Tag: BJP National general secretary organisation

  • ರಾಮಲಾಲ್ ಜಾಗಕ್ಕೆ ಬಿಎಲ್ ಸಂತೋಷ್ ನೇಮಕ

    ರಾಮಲಾಲ್ ಜಾಗಕ್ಕೆ ಬಿಎಲ್ ಸಂತೋಷ್ ನೇಮಕ

    ಬೆಂಗಳೂರು: ರಾಮಲಾಲ್ ಅವರ ರಾಜೀನಾಮೆಯಿಂದ ತೆರವಾದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ನೇಮಿಸಲಾಗಿದೆ.

    ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿ.ಎಲ್.ಸಂತೋಷ್ ಅವರನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಈ ನೇಮಕವು ತಕ್ಷಣದಿಂದ ಜಾರಿಗೆ ಬರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮಾಧ್ಯಮ ಹೇಳೆಕೆಯ ಮೂಲಕ ತಿಳಿಸಿದ್ದಾರೆ.

    ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದ ರಾಮಲಾಲ್ ಅವರು, ನನ್ನನ್ನು ಆರ್‌ಎಸ್‌ಎಸ್‌ಗೆ ಕಳುಹಿಸಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿ ಎಂದು ಮನವಿ ಮಾಡಿಕೊಂಡಿದ್ದರು. ಈ ನಿಟ್ಟಿನಲ್ಲಿ ರಾಮ್‍ಲಾಲ್ ಅವರ ಮನವಿಯನ್ನು ಆಲಿಸಿದ ಹೈಕಮಾಂಡ್ ಬಿಡುಗಡೆ ನೀಡಿದೆ. ಹೀಗಾಗಿ ರಾಮಲಾಲ್ ಅವರು 10 ವರ್ಷಗಳ ನಂತರ ಆರ್‌ಎಸ್‌ಎಸ್‌ಗೆ ವಾಪಸಾಗಿದ್ದಾರೆ.

    ರಾಮಲಾಲ್ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮಧ್ಯೆ ಪ್ರಮುಖ ಸಂವಹನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಾಮಾನ್ಯವಾಗಿ ಸಂಘಟನೆಯಲ್ಲಿ ಹಲವು ವರ್ಷಗಳ ದುಡಿದವರನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಈ ಹುದ್ದೆಯನ್ನು ನಿರ್ವಹಿಸಿದ್ದರು.

    ರಾಮಲಾಲ್ ಅಡಿಯಲ್ಲಿ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿದ್ದ ವಿ.ಸತೀಶ್ ಈಗ ಅವರ ಸ್ಥಾನ ತುಂಬಲಿದ್ದಾರೆ ಎನ್ನಲಾಗಿತ್ತು. ಆದರೆ ಈಗ ಬಿಜೆಪಿ ಹೈಕಮಾಂಡ್ ಬಿ.ಎಲ್.ಸಂತೋಷ್ ಅವರಿಗೆ ಮಣೆ ಹಾಕಿದೆ.

    ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಸಂಘಟಿಸುವ ಉದ್ದೇಶದಿಂದ ಬಿ.ಎಲ್.ಸಂತೋಷ್ ಅವರನ್ನು ನೇಮಕ ಮಾಡಲಾಗಿದೆ ಎನ್ನಲಾಗುತ್ತಿದೆ.