Tag: ವೀಣಾ ಕಾಶಪ್ಪನವರ್

  • ಟಿಕೆಟ್ ಕೈತಪ್ಪಿದ್ದಕ್ಕೆ ಗಳಗಳನೇ ಕಣ್ಣೀರು ಹಾಕಿದ ವೀಣಾ ಕಾಶಪ್ಪನವರ್

    ಟಿಕೆಟ್ ಕೈತಪ್ಪಿದ್ದಕ್ಕೆ ಗಳಗಳನೇ ಕಣ್ಣೀರು ಹಾಕಿದ ವೀಣಾ ಕಾಶಪ್ಪನವರ್

    – ಸ್ವತಂತ್ರ ಸ್ಪರ್ಧೆ ಬಗ್ಗೆ ನಿರ್ಧಾರ

    ಬಾಗಲಕೋಟೆ: ಸ್ವಾಭಿಮಾನಿ ಕಾರ್ಯಕರ್ತರ ಹಾಗೂ ಮುಖಂಡರ ಸಭೆ ಆಯೋಜನೆ ಮಾಡಿ ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ (Veena Kashappanavar) ಗಳಗಳನೇ ಕಣ್ಣೀರು ಹಾಕಿದ್ದಾರೆ.

    ಕಣ್ಣೀರು ಹಾಕುತ್ತಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ವೀಣಾ, ಟಿಕೆಟ್ ಸಿಗುತ್ತೆ ಎಂದು ಸಾಕಷ್ಟು ನೀರೀಕ್ಷೆ ಇಟ್ಟುಕೊಂಡಿದ್ದೆ, ಆದರೆ ಹೇಗೆ ಟಿಕೆಟ್ ಕೈ ತಪ್ಪಿದೆ ಎಂದು ಗೊತ್ತಾಗ್ತಿಲ್ಲ. ನಾಯಕರು ನಮ್ಮ ಜಿಲ್ಲೆಯ ಸ್ವಾಭಿಮಾನವನ್ನು ಮಾರಿಕೊಂಡಿದ್ದಾರೆ. ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದೆ, ಯಾರಿಂದ ಟಿಕೆಟ್ ತಪ್ಪಿತು ಎಂದು ಗೊತ್ತಿಲ್ಲ ಎಂದರು.

    ರಾಜ್ಯ ನಾಯಕರನ್ನು ಕೇಳಿದ್ರೆ ಜಿಲ್ಲಾ ನಾಯಕರ ಹೆಸರು ಹೇಳ್ತಾರೆ. ಜಿಲ್ಲಾ ನಾಯಕರನ್ನ ಕೇಳಿದ್ರೆ ರಾಜ್ಯ ನಾಯಕರ ಹೆಸರು ಹೇಳ್ತಿದ್ದಾರೆ. ಕಾರ್ಯಕರ್ತರ ಅಭಿಪ್ರಾಯ ಸ್ವೀಕರಿಸಿದ ಸ್ವತಂತ್ರ ಸ್ಪರ್ಧೆ ಬಗ್ಗೆ ನಿರ್ಧರಿಸುತ್ತೇನೆ ಎಂದು ವೀಣಾ ಕಾಶಪ್ಪನವರ್ ಹೇಳಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್‌ ಅಕ್ರಮದ ಬಗ್ಗೆ ಸಾಕ್ಷ್ಯಗಳೊಂದಿಗೆ ಕಾಂಗ್ರೆಸ್‌ ದೂರು ನೀಡಿತ್ತು: ಬಿಜೆಪಿ ತಿರುಗೇಟು

    ಬಾಗಲಕೋಟೆ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದಕ್ಕೆ ಸಭೆ ಆಯೋಜನೆ ಮಾಡಲಾಗಿತ್ತು. ನಗರದ ಚರಂತಿಮಠ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಹುನಗುಂದ ಶಾಸಕ ವಿಜಯಾನಂದ್ ಕಾಶಪ್ಪನವರ್ ಭಾಗಿಯಾಗಿದ್ದಾರೆ.

    ಈ ಬಾರಿಯ ಲೋಕಸಭಾ ಚುನಾವವಣೆಗೆ ಬಾಗಲಕೋಟೆಯಿಂದ ಸಂಯುಕ್ತಾ ಪಾಟೀಲ್‌ ಅವರಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ಘೋಷಿಸಲಾಗಿದೆ.

  • ಪಂಚಮಸಾಲಿಗಳ ಮಹಿಳಾ ಪೀಠಕ್ಕೆ ಬೆಂಬಲವಿಲ್ಲ: ವೀಣಾ ಕಾಶಪ್ಪನವರ

    ಪಂಚಮಸಾಲಿಗಳ ಮಹಿಳಾ ಪೀಠಕ್ಕೆ ಬೆಂಬಲವಿಲ್ಲ: ವೀಣಾ ಕಾಶಪ್ಪನವರ

    ಬೆಳಗಾವಿ: ಪೀಠಗಳಿಗಿಂತ ಮೀಸಲಾತಿಗೆ ಒತ್ತಡ ಹಾಕಲಿ, ಸತ್ಯಾಗ್ರಹ ಮಾಡಲಿ, ಹೋರಾಟ ಮಾಡಲಿ ಆದರೆ ಈ ಸಮಯದಲ್ಲಿ ಪೀಠ ಅಗತ್ಯವಿತ್ತಾ ಎಂದು ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ ವಾಗ್ದಾಳಿ ನಡೆಸಿದರು.

    ಲಿಂಗಾಯತ ಪಂಚಮಸಾಲಿ 4ನೇ ಮಹಿಳಾ ಪೀಠ ಸ್ಥಾಪನೆ ಸಿದ್ಧತೆ ವಿಚಾರವಾಗಿ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೀಠದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಜನರಿಗೂ ಗೊತ್ತಿದೆ. ಮೀಸಲಾತಿಗಾಗಿ ಮಹಿಳೆಯರಿಂದ ಹೋರಾಟ ಮುಂದುವರೆಯುತ್ತದೆ. ಗ್ರಾಮಗಳಲ್ಲಿ ಮಹಿಳೆಯರು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದೇವೆ. ಆದರೆ ನಾಲ್ಕನೇ ಪೀಠ ಮಹಿಳಾ ಪೀಠ ಮಾಡುತ್ತಾರೆ ಎನ್ನುವ ಮಾಹಿತಿ ಇದೆ ಎಂದು ಹೇಳಿದರು.

    ಕಿಶೋರಿ ಎನ್ನುವವರು ಈಗ ನಾಲ್ಕನೇ ಪೀಠ, ಮಹಿಳಾ ಪೀಠ ಮಾಡುತ್ತಿದ್ದಾರೆ. ಹೀಗಾಗಿ ನಾವು ಅವರನ್ನು ಕೈ ಬಿಟ್ಟಿದ್ದೇವೆ. ಇದನ್ನು ಮಹಿಳಾ ಘಟಕವು ವಿರೋಧಿಸುತ್ತದೆ. ನಮಗೆ ನಾಲ್ಕನೇ ಪೀಠದ ಅವಶ್ಯಕತೆ ಇಲ್ಲ. ನಾವು ಆ ಪೀಠಕ್ಕೆ ಬೆಂಬಲ ನೀಡುತ್ತಿಲ್ಲ. ಜನರ ಹಾದಿ ತಪ್ಪಿಸಲು ಹೊರಟಿದ್ದಾರೆ. ಇನ್ನೂ ನನ್ನ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆ. ನಾವು ಆ ಪೀಠಕ್ಕೆ ಬೆಂಬಲ ನೀಡಲ್ಲ ಎಂದು ಸ್ಪಷ್ಟ ಪಡಿಸಿದರು. ಇದನ್ನೂ ಓದಿ: ನಕಲಿ ಸಮಾಜವಾದ: ಅಖಿಲೇಶ್‌ ಯಾದವ್‌ ಪಕ್ಷದ ವಿರುದ್ಧ ಮೋದಿ ವಾಗ್ದಾಳಿ

  • ಜಿಲ್ಲಾ ಪಂಚಾಯಿತಿ ಅಧ್ಯಕ್ಷಗಿರಿಗೆ ಇಬ್ಬರು ಪ್ರತಿಷ್ಠಿತರ ನಡುವೆ ಶುರುವಾಗಿದೆ ಜಿದ್ದಾಜಿದ್ದಿ!

    ಜಿಲ್ಲಾ ಪಂಚಾಯಿತಿ ಅಧ್ಯಕ್ಷಗಿರಿಗೆ ಇಬ್ಬರು ಪ್ರತಿಷ್ಠಿತರ ನಡುವೆ ಶುರುವಾಗಿದೆ ಜಿದ್ದಾಜಿದ್ದಿ!

    -ವಿಜಯಾನಂದ ಕಾಶಪ್ಪನವರ್ ಪತ್ನಿ ವರ್ಸಸ್ ಹುಲ್ಲಪ್ಪ ಮೇಟಿ ಪುತ್ರಿ

    ಬಾಗಲಕೋಟೆ: ಲೋಕಸಭೆ ಚುನಾವಣೆಗೂ ಮುನ್ನವೇ ರಾಜ್ಯ ಕಾಂಗ್ರೆಸ್‍ನ ನಾಯಕರಲ್ಲಿ ಭಿನ್ನಮತ ಸೃಷ್ಟಿಯಾಗಿದ್ದು, ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್‍ನಲ್ಲೂ ಭಿನ್ನಮತ ಸ್ಫೋಟಗೊಂಡಿದೆ. ಜಿಲ್ಲಾಪಂಚಾಯಿತಿ ಅಧ್ಯಕ್ಷಗಿರಿಗಾಗಿ ಇಬ್ಬರು ಪ್ರತಿಷ್ಠಿತರ ನಡುವೆ ಕಾಳಗ ಶುರುವಾಗಿದ್ದು, ಕಾಂಗ್ರೆಸ್ಸಿಗರ ನಡೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಇರಿಸು-ಮುರಿಸು ಅನುಭವಿಸುವಂತಾಗಿದೆ.

    ಹಾಲಿ ಜಿಲ್ಲಾಪಂಚಾಯಿತಿ ಅಧ್ಯಕ್ಷೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ನಿ ವೀಣಾ ಕಾಶಪ್ಪನವರ್ ಅವರನ್ನ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ಸಿಗರಿಂದಲೇ ಸ್ಕೆಚ್ ರೆಡಿಯಾಗಿದೆ. ಶತಾಯ ಗತಾಯ ಅಧಿಕಾರದ ಗದ್ದುಗೆ ಹೀಡಿಯಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಮಾಜಿ ಸಚಿವ ಎಚ್.ವೈ.ಮೇಟಿ ಪುತ್ರಿ ಬಾಯಕ್ಕಾ ಮೇಟಿ ಬಂಡಾಯದ ಬಾವುಟ ಹಾರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

    ವೀಣಾ ಕಾಶಪ್ಪನವರ್ ಅವರನ್ನ ಕೆಳಗಿಳಿಸಬೇಕು, ಇಲ್ಲವಾದಲ್ಲಿ ಬಿಜೆಪಿ ಸದಸ್ಯರ ಜೊತೆ ಕೈ ಜೋಡಿಸಿ ಅಧ್ಯಕ್ಷಗಿರಿ ಪಟ್ಟ ಪಡೆಯುವುದಾಗಿ ಬಾಯಕ್ಕಾ ಮೇಟಿ ಪಟ್ಟು ಹಿಡಿದಿದ್ದಾರೆ. ಅಲ್ಲದೆ ಬಾಯಕ್ಕಾ ಮೇಟಿ ಬಿಜೆಪಿಗರನ್ನ ತಮ್ಮ 9 ಜನ ಜಿಲ್ಲಾಪಂಚಾಯಿತಿ ಸದಸ್ಯರ ಜೊತೆ ಸಂಪರ್ಕಿಸಿದ್ದಾರೆ. ಮೇಟಿಯವರ ಪುತ್ರಿಯ ನಡೆ ಈಗ ಬಾದಾಮಿ ಶಾಸಕರು ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಇರುಸು-ಮುರುಸು ಉಂಟು ಮಾಡಿದೆ. ಕಳೆದ ಬಾರಿ ಜಿಲ್ಲಾ ಪಂಚಾಯಿತಿ ಚುನಾವಣೆ ಬಳಿಕ ಒಟ್ಟು ಜಿಲ್ಲೆಯ 36 ಸ್ಥಾನಗಳಲ್ಲಿ ಕೇವಲ 17 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಬಿಜೆಪಿ 18ರಲ್ಲಿ ಜಯಭೇರಿ ಬಾರಿಸಿತ್ತು. ಆದ್ರೆ ಕಾಂಗ್ರೆಸ್‍ನ ಒಬ್ಬರು ಪಕ್ಷೇತರರ ಬೆಂಬಲ ಪಡೆದು ಹಾಗೂ ಇನ್ನೊಬ್ಬ ಬಿಜೆಪಿ ಸದಸ್ಯರ ಗೈರು ಉಳಿಸುವುದರ ಮೂಲಕ ಅಧ್ಯಕ್ಷಗಿರಿ ಪಟ್ಟ ಗಿಟ್ಟಿಸಿಕೊಂಡಿದ್ದರು.

