Tag: ಸಾಂತ್ವನ ಕೇಂದ್ರಗಳು

  • ಮದ್ಯದಂಗಡಿ ತೆರೆದು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ: ಎಚ್‍ಡಿಕೆ ಆಗ್ರಹ

    ಮದ್ಯದಂಗಡಿ ತೆರೆದು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ: ಎಚ್‍ಡಿಕೆ ಆಗ್ರಹ

    ಬೆಂಗಳೂರು: ಸಾಂತ್ವನ ಕೇಂದ್ರಗಳನ್ನು ಮುಚ್ಚದಂತೆ ಒತ್ತಾಯ ಮತ್ತು ಮಹಿಳಾ ಸಾಂತ್ವನ ಕೇಂದ್ರಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ಈ ಸಂಬಂಧ ಸರ್ಕಾರಕ್ಕೆ ಆಗ್ರಹಿಸಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. “ಮಹಿಳೆಯರು ಮತ್ತು ಮಕ್ಕಳ ವಿಷಯದಲ್ಲಿ ಸರ್ಕಾರ ಮಾತು ತಪ್ಪಿದೆ. ನೊಂದ ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳನ್ನು ಮುಂದುವರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಈ ಬಗ್ಗೆ ಮೌನಕ್ಕೆ ಶರಣಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಆದರೆ ಇದುವರೆಗೂ ಸಾಂತ್ವನ ಕೇಂದ್ರಗಳಿಗೆ ಒಂದು ನಯಾಪೈಸೆ ಬಿಡುಗಡೆ ಮಾಡದಿರುವುದು ಕೋವಿಡ್ 19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ ಎಂದಿದ್ದಾರೆ.

    ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ. ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ, ಆತ್ಮವಿಶ್ವಾಸ ಮೂಡಿಸುತ್ತಿವೆ ಎಂದು ಎಚ್‍ಡಿಕೆ ತಿಳಿಸಿದರು.

    ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಆರಂಭಗೊಂಡಿದ್ದ ಸಾಂತ್ವನ ಕೇಂದ್ರಗಳ ಸಿಬ್ಬಂದಿಗೂ ವೇತನವಿಲ್ಲ. ದೂರು ದುಮ್ಮಾನ ಪರಿಹರಿಸುವವರು ಯಾರು? ಎಂದು ಸರ್ಕಾರವನ್ನು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

    “ಲಾಕ್‍ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ. ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಈ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು” ಎಂದು ಕುಮಾರಸ್ವಾಮಿ ಆಗ್ರಹಿಸಿದರು.