Tag: ವಿಶ್ವ ಆರ್ಥಿಕ ಸಮ್ಮೇಳನ

  • ದಾವೋಸ್ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರೆ: ಐತಿಹಾಸಿಕ 52 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ರಾಜ್ಯದ ಜೊತೆ ಒಪ್ಪಂದ

    ದಾವೋಸ್ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರೆ: ಐತಿಹಾಸಿಕ 52 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ರಾಜ್ಯದ ಜೊತೆ ಒಪ್ಪಂದ

    ಬರ್ನ್: ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದ್ದು, ಕರ್ನಾಟಕ ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರಥಮ ಬಾರಿಗೆ 2 ಮಹತ್ವದ ಕಂಪನಿಗಳ ಜೊತೆ ಒಟ್ಟು 52 ಸಾವಿರ ಕೋಟಿ ರೂ. ಮೊತ್ತದ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ.

    ಇದು ಕರ್ನಾಟಕ ರಾಜ್ಯದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಸಾಕ್ಷಿ. ಇತ್ತೀಚಿನ ದಿನಗಳ ರಾಜ್ಯಕ್ಕೆ ಹರಿದು ಬರುತ್ತಿರುವ ಬಹುದೊಡ್ಡ ಮೊತ್ತದ ಬಂಡವಾಳ ಇದಾಗಿದೆ. ಹಲವಾರು ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿವೆ. ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಕಂಪನಿಗಳು ಹೂಡಿಕೆ ಮಾಡಲಿರುವ ಬಂಡವಾಳದಿಂದ ಸಾವಿರಾರು ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಠಿ ಆಗಲಿವೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ಆಸಕ್ತಿಯಿಂದ ಸರ್ಕಾರ ಬೃಹತ್ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ಯಶಸ್ವಿಯಾಗುತ್ತಿದೆ. ಇದನ್ನೂ ಓದಿ: ಪಿಎಸ್‍ಐ ಪರೀಕ್ಷೆ ಅಕ್ರಮ: ಕಿಂಗ್‍ಪಿನ್ ಆರ್.ಡಿ.ಪಾಟೀಲ್ ಮತ್ತೆ ಸಿಐಡಿ ವಶಕ್ಕೆ! 

    ನವೀಕರಿಸಬಹುದಾದ ಇಂಧನ ವಲಯದಲ್ಲಿ ರೆನ್ಯೂ ಪವರ್ ಕಂಪನಿ 50,000 ಕೋಟಿ ರೂ.ಗಳ ಬಂಡವಾಳ ಹೂಡಲು ಕರ್ನಾಟಕ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಕರ್ನಾಟಕದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲಿಗಲ್ಲಾಗಿದೆ. ಮೆ.ಲುಲು ಗ್ರೂಪ್ ಇಂಟರ್ನ್ಯಾಷನಲ್ ಸಂಸ್ಥೆಯು ರಾಜ್ಯದಲ್ಲಿ ಸುಮಾರು 2000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಮಾಡಿಕೊಳ್ಳಲಾಯಿತು. ಇವೆರಡೂ ಒಪ್ಪಂದಗಳು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿದೆ.

    ಕರ್ನಾಟಕದಲ್ಲಿ ಕೈಗಾರಿಕೆ ಹಾಗೂ ಉದ್ಯಮಗಳ ಸ್ಥಾಪನೆಗೆ ಪೂರಕವಾಗಿ ಎರಡು ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ಸಂಶೋಧನೆಗೆ ಹೆಚ್ಚು ಪ್ರೋತ್ಸಾಹವನ್ನು ನೀಡುವ ಆರ್ ಎಂಡ್ ಡಿ ಪಾಲಿಸಿ, ಹೆಚ್ಚು ಉದ್ಯೋಗವನ್ನು ಒದಗಿಸುವ ಉದ್ಯಮಗಳಿಗೆ ಹೆಚ್ಚು ಪ್ರೋತ್ಸಾಹಕ ನೀತಿಗಳನ್ನು ಜಾರಿಗೆ ತರಲಾಗಿದೆ. ಈ ಎರಡೂ ನೀತಿಗಳ ಲಾಭಗಳನ್ನು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವ ಸಂಸ್ಥೆಗಳು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

    ಇದೇ ಸಂದರ್ಭದ ನವೆಂಬರ್‍ನಲ್ಲಿ ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಬೆಂಗಳೂರು ಟೆಕ್ ಸಮ್ಮಿಟ್‍ನಲ್ಲಿ ಪಾಲ್ಗೊಳ್ಳುವಂತೆ ಹೂಡಿಕೆದಾರರಿಗೆ ಆಹ್ವಾನ ನೀಡಲಾಯಿತು.

    ಬಂಡವಾಳ ಹೂಡಿಕೆ ಸಂಸ್ಥೆಯ ವಿವರಗಳು:

    ಮೆ. ಲುಲು ಗ್ರೂಪ್ ಇಂಟರ್ನ್ಯಾಷನಲ್:
    ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಒಪ್ಪಂದಕ್ಕೆ ಸಹಿ ಹಾಕಿದೆ. 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

    ರೆನ್ಯೂ ಪವರ್ ಪ್ರೈ.ಲಿ:
    ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು. ಈ ಕಂಪೆನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು 2 ಹಂತಗಳಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದು, ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

    ಮೊದಲ ಹಂತದಲ್ಲಿ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳಿಗೆ 11,900 ಕೋಟಿ ರೂ.ಗಳ ಬಂಡವಾಳ ಹೂಡಿ, ಮುಂದಿನ 2 ವರ್ಷಗಳಲ್ಲಿ ಯೋಜನೆಗಳು ಕಾರ್ಯಾರಂಭ ಮಾಡಲಾಗುತ್ತದೆ.

    ಎರಡನೇ ಹಂತದಲ್ಲಿ ನವೀಕರಿಸಬಹುದಾದ ಇಂಧನ ಹಾಗೂ ಗ್ರೀನ್ ಹೈಡ್ರೋಜನ್ ಘಟಕಗಳನ್ನು ಮುಂದಿನ 5 ವರ್ಷಗಳಲ್ಲಿ ಸ್ಥಾಪಿಸಲು 37,500 ಕೋಟಿ ರೂ.ಗಳ ಬಂಡವಾಳವನ್ನು ಹೂಡಿಕೆ ಮಾಡಲಾಗುತ್ತದೆ. ಈ ಎರಡು ಹಂತದ ಯೋಜನೆಗಳಿಂದ ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

    ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿದ ಸಂಸ್ಥೆಗಳು:

    ಸೀಮೆನ್ಸ್ ಸಂಸ್ಥೆ:
    ಬೆಂಗಳೂರಿನಲ್ಲಿ 2 ಯೋಜನೆಗಳನ್ನು ಸೀಮೆನ್ಸ್ ಸಂಸ್ಥೆ ಕೈಗೆತ್ತಿಕೊಳ್ಳಲಿದೆ. ಆಧುನಿಕ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹಕಗಳನ್ನು ಕರ್ನಾಟಕ ಸರ್ಕಾರ ಒದಗಿಸುವ ಭರವಸೆ ನೀಡಿದೆ. ಬಿಯಾಂಡ್ ಬೆಂಗಳೂರು ಯೋಜನೆಯಡಿ ತುಮಕೂರು, ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರು ನಗರಗಳಲ್ಲಿಯೂ ಹೂಡಿಕೆ ಮಾಡುವ ಕುರಿತು ರಾಜ್ಯ ಸರ್ಕಾರ ಮತ್ತು ಸೀಮನ್ಸ್ ಸಂಸ್ಥೆ ಮಾತುಕತೆ ನಡೆಸಿತು.

    ದಸ್ಸಾಲ್ಸ್ ಸಿಸ್ಟಮ್ಸ್:
    ರಾಜ್ಯದಲ್ಲಿ ವಿದ್ಯುತ್ ವಾಹನಗಳು ಮತ್ತು ಕೇಂದ್ರ ಉತ್ಪಾದನಾ ತಾಂತ್ರಿಕ ಸಂಸ್ಥೆಯ ಸಹಯೋಗದಲ್ಲಿ ಆಧುನಿಕ ಉತ್ಪಾದನೆ ಕ್ಷೇತ್ರ , ವಿದ್ಯಾರ್ಥಿಗಳಿಗೆ ಕೈಗಾರಿಕೆ 4.0, ಡಿಜಿಟಲ್ ತಂತ್ರಜ್ಞಾನದ ಬಗ್ಗೆ ತರಬೇತಿ ,ರಾಜ್ಯದ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಹೂಡಿಕೆ ಮಾಡಲು ದಸ್ಸಾಲ್ಸ್ ಸಿಸ್ಟಮ್ಸ್ ಉತ್ಸುಕತೆ ತೋರಿದರು. ಇದನ್ನೂ ಓದಿ: ಗೃಹಿಣಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಿಯಕರ ಅರೆಸ್ಟ್ 

    ನೆಸ್ಟ್ಲೆ ಸಂಸ್ಥೆ:
    ನಂಜನಗೂಡಿನಲ್ಲಿ ನೆಸ್ಟ್ಲೆ ಇನ್ಸೆಂಟ್ ಕಾಫಿ ಕಾರ್ಖಾನೆಯನ್ನು ನವೀಕರಣ ಹಾಗೂ ವಿಸ್ತರಣಾ ಕಾರ್ಯಕ್ಕೆ ನೆಸ್ಟ್ಲೆ ಸಂಸ್ಥೆ ಮುಂದಾಗಿದ್ದಾರೆ.

    ಮೆಗಾ ಡಾಟಾ ಸೆಂಟರ್:
    ಭಾರ್ತಿ ಎಂಟರ್ ಪ್ರೈಸಸ್ ನ ಅಧ್ಯಕ್ಷ ಹಾಗೂ ಸಿಇಓ ಸುನಿಲ್ ಭಾರ್ತಿ ಮಿತ್ತಲ್ ಅವರು ರಾಜ್ಯದಲ್ಲಿ ಇನ್ನೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರವು ಎಲ್ಲ ಅಗತ್ಯ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

    Davos 2

    ಬೆಂಗಳೂರಿನಲ್ಲಿ ಐಕಿಯ ಸ್ಟೋರ್:
    ಇಂಗ್ಕಾ ಗ್ರೂಪ್ (ಐಕಿಯ) ಸಿ.ಇ.ಓ. ಜೆಸ್ಪರ್ ಬ್ರಾಡಿನ್ ಅವರು ರಾಜ್ಯದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿ, ಜೂನ್‍ನಲ್ಲಿ ನಾಗಸಂದ್ರದಲ್ಲಿ ಐಕಿಯ ಸ್ಟೋರ್ ತೆರೆಯಲಿದ್ದು, ಜೆಸ್ಪರ್ ಬ್ರಾಡಿನ್ ಅವರು ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಇದೇ ಸಂದರ್ಭದಲ್ಲಿ ಐಕಿಯದ ಭಾರತೀಯ ಕೇಂದ್ರ ಕಚೇರಿಯೂ ಬೆಂಗಳೂರಿನಲ್ಲಿದ್ದು ಪೀಠೋಪಕರಣಗಳ ತಯಾರಿಕೆಯ ಸಂದರ್ಭದಲ್ಲಿ ಬಿದಿರು ಮತ್ತಿತರ ಸ್ಥಳೀಯ ವಸ್ತುಗಳ ವ್ಯಾಪಕ ಬಳಕೆಯ ಕುರಿತೂ ಸಹ ಚರ್ಚಿಸಲಾಯಿತು.

    ಆಕ್ಸಿಸ್ ಬ್ಯಾಂಕ್:
    ಆಕ್ಸಿಸ್ ಬ್ಯಾಂಕ್ ಸಂಸ್ಥೆಯು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಕಾರ್ಯಕ್ರಮಗಳಡಿ ರಾಜ್ಯದ ಕೆಲವು ಇಂಜಿನಿಯರಿಂಗ್ ಹಾಗೂ ವಿಶ್ವವಿದ್ಯಾಲಯಗಳ ಉನ್ನತೀಕರಣ ಯೋಜನೆಯನ್ನು ಹಮ್ಮಿಕೊಳ್ಳಲು ಸಲಹೆ ನೀಡಲಾಯಿತು.

    ನೋಕಿಯಾ ಸಂಸ್ಥೆ:
    ಕರ್ನಾಟಕದಲ್ಲಿ ಟೆಲಿಕಾಂ ಉತ್ಪನ್ನಗಳ ಉತ್ಪಾದನೆಯ ಅವಕಾಶಗಳನ್ನು ಬಳಸಿಕೊಳ್ಳಲು ನೋಕಿಯಾ ಸಂಸ್ಥೆಯ ಮುಖ್ಯಸ್ಥರಿಗೆ ಸಲಹೆ ನೀಡಲಾಯಿತು.

    ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಕರ್ನಾಟಕ ಪೆವಿಲಿಯನ್‍ನಲ್ಲಿ ಹೀರೋ ಮೋಟೋಕಾರ್ಪ್, ಎಬಿಇನ್‍ಬೇವ್ ಸಂಸ್ಥೆ, ಅರ್ಸೆಲರ್ ಮಿತ್ತಲ್, ಅದಾನಿ ಗ್ರೂಪ್, ಜಾನ್ಸನ್ ಕಂಟ್ರೋಲ್ಸ್‍ನ ಸಿಇಓ ಜಾರ್ಜ್ ಒಲಿವರ್, ಹನಿವೆಲ್ ಕಂಪೆನಿ, ಐಬಿಎಂ, ಬೈಜೂಸ್, ಮೀಶೋ ಸಂಸ್ಥೆಯ ಮುಖ್ಯಸ್ಥರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗಳ ಅವಕಾಶಗಳ ಬಗ್ಗೆ ಮಾತುಕತೆ ನಡೆಸಿದರು.

    ಈ ಸಂದರ್ಭದಲ್ಲಿ ಹವಾಮಾನ ಬದಲಾವಣೆ ಮತ್ತು ಪರಿಸರ ಮಾಲಿನ್ಯ ಕುರಿತ ಗೋಷ್ಠಿಯಲ್ಲಿ ಭಾಗವಹಿಸಿ ಈಶ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಚರ್ಚೆ ನಡೆಸಲಾಯಿತು. ಈ ವೇಳೆ, ರಾಜ್ಯದಲ್ಲಿ ಪರಿಸರ ಹಾಗೂ ಮಣ್ಣಿನ ಸಂರಕ್ಷಣೆ ಕುರಿತು ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

    ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ, ಬಿಟಿ, ಉನ್ನತ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಸಿಎಂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಮೊದಲಾದ ಹಿರಿಯ ಅಧಿಕಾರಿಗಳು ರಾಜ್ಯದ ತಂಡದಲ್ಲಿದ್ದರು.

  • ಚಳಿಯ ಭಯವಿದ್ದರೂ ವಿದೇಶ ಪ್ರಯಾಣಕ್ಕೆ ಓಕೆ ಎಂದ ಬಿಎಸ್‍ವೈ

    ಚಳಿಯ ಭಯವಿದ್ದರೂ ವಿದೇಶ ಪ್ರಯಾಣಕ್ಕೆ ಓಕೆ ಎಂದ ಬಿಎಸ್‍ವೈ

    ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿದೇಶ ಪ್ರಯಾಣಕ್ಕೆ ಕೊನೆಗೂ ಒಪ್ಪಿಗೆ ಸಿಕ್ಕಿದೆ. ಚಳಿಯ ಭಯದಿಂದ ಪ್ರವಾಸಕ್ಕೆ ಹಿಂದೆ ಮುಂದೆ ನೋಡುತ್ತಿದ್ದ ಬಿಎಸ್‍ವೈ ಅವರೇ ಸ್ವತಃ ಪ್ರಯಾಣಕ್ಕೆ ನಿನ್ನೆ ಒಪ್ಪಿಗೆ ಸೂಚಿಸಿದ್ದಾರೆ.

    ಸ್ವಿಜರ್ಲ್ಯಾಂಡ್ ದಾವೋಸ್‍ನಲ್ಲಿ ಜನವರಿ 21ರಿಂದ 24ರ ತನಕ ನಡೆಯಲಿರುವ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ಸಿಎಂ ಯಡಿಯೂರಪ್ಪ ರಾಜ್ಯದ ಪರವಾಗಿ ಭಾಗವಹಿಸಲಿದ್ದಾರೆ. ಸಿಎಂ ಬಿಎಸ್‍ವೈರೊಂದಿಗೆ ತೆರಳಿರುವ 13 ಮಂದಿ ತಂಡ ಕೂಡ ಸದ್ಯ ಅಂತಿಮವಾಗಿದೆ.

    ಬಿಎಸ್‍ವೈ ವಿದೇಶ ಪ್ರವಾಸಕ್ಕೆ 13 ಜನ ತಂಡ ಫಿಕ್ಸ್ ಆಗಿದ್ದು, ಅಧಿಕೃತ ಅಧಿಕಾರಿಗಳಲ್ಲದ ಗುಂಪಿನಲ್ಲಿ ಮೂವರು ಪ್ರಯಾಣ ಬೆಳಸಲಿದ್ದಾರೆ. ಸಿಎಂ ಬಿಎಸ್‍ವೈ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಸಿಎಂ ರಾಜಕೀಯ ಸಲಹೆಗಾರ ಕೂಡ ವಿದೇಶಕ್ಕೆ ತೆರಳಲಿದ್ದಾರೆ. ಉಳಿದಂತೆ ಅಧಿಕೃತ ಗ್ರೂಪ್‍ನಲ್ಲಿ ಮೂವರು ಐಎಎಸ್ ಅಧಿಕಾರಿಗಳು ಸೇರಿ ಆಪ್ತ ಕಾರ್ಯದರ್ಶಿಗಳು, ವಿವಿಧ ಅಧಿಕಾರಿಗಳು ಸೇರಿದಂತೆ 10 ಮಂದಿ ವಿದೇಶ ಪ್ರಯಾಣ ಮಾಡಲಿದ್ದಾರೆ. ಜ.19ರಂದು ಮಧ್ಯರಾತ್ರಿ ಸ್ವಿಜರ್ಲ್ಯಾಂಡ್‍ಗೆ ಬಿಎಸ್‍ವೈ ನೇತೃತ್ವದ 13 ಜನರ ತಂಡ ಪ್ರಯಾಣ ಬೆಳಸಲಿದ್ದು, ಜ.26ರ ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

    ವಿಶ್ವ ಆರ್ಥಿಕ ಸಮ್ಮೇಳನಕ್ಕೆ ದೇಶದ ಮೂವರು ಮುಖ್ಯಮಂತ್ರಿಗಳಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ಮಧ್ಯಪ್ರದೇಶದ ಸಿಎಂ ಕಮಲನಾಥ್ ಮತ್ತು ಕರ್ನಾಟಕದ ಸಿಎಂ ಯಡಿಯೂರಪ್ಪಗೆ ಆಹ್ವಾನವಿದೆ. ಆದರೆ ಚಳಿಯ ಕಾರಣ ನೀಡಿ ಯಡಿಯೂರಪ್ಪ ವಿದೇಶಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದರು ಎನ್ನಲಾಗಿತ್ತು. ಬಿಜೆಪಿ ಅಧಿಕಾರ ಇರುವ ರಾಜ್ಯಯೊಂದಕ್ಕೆ ಮಾತ್ರ ಆಹ್ವಾನ ನೀಡಲಾಗಿದ್ದು, ಇಂತಹ ಸನ್ನಿವೇಶದಲ್ಲಿ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಳಿಗೆ ಗೈರು ಹಾಜರಾದರೆ ಬೇರೆ ಅರ್ಥ ಬರುತ್ತದೆ ಎಂದು ದಾವೋಸ್‍ಗೆ ತೆರಳಲು ಸಿಎಮ ತೀರ್ಮಾನಿಸಿದ್ದಾರೆ ಎಂಂದು ಆಪ್ತ ಮೂಲಗಳು ತಿಳಿಸಿವೆ.