    ಜಿಲ್ಲಾ ಕಾಂಗ್ರೆಸ್‍ನಲ್ಲಿ ಈ ಬೆಳವಣಿಗೆ ಕಳೆದ ಹಲವು ತಿಂಗಳುಗಳಿಂದ ನಡೆಯುತ್ತಿದ್ದು, ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆಗಳಲ್ಲಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ವಿರುದ್ಧ ಕೆಲವು ಸದಸ್ಯರು ಹರಿಹಾಯುತ್ತ ಬಂದಿದ್ದಾರೆ. ಸಾಮಾನ್ಯ ಸಭೆಗಳು ಸರಿಯಾಗಿ ನಡೆದ ಉದಾಹರಣೆಗಳಿಲ್ಲ. ಅಧ್ಯಕ್ಷ ಪಟ್ಟಕ್ಕೆ ಕುಳಿತು ಎರಡೂವರೆ ವರ್ಷಗಳಾಗಿದ್ದು, ಹೀಗಾಗಿ ಮತ್ತೊಬ್ಬರಿಗೆ ಅವಕಾಶ ಕೊಡಿ ಎಂದು ಬಾಯಕ್ಕಾ ಮೇಟಿ ಪಟ್ಟು ಹಿಡಿದಿದ್ದಾರಂತೆ. ಅಲ್ಲದೇ ಹಾಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಬಾಗಲಕೋಟೆ ಲೋಕಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದು, ಲೋಕಸಭೆ ಟಿಕೆಟ್ ನೀಡಿ, ಅಧ್ಯಕ್ಷೆ ಸ್ಥಾನವನ್ನು ತ್ಯಜಿಸುತ್ತೇನೆ ಎಂಬ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

    ಪಕ್ಷದ ವರಿಷ್ಠರು ಏನೇ ತೀರ್ಮಾಣ ತೆಗೆದುಕೊಂಡರೂ ಬದ್ಧ ಎಂದು ಇಬ್ಬರು ನಾಯಕಿಯರು ಮೇಲ್ನೋಟಕ್ಕೆ ಹೇಳುತ್ತಿದ್ದರೂ, ಆಂತರಿಕ ಕಲಹ ಮಾತ್ರ ಶಮನಗೊಂಡಿಲ್ಲ. ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ ಶಿಸ್ತು ಕ್ರಮ ಕಟ್ಟಿಟ್ಟ ಬುತ್ತಿ ಎಂದು ಬಾಯಕ್ಕಾ ಮೇಟಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ಅದೇನೆಯಾಗಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷಗಿರಿ ಪಟ್ಟ ಕಾಂಗ್ರೆಸ್ ಪಾಳಯದಲ್ಲಿ ಬಹುದೊಡ್ಡ ಬಿರುಗಾಳಿ ಎಬ್ಬಿಸಿದೆ. ಲೋಕಸಭೆ ಚುನಾವಣೆ ಸಮೀಪವಿರುವಾಗ್ಲೇ ಈ ಬೆಳವಣಿಗೆ ವರಿಷ್ಠರ ತಲೆ ನೋವಿಗೆ ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv