Tag: BJP Manifesto

  • ಸಾವರ್ಕರ್‌ಗೆ ಭಾರತರತ್ನ – ಮಹಾರಾಷ್ಟ್ರ ಚುನಾವಣೆಗೆ ಬಿಜೆಪಿ ಭರವಸೆ

    ಸಾವರ್ಕರ್‌ಗೆ ಭಾರತರತ್ನ – ಮಹಾರಾಷ್ಟ್ರ ಚುನಾವಣೆಗೆ ಬಿಜೆಪಿ ಭರವಸೆ

    – ಸಂಕಲ್ಪಪತ್ರ ಹೆಸರಿನ ಪ್ರಾಣಳಿಕೆ ಬಿಡುಗಡೆ
    – 5 ವರ್ಷದಲ್ಲಿ 1 ಕೋಟಿ ಉದ್ಯೋಗ

    ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಈ ಬಾರಿ ಮತ್ತೆ ಅಧಿಕಾರಕ್ಕೆ ಏರಿದರೆ ವಿನಾಯಕ ದಾಮೋದರ ಸಾವರ್ಕರ್ ಅವರಿಗೆ ಭಾರತದ ಶ್ರೇಷ್ಠ ನಾಗರಿಕ ಪ್ರಶಸ್ತಿ ಭಾರತರತ್ನವನ್ನು ಮರಣೋತ್ತರವಾಗಿ ನೀಡಲಾಗುವುದು ಎಂದು ಭರವಸೆ ನೀಡಿದೆ.

    ಬಿಜೆಪಿ ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಮೂಲಕ ವಿನಾಯಕ ದಾಮೋದರ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಭರವಸೆ ನೀಡಿದೆ.

    ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಸಂಕಲ್ಪ ಪತ್ರವನ್ನು ಬಿಡುಗಡೆ ಮಾಡಿದರು. 44 ಪುಟಗಳ ಸಂಕಲ್ಪ ಪತ್ರದ ಮೂಲಕ ಮತದಾರರಿಗೆ ಅನೇಕ ಭರವಸೆಗಳನ್ನು ಬಿಜೆಪಿ ನೀಡಲಾಗಿದೆ. ಸಾವರ್ಕರ್ ಅವರಿಗೆ ಭಾರತರತ್ನ ನೀಡಬೇಕು ಎಂಬ ವಿಚಾರ ಈಗ ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಚರ್ಚೆಗೆ ಗ್ರಾಸವಾಗಿದೆ.

    ಸಾವರ್ಕರ್ ಯಾರು?
    ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಜನಿಸಿದ್ದ ಸಾವರ್ಕರ್ ಹಿಂದೂ ಮಹಾಸಭಾವನ್ನು ಸ್ಥಾಪಿಸಿ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ್ದರು. ಭಾರತ ಪಾಕಿಸ್ತಾನ ವಿಭಜನೆ ಮಾಡಲು ಒಪ್ಪಿಗೆ ನೀಡಿದ್ದಕ್ಕೆ ಗಾಂಧೀಜಿ ಅವರನ್ನು ಕಟುವಾಗಿ ವಿರೋಧಿಸಿದ್ದರು. ನಾಥೂರಾಮ್ ಗೂಡ್ಸೆ ಹಿಂದೂ ಮಹಾಸಭಾದ ಸದಸ್ಯನಾಗಿದ್ದ ಮತ್ತು ಗಾಂಧೀಜಿ ಹತ್ಯೆಯ ಮಾಸ್ಟರ್ ಮೈಂಡ್ ಸಾವರ್ಕರ್ ಎಂಬ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದ ಅಡಿ ಸರ್ಕಾರ ಬಂಧಿಸಿದ್ದರೂ ಗಾಂಧೀಜಿ ಹತ್ಯೆಯಲ್ಲಿ ಭಾಗಿಯಾದ ಬಗ್ಗೆ ಸಾಕ್ಷ್ಯಗಳು ಲಭ್ಯವಿಲ್ಲದ ಕಾರಣ ಸುಪ್ರೀಂ ಕೋರ್ಟ್ ಅವರನ್ನು ಬಿಡುಗಡೆಗೊಳಿಸಿತ್ತು.

    ಸಂಕಲ್ಪ ಪತ್ರದಲ್ಲಿ ಏನಿದೆ?
    ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರದ ಮತ್ತೆ ಅಧಿಕಾರಕ್ಕೆ ಬಂದರೆ ಮುಂದಿನ ಐದು ವರ್ಷಗಳಲ್ಲಿ 1 ಕೋಟಿ ಉದ್ಯೋಗ ಸೃಷ್ಟಿಸಲಾಗುತ್ತದೆ. ಕೃಷಿಯಲ್ಲಿ ಬಳಸುವ ವಿದ್ಯುತ್ ಸೌರಶಕ್ತಿಯನ್ನು ಆಧರಿಸಿರುತ್ತದೆ ಮತ್ತು ರೈತರಿಗೆ 12 ಗಂಟೆಗಳಿಗಿಂತ ಹೆಚ್ಚಿನ ವಿದ್ಯುತ್ ಒದಗಿಸಲಾಗುವುದು. 2022ರ ವೇಳೆಗೆ 5 ಲಕ್ಷ ಕೋಟಿ ರೂ. ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ಹೂಡಿಕೆ ಮಾಡಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತದೆ.

    ಗೋದಾವರಿ ಕಣಿವೆಯಿಂದ ಪಶ್ಚಿಮದಿಂದ ಹರಿಯುವ ನದಿಗಳ ನೀರನ್ನು ನಿಲ್ಲಿಸಿ ಮರಾಠವಾಡ ಮತ್ತು ಉತ್ತರ ಮಹಾರಾಷ್ಟ್ರದ ಬರ ಪೀಡಿತ ಭಾಗಕ್ಕೆ ಸಾಗಿಸಲಾಗುತ್ತದೆ. ಈ ಮೂಲಕ ಮುಂಬರುವ 5 ವರ್ಷಗಳಲ್ಲಿ ಮಹಾರಾಷ್ಟ್ರವನ್ನು ಬರಗಾಲದಿಂದ ಮುಕ್ತಗೊಳಿಸುತ್ತೇವೆ. ಮೂಲ ಸೌಕರ್ಯಗಳಿಗಾಗಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 5 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಾಗುವುದು.

    ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಮುಂದಿನ ಐದು ವರ್ಷಗಳಲ್ಲಿ ಗ್ರಾಮೀಣ ಪ್ರದೇಶ ಸೇರಿದಂತೆ ಒಟ್ಟು 30 ಸಾವಿರ ಕಿಲೋ ಮೀಟರ್ ರಸ್ತೆಯನ್ನು ನಿರ್ಮಿಸಲಾಗುತ್ತದೆ. ಅಷ್ಟೇ ಅಲ್ಲದೆ ಸಮಾಜ ಸುಧಾರಕ ಜ್ಯೋತಿ ರಾವ್ ಫುಲೆ, ಪತ್ನಿ ಸಾವಿತ್ರಿಭಾಯಿ ಫುಲೆ ಹಾಗೂ ವಿಡಿ ಸಾವರ್ಕರ್ ಅವರಿಗೆ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತದೆ.