Tag: Controversial Law

  • ಭಾರತದಲ್ಲಿ ಸಲಿಂಗಕಾಮ ಅಪರಾಧವಲ್ಲ: 156 ವರ್ಷದ ಬ್ರಿಟಿಷ್ ಕಾನೂನು ರದ್ದು

    ಭಾರತದಲ್ಲಿ ಸಲಿಂಗಕಾಮ ಅಪರಾಧವಲ್ಲ: 156 ವರ್ಷದ ಬ್ರಿಟಿಷ್ ಕಾನೂನು ರದ್ದು

    ನವದೆಹಲಿ: ಸಲಿಂಗಕಾಮ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಈ ಮೂಲಕ 17 ವರ್ಷಗಳಿಂದ ನಡೆಯುತ್ತಿದ್ದ ಕಾನೂನು ಹೋರಾಟಕ್ಕೆ ಜಯ ಸಿಕ್ಕಿದೆ.

    ಸಲಿಂಗಕಾಮ ಅಪರಾಧ ಎಂದು ಪರಿಗಣಿಸುವ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 377ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಕೋರ್ಟ್ ಈ ತೀರ್ಪು ಪ್ರಕಟಿಸಿದೆ. ಕಾಲದ ಜೊತೆ ಕಾನೂನು ಕೂಡ ಬದಲಾಗಬೇಕು ಎಂದು ಹೇಳಿ ಐಪಿಸಿ 377 ಅನ್ನು ಅಸಿಂಧುಗೊಳಿಸಿದೆ. ಈ ಮೂಲಕ 156 ವರ್ಷದ ಹಿಂದಿನ ಬ್ರಿಟಿಷ್ ಕಾನೂನು ರದ್ದಾಗಿದೆ.

    ಇಬ್ಬರು ವಯಸ್ಕರು ಸಮ್ಮತಿಯಿಂದ ನಡೆಸುವ ಲೈಂಗಿಕ ಕ್ರಿಯೆ ಅಪರಾಧವಲ್ಲ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸಾಂವಿಧಾನಿಕ ಪೀಠ, ಕಳೆದ ಜುಲೈ 17 ರಂದು ತೀರ್ಪು ಕಾಯ್ದಿರಿಸಿತ್ತು.

    ಕೇಂದ್ರ ಸರ್ಕಾರ ಸೆಕ್ಷನ್ 377ರ ರದ್ದತಿ ವಿಚಾರವನ್ನು ನ್ಯಾಯಾಲಯದ ವಿವೇಚನೆಗೆ ಬಿಡುವುದಾಗಿ ಹೇಳಿತ್ತು. ಆದರೆ ಸಲಿಂಗ ವಿವಾಹ ಮತ್ತು ಕೆಲವು ಹಕ್ಕುಗಳ ವಿಚಾರದಲ್ಲಿ ಗೊಂದಲ ಉಂಟಾಗಬಹುದು ಎಂಬ ಕಳವಳವನ್ನು ವ್ಯಕ್ತಪಡಿಸಿತ್ತು.

    ಈ ಹಿಂದೆ ಅಂದರೆ 2009ರಲ್ಲಿ ದೆಹಲಿ ಹೈಕೋರ್ಟ್ ಸಲಿಂಗಕಾಮವು ಅಪರಾಧವಲ್ಲ ಎಂದು ತೀರ್ಪು ನೀಡಿತ್ತು. ಆದರೆ, 2014ರಲ್ಲಿ ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್ ತೀರ್ಪನ್ನು ವಜಾ ಮಾಡಿ, ಸಲಿಂಗಕಾಮವನ್ನು ಅಪರಾಧವೆಂದು ಘೋಷಿಸಿತ್ತು. ನಂತರ ಹೋಟೆಲ್ ಉದ್ಯಮಿ ಕೇಶವ್ ಸೂರಿ ಅವರು ಸೆಕ್ಷನ್ 377ರ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಇದಾದ ಬಳಿಕ ಹಮ್ಸಫರ್ ಟ್ರಸ್ಟ್ ನ ಅಶೋಕ್ ರಾವ್ ಕವಿ ಮತ್ತು ಆರಿಫ್ ಜಾಫರ್ ಏಪ್ರಿಲ್ 27ರಂದು ಸೆಕ್ಷನ್ ರದ್ದತಿಗೆ ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು. ಮೇ ತಿಂಗಳಿನಿಂದ ನಡೆದ ವಿಚಾರಣೆಯ ತೀರ್ಪು ಇಂದು ಹೊರಬಿದ್ದಿದೆ.

    ಐಪಿಸಿ ಸೆಕ್ಷನ್ 377 ಏನು ಹೇಳುತ್ತೆ?
    ಯಾವುದೇ ವ್ಯಕ್ತಿ, ಮಹಿಳೆ ಅಥವಾ ಪ್ರಾಣಿಗಳೊಂದಿಗೆ ನಿಸರ್ಗಕ್ಕೆ ವಿರುದ್ಧವಾಗಿ ಲೈಂಗಿಕ ಕ್ರಿಯೆ ನಡೆಸಿದರೆ, ಅದು ಅಪರಾಧ. ಇಂತಹ ಅಪರಾಧಕ್ಕೆ ಜೀವಾವಧಿ ಶಿಕ್ಷೆ ಅಥವಾ 10 ವರ್ಷ ಜೈಲು ಹಾಗೂ ದಂಡ ವಿಧಿಸಬಹುದಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv