Tag: bail rejected

  • ಲಾಲೂಗೆ ಜೈಲೇ ಗತಿ – ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ

    ಲಾಲೂಗೆ ಜೈಲೇ ಗತಿ – ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ

    ನವದೆಹಲಿ: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

    ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಲಾಲು ಪ್ರಸಾದ್ ಯಾದವ್ ಅವರ ಜಾಮೀನಿಗೆ ಸಿಬಿಐ ಆಕ್ಷಪಣೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಲಾಲೂಗೆ ಜಾಮೀನು ನೀಡಲು ನಿರಾಕರಿಸಿದೆ.

    ಮೇವು ಹಗರಣದಲ್ಲಿ ಭಾಗಿಯಾಗಿದ್ದ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾಧವ್‍ರಿಗೆ 25 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಸಂಬಂಧ ಸುಪ್ರೀಂಕೋರ್ಟ್ ಗೆ ಲಾಲೂ ಪ್ರಸಾದ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

    ಲಾಲೂ ಪರ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ಯಾಕೆ ಬಿಡುಗಡೆ ಮಾಡುತ್ತಿಲ್ಲ. ಜಾಮೀನು ಮಂಜೂರು ಮಾಡಿದರೆ ಏನು ಸಮಸ್ಯೆಯಾಗುತ್ತದೆ? ಈ ಪ್ರಕರಣ ಜಾಮೀನು ಸಿಗುವ ಕೇಸ್ ಆಗಿದೆ ಎಂದು ನ್ಯಾಯಾಧೀಶರ ಮುಂದೆ ಮನವಿ ಮಾಡಿದರು.

    ಆಕ್ಷೇಪಣೆ ಯಾಕೆ?
    ಅನಾರೋಗ್ಯದ ಹಿನ್ನೆಲೆಯಲ್ಲಿ ಲಾಲೂ ಪ್ರಸಾದ್ ಅವರಿಗೆ ಜಾಮೀನು ನೀಡಿದರೆ ಅವರು ಲೋಕಸಭಾ ಚುನಾವಣೆಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲು ಅನಾರೋಗ್ಯ ನೆಪ ಮಾಡಿಕೊಂಡು ಜಾಮೀನು ಕೋರುತ್ತಿದ್ದಾರೆ ಎಂದು ಸಿಬಿಐ ವಾದಿಸಿತ್ತು. ಈ ಹಿಂದೆ ಲಾಲೂ ಪ್ರಸಾದ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ರಾಂಚಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಗ ಹಲವು ರಾಜಕೀಯ ವ್ಯಕ್ತಿಗಳು ಭೇಟಿ ಮಾಡಿದ್ದರು. ಹೀಗಾಗಿ ಅವರಿಗೆ ಜಾಮೀನು ಮಂಜೂರು ಮಾಡಬಾರದು ಎಂದು ಸಿಬಿಐ ಆಕ್ಷೇಪಣೆ ಸಲ್ಲಿಸಿತ್ತು.

    ಏನಿದು ಪ್ರಕರಣ?
    20 ವರ್ಷಗಳ ಹಿಂದೆ ಬಿಹಾರದಲ್ಲಿ ಪಶುಗಳಿಗೆ ಮೇವು ಹಾಗೂ ಔಷಧಿ ಪೂರೈಸುವುದಾಗಿ ಚಾಯ್ಬಾಸ ಜಿಲ್ಲೆಯ ಸರ್ಕಾರಿ ಖಜಾನೆಯಿಂದ ಹಣವನ್ನು ಬಿಡುಗಡೆ ಮಾಡಲಾಗಿತ್ತು. ಜಾನುವಾರುಗಳಿಗೆ ಮೇವು ಹಾಗೂ ಔಷಧ ಒದಗಿಸುವ ನೆಪದಲ್ಲಿ ಅಧಿಕಾರಿಗಳು, ರಾಜಕಾರಣಿಗಳು ಸರ್ಕಾರದ ಹಣವನ್ನು ಲೂಟಿ ಮಾಡಿದ್ದರು. 900 ಕೋಟಿ ರೂ. ಮೊತ್ತದ ಮೇವು ಹಗರಣ ಸಂಬಂಧ ಒಟ್ಟು 53 ಪ್ರಕರಣಗಳು ದಾಖಲಾಗಿದ್ದವು. ಅದರಲ್ಲಿ 44 ಪ್ರಕರಣಗಳ ತೀರ್ಪು ಈಗಾಗಲೇ ಹೊರಬಿದ್ದಿದೆ. ಲಾಲು ಪ್ರಸಾದ್ ಯಾದವ್ ವಿರುದ್ಧ ಆರು ಪ್ರಕರಣಗಳು ದಾಖಲಾಗಿವೆ. 4 ಪ್ರಕರಣದಲ್ಲಿ ಲಾಲೂ ದೋಷಿಯಾಗಿದ್ದು, ಒಟ್ಟು 25 ವರ್ಷ ಕಾಲ ಲಾಲೂ ಪ್ರಸಾದ್ ಯಾದವ್ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.