆಸರು ಬಳಸಿ ಹೇಗೆ ಹೇಳಿಕೆ ನೀಡಿದ್ರಿ? ರಾಹುಲ್ ನೀಡಿದ್ದ ಹೇಳಿಕೆಯನ್ನು ಸುಪ್ರೀಂಕೋರ್ಟ್ ಎಲ್ಲಿ ಹೇಳಿತ್ತು? ಪ್ರಧಾನಿ ಚೋರ್ ಹೈ ಎಂದು ಸುಪ್ರೀಂಕೋರ್ಟ್ ಯಾವಾಗ ಹೇಳಿದೆ ಎಂದು ನ್ಯಾ. ಗೊಗೋಯ್ ಪ್ರಶ್ನಿಸಿದರು. ಇದಕ್ಕೆ ಸಿಂಘ್ವಿ ನಾವು ಪೂರ್ಣ ಪ್ರಮಾಣದಲ್ಲಿ ವಿಷಾದ ವ್ಯಕ್ತಪಡಿಸಿದ್ದೇವೆ ಎಂದು ಉತ್ತರಿಸಿದರು.

    ಈ ಉತ್ತರಕ್ಕೆ ಎಲ್ಲಿ ಪೂರ್ಣ ಪ್ರಮಾಣದಲ್ಲಿ ವಿಷಾದ ವ್ಯಕ್ತಪಡಿಸಿದ್ದೀರಿ? ನೀವು ಸಲ್ಲಿಸಿದ ಅಫಿಡವಿಟ್‍ನಲ್ಲಿ ವಿಷಾದವೆಲ್ಲಿದೆ? ತಮ್ಮ ಹೇಳಿಕೆಯಲ್ಲಿ ಬ್ರಾಕೆಟ್‍ನಲ್ಲಿ ವಿಷಾದ ವ್ಯಕ್ತಪಡಿಸಿದ್ದು ಯಾಕೆ ಎಂದು ಗೊಗೋಯ್ ಮರು ಪ್ರಶ್ನೆ ಹಾಕಿದರು.

    ನ್ಯಾ.ಕೌಲ್ ಅವರು ಒಂದು ಪೇಜಿನಲ್ಲಿ ಉದ್ದೇಶ ಇರಲಿಲ್ಲ ಎಂದು ಹೇಳುತ್ತೀರಿ. ಮುಂದಿನ ಪುಠದಲ್ಲಿ ವಿಷಾದ ಇರಲಿ ಎಂದು ಹೇಳುತ್ತೀರಿ. 28 ಪುಟಗಳ ಅಫಿಡವಿಟ್‍ನಲ್ಲಿ ಏನು ಹೇಳುತ್ತಿದ್ದೀರಾ? ಎಲ್ಲರೂ ತಪ್ಪು ಮಾಡುತ್ತಾರೆ ಒಪ್ಪಿಕೊಳ್ಳಿ ಎಂದು ಸೂಚಿಸಿದರು.

    ಈ ವೇಳೆ ಸಿಂಘ್ವಿ ಅಫಿಡವಿಟ್‍ಗಳಲ್ಲಿ `ಕ್ಷಮೆ’ (ಅಪಾಲಜಿ) ಎನ್ನುವ ಪದ ಇಲ್ಲದೇ ಇರುವುದು ದೋಷ. ಡಿಕ್ಷನರಿಯನ್ನು ಚೆಕ್ ಮಾಡಿದ್ದೇನೆ. ವಿಷಾದ (ರಿಗ್ರೆಟ್) ಅಂದರೆ ಕ್ಷಮಾಪಣೆ (ಸಿವಿಲ್ ಅಪಾಲಜಿ) ಎಂದೇ ಅರ್ಥ ಬರುತ್ತುದೆ ಎಂದು ಸಮಜಾಯಿಷಿ ನೀಡಿದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿಗಳು ನಿಮ್ಮ ಕಕ್ಷಿದಾರರು ಏನು ಹೇಳಿದ್ದಾರೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಲು ಕಷ್ಟ ಪಟ್ಟಿದ್ದೇವೆ ಎಂದಾಗ ರಾಜಕೀಯ ಸನ್ನಿವೇಶದಲ್ಲಿ ಚೌಕಿದಾರ್ ಚೋರ್ ಅನ್ನೋ ಪದ ಬಳಸಿದ್ದಾರೆ ಎಂದು ಉತ್ತರ ನೀಡಿದರು.

    ಈ ಉತ್ತರಕ್ಕೆ ಗರಂ ಆದ ಸಿಜೆಐ, ನಿಮ್ಮ ರಾಜಕೀಯ ನಿಲುವುಗಳ ನಮಗೆ ಬೇಕಿಲ್ಲ. ನಿಮ್ಮ ರಾಜಕೀಯವನ್ನು ನಿಮ್ಮ ಬಳಿಯೇ ಇಟ್ಟುಕೊಳ್ಳಿ ಎಂದು ಹೇಳಿ ಚಾಟಿ ಬೀಸಿದರು. ಈ ವೇಳೆ ಮುಕುಲ್ ರೊಹ್ಟಗಿ ಕೋರ್ಟ್ ಮೋದಿ ಸುಳ್ಳು ಹೇಳಿದ್ದಾರೆ ಎಂದು ರಾಹುಲ್ ಗಾಂಧಿ ಉದ್ದೇಶಪೂರ್ವಕವಾಗಿ ಹೇಳಿದ್ದಾರೆ. ಬ್ರಾಕೆಟ್‍ನಲ್ಲಿ ವಿಷಾದ ಅಂದ್ರೇನು ಅರ್ಥ? ಸುಪ್ರೀಂಕೋರ್ಟ್ ಪ್ರಧಾನಿಯನ್ನು ಕಳ್ಳ ಅಂತ ಹೇಳಿದೆ ಅಂತ ದೇಶದ ಹಾದಿ ತಪ್ಪಿಸೋ ಯತ್ನವಲ್ಲದೆ ಬೇರೇನೂ ಅಲ್ಲ ಎಂದು ಹೇಳಿ ಸಿಂಘ್ವಿ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

    ಈ ಆಕ್ಷೇಪಕ್ಕೆ ಸಿಜೆಐ, ನಿಮ್ಮ ಕಕ್ಷಿದಾರ ಸ್ಪಷ್ಟವಾಗಿ ಕ್ಷಮೆ ಕೋರಬೇಕು. ಇಲ್ಲವಾದಲ್ಲಿ ಕ್ರಿಮಿನಲ್ ನಿಂದನೆ ಎದುರಿಸಬೇಕಾಗುತ್ತದೆ ಎಂದಾಗ ಸಿಂಘ್ವಿ, ತಪ್ಪನ್ನು ತಿದ್ದಿಕೊಂಡು `ಕ್ಷಮೆ ಕೋರಿ’ ಹೊಸ ಅಫಿಡವಿಟ್ ಸಲ್ಲಿಸುತ್ತೇವೆ ಎಂದು ತಿಳಿಸಿದರು.

    ಕೊನೆಗೆ ನ್ಯಾ.ಗೊಗೋಯ್, ಪ್ರಸ್ತುತ ಈಗ ಕೊಟ್ಟಿರುವ ಅಫಿಡವಿಟ್ ಅನ್ನು ಸ್ವೀಕೃತಿ ಅಥವಾ ಅಂಗೀಕಾರ ಎಂದು ನಿಮ್ಮ ಕಕ್ಷಿದಾರ ಭಾವಿಸುವಂತಿಲ್ಲ. ಸೋಮವಾರದ ಒಳಗೆ ಅಫಿಡವಿಟ್ ಸಲ್ಲಿಸಿ ಎಂದು ಸೂಚಿಸಿ ವಿಚಾರಣೆಯನ್ನು ಮೆ 6ಕ್ಕೆ ಮುಂದೂಡಿದರು.

    ಏನಿದು ಪ್ರಕರಣ?
    ರಫೇಲ್ ತೀರ್ಪಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಯನ್ನು ಪುರಸ್ಕರಿಸಬಾರದು ಎಂದು ಕೇಂದ್ರದ ವಾದವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಈ ಆದೇಶ ಬಂದ ನಂತರ ಚೌಕಿದಾರ್ (ಪ್ರಧಾನಿ ಮೋದಿ) ಕಳ್ಳತನ ಮಾಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ರಾಹುಲ್ ಗಾಂಧಿ ಅವರು ತಮ್ಮ ಪ್ರಚಾರ ಭಾಷಣದಲ್ಲಿ ಹೇಳಿದ್ದರು.

    ರಾಹುಲ್ ಗಾಂಧಿ ಅವರು, ರಫೇಲ್ ಡೀಲ್ ಪ್ರಕರಣದ ಆದೇಶದಲ್ಲಿ ಇಲ್ಲದೆ ಇರುವ ಅಂಶಗಳನ್ನು ಉಲ್ಲೇಖಿಸಿ ಮೋದಿ ಅವರನ್ನು ಟೀಕೆ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ಸುಪ್ರೀಂ ಕೋರ್ಟಿನಲ್ಲಿ ರಾಹುಲ್ ವಿರುದ್ಧ ನ್ಯಾಯಾಂಗ ನಿಂದನೆ ದೂರು ನೀಡಿದ್ದರು. ಮೀನಾಕ್ಷಿ ಲೇಖಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿ ಏ.22 ರಂದು ಸ್ಪಷ್ಟನೆ ನೀಡಬೇಕೆಂದು ಸೂಚಿಸಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯೂ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೂ ದೂರು ನೀಡಿತ್ತು.

  • ಪ್ರಧಾನಿ ಮೋದಿಗೆ ಅತಿ ದೊಡ್ಡ ಗೆಲುವು: ಸುಪ್ರೀಂ ತೀರ್ಪಿನಲ್ಲಿರುವ ಪ್ರಮುಖ ಅಂಶಗಳು ಏನು?

    ಪ್ರಧಾನಿ ಮೋದಿಗೆ ಅತಿ ದೊಡ್ಡ ಗೆಲುವು: ಸುಪ್ರೀಂ ತೀರ್ಪಿನಲ್ಲಿರುವ ಪ್ರಮುಖ ಅಂಶಗಳು ಏನು?

    ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಸೋತಿದ್ದ ಪ್ರಧಾನಿ ನರೇಂದ್ರ ಮೋದಿಗೆ ಲೋಕಸಭಾ ಚುನಾವಣೆಗೂ ಮುನ್ನ ಅತಿ ದೊಡ್ಡ ಗೆಲುವಿನ ರೂಪದಲ್ಲಿ ರಫೇಲ್ ತೀರ್ಪು ಪ್ರಕಟವಾಗಿದೆ. ಜೆಟ್ ಖರೀದಿ ಸಂಬಂಧ ಯಾವುದೇ ತನಿಖೆಗೆ ಆದೇಶ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ಪ್ರಕಟಿಸಿದೆ.

    ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲ ಎಂ.ಎಲ್ ಶರ್ಮಾ, ವಿನೀತಾ ದಾಂಡ, ಆಪ್ ನಾಯಕ ಸಂಜಯ್ ಸಿಂಗ್ ಮಾಜಿ ಕೇಂದ್ರ ಸಚಿವ ಯಶವಂತ ಸಿನ್ಹಾ, ಅರುಣ್ ಶೌರಿ ಹಾಗೂ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದರು. ರಫೇಲ್ ಒಪ್ಪಂದವನ್ನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಮೇಲುಸ್ತುವಾರಿಯಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ವಕೀಲರು ಆಗ್ರಹಿಸಿದ್ದರು. ಈ ಅರ್ಜಿಗಳನ್ನು ಒಟ್ಟಾಗಿಸಿದ್ದ ಮುಖ್ಯ.ನ್ಯಾ ರಂಜನ್ ಗೋಗಯ್ ನೇತೃತ್ವದ ನ್ಯಾ. ಎಸ್‍ಕೆ ಕೌಲ್, ನ್ಯಾ. ಕೆಎಂ ಜೋಸೆಫ್ ಅವರಿದ್ದ ತ್ರಿಸದಸ್ಯ ಪೀಠ ಸುದೀರ್ಘ ವಿಚಾರಣೆ ನಡೆಸಿತ್ತು. ನವೆಂಬರ್ 14 ರಂದು ವಿಚಾರಣೆ ಅಂತ್ಯಗೊಳಿಸಿದ್ದ ಸುಪ್ರೀಂಕೋರ್ಟ್ ಇಂದು ತೀರ್ಪು ಪ್ರಕಟಿಸಿ ಎಲ್ಲ ಅರ್ಜಿಗಳನ್ನು ವಜಾಗೊಳಿಸಿದೆ. ಇದನ್ನೂ ಓದಿ: ರಫೇಲ್ ಡೀಲ್ : ಮೋದಿಗೆ ಬಿಗ್ ರಿಲೀಫ್, ಕೈಗೆ ಮುಖಭಂಗ

    ರಫೇಲ್ ಖರೀದಿ ವ್ಯವಹಾರಗಳನ್ನು ನಿಯಮದಡಿಯಲ್ಲಿಯೇ ಮಾಡಲಾಗಿದೆ. ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ರೀತಿಯ ಅವ್ಯವಹಾರ ಕಂಡುಬಂದಿಲ್ಲ. ಈ ಕಾರಣಕ್ಕೆ ತನಿಖೆ ನಡೆಸಲು ಆದೇಶ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ:ಎಚ್‍ಎಎಲ್ ಜೊತೆ ರಫೇಲ್ ಯೋಜನೆ ಕೈಬಿಟ್ಟಿದ್ದೇಕೆ: ಸ್ಪಷ್ಟನೆ ನೀಡಿದ ರಕ್ಷಣಾ ಸಚಿವೆ

    ಸುಪ್ರೀಂ ತೀರ್ಪಿನಲ್ಲಿ ಏನಿದೆ?
    – ರಫೇಲ್ ಖರೀದಿ ಒಪ್ಪಂದದಲ್ಲಿ ಸಂದೇಹ ಪಡುವ ಅಗತ್ಯವಿಲ್ಲ. ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎನ್ನುವುದಕ್ಕೆ ಯಾವುದಕ್ಕೆ ಸಾಕ್ಷ್ಯಗಳು ಸಿಕ್ಕಿಲ್ಲ. ಗುಣಮಟ್ಟದ ವಿಮಾನ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎದ್ದಿರುವ ಖರೀದಿ ಒಪ್ಪಂದ ಬೆಲೆಯ ಪರಾಮರ್ಶೆ ಮಾಡುವುದು ಕೋರ್ಟ್ ಕೆಲಸವಲ್ಲ.

    – ದೇಶಕ್ಕೆ ನಾಲ್ಕು ಮತ್ತು ಐದನೇಯ ತಲೆಮಾರಿನ ಫೈಟರ್ ಜೆಟ್ ಭಾರತೀಯ ವಾಯುಸೇನೆಗೆ ನಿಯೋಜಿಸುವ ಅಗತ್ಯವಿದೆ. ಖರೀದಿ, ಬೆಲೆ ನಿರ್ಣಯ, ದೇಶಿ ಪಾಲುದಾರ ಆಯ್ಕೆ ವಿಚಾರದಲ್ಲಿ ಮಧ್ಯಪ್ರವೇಶಿಸುವ ಅಗತ್ಯ ಕಂಡು ಬರುವುದಿಲ್ಲ. ಒಪ್ಪಂದದಲ್ಲಿ ಭಾಗಿಯಾದ ಎಲ್ಲರೂ ಖರೀದಿ ಹೇಗೆ ನಡೆಯಿತು ಎನ್ನುವ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ತುಲಾತ್ಮಕ ಬೆಲೆ ವಿವರವನ್ನು ನೀಡಿ ವಿಮಾನಗಳನ್ನು ಖರೀದಿಸಿ ಎಂದು ಹೇಳುವುದು ಕೋರ್ಟ್ ಕೆಲಸವಲ್ಲ. ಇದನ್ನೂ ಓದಿ:ಒಂದೇ ಯುದ್ಧ ವಿಮಾನ ನಿರ್ಮಿಸದ ರಿಲಯನ್ಸ್ ಕಂಪನಿ ಜೊತೆ ಒಪ್ಪಂದ ಮಾಡಿದ್ದು ಯಾಕೆ: ಪ್ರಶ್ನೆಗೆ ಡಸಾಲ್ಟ್ ಸಿಇಒ ಉತ್ತರ ನೀಡಿದ್ದು ಹೀಗೆ

    – ನಾವು ಕೇಳಿದ ಪ್ರಶ್ನೆಗಳಿಗೆ ಸಿಕ್ಕಿದ ಉತ್ತರಿಂದ ನಮ್ಮ ಸಂಶಯ ಪರಿಹಾರವಾಗಿದ್ದು ತೃಪ್ತಿಯಾಗಿದೆ. ರಕ್ಷಣೆಯಂತಹ ಸೂಕ್ಷ್ಮ ವಿಚಾರದಲ್ಲಿ ತನಿಖೆಗೆ ಆದೇಶ ನೀಡುವುದು ಸರಿಯಲ್ಲ. ದೇಶಿ ಪಾಲುದಾರನ ಆಯ್ಕೆ ಮಾಡುವುದು ಕಂಪನಿಗೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ.

    – ರಫೇಲ್ ಖರೀದಿ ಒಪ್ಪಂದದಲ್ಲಿ ದೇಶಿಯ ಪಾಲುದಾರಿಕೆಯ ಆಯ್ಕೆ ವಿಚಾರದಲ್ಲಿ ವಾಣಿಜ್ಯ ಒಲವು ತೋರಿಸಲಾಗಿದೆ ಎನ್ನುವುದನ್ನು ಒಪ್ಪಲು ಸಾಧ್ಯವಿಲ್ಲ. ಫ್ರಾನ್ಸ್ ಮಾಜಿ ಅಧ್ಯಕ್ಷ ಹೊಲಾಂಡೆ ಅವರು ಮಾಧ್ಯಮಗಳಿಗೆ ನೀಡಿದ ಹೇಳಿಕೆಯಿಂದ ರಫೇಲ್ ಜೆಟ್ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಎದ್ದಿದ್ದು ಈ ವಿಚಾರವನ್ನು ನಾವು ನ್ಯಾಯಾಂಗದ ಪರಿಧಿ ವ್ಯಾಪ್ತಿಯಲ್ಲಿ ಪರಾಮರ್ಶೆ ಮಾಡುವುದಿಲ್ಲ.

    – 126 ಜೆಟ್ ಬದಲು 36 ಜೆಟ್ ಖರೀದಿ ಒಪ್ಪಂದ ಮಾಡಿಕೊಂಡಿರುವ ಭಾರತ ಸರ್ಕಾರದ ಈ ನಿರ್ಧಾರವನ್ನು ಬದಲಾಯಿಸಿ ಎಂದು ನಾವು ಹೇಳಲು ಸಾಧ್ಯವಿಲ್ಲ. 2016ರ ಸಪ್ಟೆಂಬರ್ ತಿಂಗಳಿನಲ್ಲಿ ಈ ಡೀಲ್ ನಡೆದಾಗ ಯಾರು ಪ್ರಶ್ನೆ ಕೇಳಿರಲಿಲ್ಲ.

    – 4 ಮತ್ತು 5ನೇ ತಲೆಮಾರಿನ ಯುದ್ಧ ವಿಮಾನಗಳನ್ನು ವಾಯುಸೇನೆಗೆ ಅಗತ್ಯವಾಗಿದ್ದು, ಈ ವಿಮಾನಗಳನ್ನು ಸೇರ್ಪಡೆಗೊಳಿಸುವಂತಹ ವಿಚಾರದಲ್ಲಿ ಜನರ ವೈಯಕ್ತಿಯ ಗ್ರಹಿಕೆಗಳಿಗಿಂತಲೂ ಸೇನೆಯ ಅಭಿಪ್ರಾಯಗಳನ್ನು ನ್ಯಾಯಾಂಗ ಹೆಚ್ಚು ಪರಾಮರ್ಶಿಸುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಫೇಲ್ ವಿಮಾನದ ಬೆಲೆಯ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ನೀಡಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

    ರಫೇಲ್ ವಿಮಾನದ ಬೆಲೆಯ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ನೀಡಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

    ನವದೆಹಲಿ: 10 ದಿನದ ಒಳಗಡೆ ಮುಚ್ಚಿದ ಲಕೋಟೆಯಲ್ಲಿ ರಫೇಲ್ ಯುದ್ಧ ವಿಮಾನದ ಬೆಲೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಸಲ್ಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

    59 ಸಾವಿರ ಕೋಟಿ ರೂ. ನೀಡಿ ಫ್ರಾನ್ಸ್ ನಿಂದ 36 ಯುದ್ಧ ವಿಮಾನಗಳನ್ನು ಖರೀದಿಸುವ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಹೀಗಾಗಿ ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಸರ್ಕಾರಕ್ಕೆ ಆದೇಶ ನೀಡಬೇಕೆಂದು ಕೋರಿ ವಕೀಲರಾದ ಮನೋಹರ್ ಲಾಲ್ ಶರ್ಮಾ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಪಿಐಎಲ್ ಜೊತೆಗೆ ಯಶವಂತ್ ಸಿನ್ಹಾ, ಅರುಣ್ ಶೌರಿ ಮತ್ತು ವಕೀಲ ಪ್ರಶಾಂತ್ ಭೂಷಣ್ ಈ ಪ್ರಕರಣವನ್ನು ಸಿಬಿಐಗೆ ತನಿಖೆಗೆ ವಹಿಸುವಂತೆ ಪಿಐಎಲ್ ಸಲ್ಲಿಸಿದ್ದಾರೆ.

    ಈ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾ. ಎಸ್.ಕೆ. ಕೌಲ್ ಮತ್ತು ನ್ಯಾ.ಕೆ.ಎಂ ಜೋಸೆಫ್ ಅವರನ್ನೊಳಗೊಂಡ ಪೀಠ, ವಿಮಾನಗಳ ಬೆಲೆ ಕುರಿತು ಸಂಪೂರ್ಣ ಮಾಹಿತಿಗಳನ್ನು ಮುಚ್ಚಿದ ಲಕೋಟೆಯಲ್ಲಿ 10 ದಿನದ ಒಳಗಡೆ ಸಲ್ಲಿಸುವಂತೆ ಸೂಚನೆ ನೀಡಿದೆ.

    ವಿಚಾರಣೆ ವೇಳೆ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್, ವಿಮಾನ ಖರೀದಿಯ ಬೆಲೆ ಗೌಪ್ಯತೆಯನ್ನು ಕಾಪಾಡಲಾಗಿದ್ದು, ಸಾರ್ವಜನಿಕವಾಗಿ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಮನವಿ ಮಾಡಿದರು. ಈ ಸಮಯದಲ್ಲಿ ಕೋರ್ಟ್ ರಫೇಲ್ ಯುದ್ಧ ವಿಮಾನದ ತಾಂತ್ರಿಕ ಗೌಪ್ಯ ವಿಚಾರಗಳು ನಮಗೆ ಬೇಕಾಗಿಲ್ಲ ಆದರೆ ಒಪ್ಪಂದ ಮತ್ತು ಬೆಲೆಯ ಮಾಹಿತಿಯನ್ನು ಸಾರ್ವಜನಿಕರಿಂದ ಮುಚ್ಚಿಡುವಂತಿಲ್ಲ, ಹತ್ತು ದಿನಗಳ ಒಳಗೆ ಅರ್ಜಿದಾರರು ಕೇಳುವ ಮಾಹಿತಿಯನ್ನು ನೀಡಬೇಕು ಎಂದು ಆದೇಶಿಸಿದೆ.

    ಪ್ರಶಾಂತ್ ಭೂಷಣ್ ಅವರು, ವ್ಯವಹಾರ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಹೀಗಾಗಿ ಸಿಬಿಐ ತನಿಖೆಗೆ ಆದೇಶಿಸಿ ಎಂದು ಮನವಿ ಮಾಡಿದರು. ಇದಕ್ಕೆ ಕೋರ್ಟ್ ವಿಚಾರಣೆ ಮುಗಿಯುವ ತನಕ ನೀವು ಕಾಯಬೇಕು, ಈಗಲೇ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದು ಹೇಳಿ ನವೆಂಬರ್ 10ಕ್ಕೆ ವಿಚಾರಣೆಯನ್ನು ಮುಂದೂಡಿತು.

    ಅ.10 ರಂದು ವಿಚಾರಣೆ ನಡೆಸಿದ್ದ ಪೀಠ, ಅರ್ಜಿಗಳಲ್ಲಿ ಒಪ್ಪಂದ ಕುರಿತು ಮಾಡಲಾಗಿರುವ ಭ್ರಷ್ಟಾಚಾರ ಆರೋಪಗಳನ್ನು ಈಗ ಪರಿಗಣಿಸುವುದಿಲ್ಲ. ಆದರೆ ಈ ಖರೀದಿ ಪ್ರಕ್ರಿಯೆ ನಡೆಸಿದ ಪ್ರಕ್ರಿಯೆ, ತಾಂತ್ರಿಕ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ನೀಡುವಂತೆ ಸೂಚಿಸಿತ್ತು. ಕೇಂದ್ರ ಸರ್ಕಾರ ಈ ಮಾಹಿತಿಯನ್ನು ಅ.27ರಂದು ತಿಳಿಸಿದ ಬಳಿಕ ಸುಪ್ರೀಂ ಈಗ ರಫೇಲ್ ಯುದ್ಧ ವಿಮಾನದ ಬೆಲೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಸೂಚಿಸಿದೆ.

    ರಫೇಲ್ ವಿಮಾನಗಳ ಖರೀದಿಯಲ್ಲಿ ಭಾರೀ ಅಕ್ರಮಗಳು ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಒಪ್ಪಂದ ಮಾಹಿತಿಯನ್ನು ಬಹಿರಂಗ ಪಡಿಸುವಂತೆ ಆಗ್ರಹಿಸಿತ್ತು. ಆದರೆ ಕೇಂದ್ರ ಖರೀದಿ ಸಂಬಂಧದ ರಹಸ್ಯ ಮಾಹಿತಿಯನ್ನು ಬಹಿರಂಗಪಡಿಸದಂತೆ ಎರಡು ಸರ್ಕಾರಗಳ ನಡುವೆ ಒಪ್ಪಂದ ನಡೆದಿದೆ. ಹೀಗಾಗಿ ಸಾರ್ವಜನಿಕವಾಗಿ ಮಾಹಿತಿಯನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಆರೋಪಗಳಿಗೆ ತಿರುಗೇಟು ನೀಡಿತ್ತು. ಈಗ ಸುಪ್ರೀಂ ಕೋರ್ಟ್ ಖರೀದಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿಸಿ ಎಂದು ಸೂಚಿಸಿದ ಹಿನ್ನೆಲೆಯಲ್ಲಿ ಪ್ರಕರಣ ಮತ್ತಷ್ಟು ಕುತೂಹಲ ಮೂಡಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv